ಹಸ್ತಪ್ರತಿಶಾಸ್ತ್ರ ವಿಭಾಗ, ಕನ್ನಡ ವಿಶ್ವವಿದ್ಯಾಲಯ ಹಂಪಿ ಕರ್ನಾಟಕ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ಹಾಗೂ ಕ.ರಾ.ಶಿ. ಸಂಸ್ಥೆಯ ಕಲ್ಯಾಣ ಕರ್ನಾಟಕ ಸಂಶೋಧನಾ ಕೇಂದ್ರ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಎರಡು ದಿನಗಳ ಕಾಲ ಹಸ್ತಪ್ರತಿ ಸಮ್ಮೇಳನ ನಡೆಯಲಿದೆ.
ಬೀದರ್ ನಗರದ ಕರ್ನಾಟಕ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಬೆಂಗಳೂರಿನ ಹಿರಿಯ ಹಸ್ತಪ್ರತಿ ಪಂಡಿತ ಡಾ.ನಾ. ಗೀತಾಚಾರ್ಯ ಅವರ ಸರ್ವಾಧ್ಯಕ್ಷತೆಯಲ್ಲಿ ಸಮ್ಮೇಳನ ನಡೆಯಲಿದೆ. ಹಿರಿಯ ವಿದ್ವಾಂಸರು, ಸಂಶೋಧಕರು ಹಾಗೂ ಕನ್ನಡ ಸಾಹಿತ್ಯ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ.
ಅಕ್ಟೋಬರ್ 27ರಂದು ಬೆ.10.30ಗಂಟೆಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ.ಡಿ.ವಿ.ಪರಮಶಿವಮೂರ್ತಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕರಾಶಿ ಸಂಸ್ಥೆ ಅಧ್ಯಕ್ಷರಾದ ಬಸವರಾಜ ಜಾಬಶಟ್ಟಿ ಅಧ್ಯಕ್ಷತೆ ವಹಿಸುವರು. ಬಸವಕಲ್ಯಾಣ ಅನುಭವ ಮಂಟಪ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಸಾನಿಧ್ಯ ವಹಿಸುವರು.
ಎರಡು ದಿನಗಳ ಸಮ್ಮೇಳನದಲ್ಲಿ ಕನ್ನಡ ಸಾಹಿತ್ಯ, ಹಸ್ತಪ್ರತಿಗಳ ಅಧ್ಯಯನ, ಸಂಶೋಧನೆ ಮತ್ತು ಕನ್ನಡದ ಸಾಹಿತ್ಯಿಕ ಪರಂಪರೆಯ ಕುರಿತು ನಡೆಯಲಿರುವ ಐದು ವಿವಿಧ ಗೋಷ್ಠಿಗಳಲ್ಲಿ ನಾಡಿನ ವಿದ್ವಾಂಸರು, ಚಿಂತಕರು, ಸಂಶೋಧಕರು ವಿಚಾರ ವಿನಿಮಯ ಮಾಡಿಕೊಳ್ಳಲಿದ್ದಾರೆ.
ಅ.28ರಂದು ಮಧ್ಯಾಹ್ನ 2.30ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಕಲಬುರಗಿ ಹಿರಿಯ ವಿದ್ವಾಂಸ ಡಾ.ವೀರಣ್ಣ ದಂಡೆ ಸಮಾರೋಪ ಭಾಷಣ ಮಾಡಲಿದ್ದಾರೆ.

ಕನ್ನಡ ನಾಡಿನ ಶ್ರೀಮಂತ ಸಾಹಿತ್ಯಿಕ, ಸಾಂಸ್ಕೃತಿಕ ಹಾಗೂ ಜ್ಞಾನ ಪರಂಪರೆಯ ಅಮೂಲ್ಯ ನಿಧಿಗಳಾದ ಹಸ್ತಪ್ರತಿಗಳ ಸಂರಕ್ಷಣೆ ಅಧ್ಯಯನ ಸಂಪಾದನೆ ಪ್ರಕಟಣೆ ಮತ್ತು ಪ್ರಸರಣದ ಮಹತ್ವವನ್ನು ಸಾರುವ ಉದ್ದೇಶದಿಂದ ಸಮ್ಮೇಳನ ಆಯೋಜಿಸಲಾಗಿದ್ದು, ಸಾಹಿತ್ಯಾಸಕ್ತರು, ವಿದ್ಯಾರ್ಥಿಗಳು, ಬರಹಗಾರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕೆಂದು
ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಸಚಿವ ಡಾ.ವಿರೂಪಾಕ್ಷಿ ಪೂಜಾರಹಳ್ಳಿ, ಹಸ್ತಪ್ರತಿಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ವೀರೇಶ ಬಡಿಗೇರ ಹಾಗೂ ಕರಾಶಿ ಸಂಸ್ಥೆಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಮತ್ತು ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ್ ಚನ್ನಶೆಟ್ಟಿ ಅವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಬೀದರ್ | ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರಾಗಿ ಬಸವರಾಜ ಬಲ್ಲೂರ ಆಯ್ಕೆ






