ಬೀದರ್ ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಪ್ರತಿ ಟನ್ ಕಬ್ಬಿಗೆ ₹4,000 ರಿಂದ ₹4,500 ಬೆಲೆ ನಿಗದಿಪಡಿಸಬೇಕು ಹಾಗೂ ಅರಣ್ಯ ಪ್ರದೇಶದ ಪ್ರಾಣಿಗಳಿಂದ ಬೆಳೆ ಹಾನಿಯಾಗದಂತೆ ರೈತರ ಹೊಲಗಳಿಗೆ ತಂತಿಬೇಲಿ ಅಳವಡಿಸಬೇಕು ಎಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.
ಈ ಕುರಿತು ಪಕ್ಷದ ಮುಖಂಡರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಸರಿಗೆ ಬರೆದ ಮನವಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಅಧಿಕಾರಿಗೆ ಸಲ್ಲಿಸಿದ್ದರು.
ಬೀದರ್ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಕಬ್ಬು ಬೆಳೆಯುತ್ತಿದ್ದು, ಉತ್ಪಾದನಾ ವೆಚ್ಚ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ರೈತರಿಗೆ ನ್ಯಾಯಯುತ ಬೆಲೆ ದೊರೆಯುವಂತೆ ಪ್ರತಿ ಟನ್ ಕಬ್ಬಿಗೆ ಕನಿಷ್ಠ ₹4,000 ರಿಂದ ₹4,500 ಬೆಲೆ ನಿಗದಿಪಡಿಸಬೇಕು. ಈಗಾಗಲೇ ಪಂಜಾಬ್ ರಾಜ್ಯದಲ್ಲಿ ಕಬ್ಬಿಗೆ ಪ್ರತಿ ಟನ್ಗೆ ₹4,160ರಷ್ಟು ಬೆಲೆ ನೀಡಲಾಗುತ್ತಿದೆ. ಇದೇ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ಸಮರ್ಪಕ ಬೆಲೆ ನಿಗದಿಪಡಿಸಬೇಕು ಎಂದು ಪಕ್ಷದ ಮುಖಂಡರು ಒತ್ತಾಯಿಸಿದ್ದಾರೆ.
ಬೀದರ್ ಜಿಲ್ಲೆಯ ಸುತ್ತಮುತ್ತ ಅರಣ್ಯ ಪ್ರದೇಶಗಳು ಇರುವುದರಿಂದ ಕಾಡುಪ್ರಾಣಿಗಳು ರೈತರ ಹೊಲಗಳಿಗೆ ನುಗ್ಗಿ ಕಬ್ಬು ಸೇರಿದಂತೆ ವಿವಿಧ ಬೆಳೆಗಳನ್ನು ನಾಶಪಡಿಸುತ್ತಿವೆ. ಇದರಿಂದ ರೈತರು ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ. ರೈತರ ಹೊಲಗಳಿಗೆ ಸರ್ಕಾರದ ವತಿಯಿಂದ ತಂತಿಬೇಲಿ ಅಳವಡಿಸಿ, ಕಾಡುಪ್ರಾಣಿಗಳ ಹಾವಳಿಯಿಂದ ಬೆಳೆಗಳನ್ನು ರಕ್ಷಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕಬ್ಬಿಗೆ ಸೂಕ್ತ ಬೆಲೆ ನಿಗದಿ ಹಾಗೂ ತಂತಿಬೇಲಿ ಅಳವಡಿಕೆ ಸೇರಿದಂತೆ ಅಗತ್ಯ ಕ್ರಮಗಳನ್ನು ಸರ್ಕಾರ ಕೂಡಲೇ ಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷದ ಮುಖಂಡರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ವಚನ ಕಲ್ಯಾಣ | ಸುಮ್ಮನೇಕೆ ದಿನಕಳೆವಿರಿ, ಸುಮ್ಮನೇಕೆ ಹೊತ್ತುಗಳೆವಿರಿ?
ಆಮ್ ಆದ್ಮಿ ಪಕ್ಷ ಜಿಲ್ಲಾಧ್ಯಕ್ಷ ಸಿದ್ದಪ್ಪ ಫುಲಾರಿ, ಪ್ರಧಾನ ಕಾರ್ಯದರ್ಶಿ ಎಂ.ಡಿ.ಜಾವಿದ್, ನಗರಾಧ್ಯಕ್ಷ ರಾಜಶೇಖರ ಜಿ., ಜಿಲ್ಲಾ ಉಪಾಧ್ಯಕ್ಷ ರಾಜಕುಮಾರ ಎನ್. ಪಾಟೀಲ್ ಸೇರಿದಂತೆ ಪಕ್ಷದ ಪ್ರಮುಖರಾದ ನಂದಿಬಸವ ಪಾಟೀಲ್, ವೆಂಕಟೇಶ ಪಾಟೀಲ್, ಸೈಯದ್ ಜಮ್ಮಿಲ್, ಎಂಡಿ ಶರೀಫ್, ರಾಮು ಓಂಕಾರ್, ವಿಠಲರಾವ್, ಮೋಹನಕುಮಾರ್, ಶಿವಕುಮಾರ್, ಕಂಟೆಪ್ಪಾ ಗುಪ್ತಾ, ಬಸವರಾಜ ಸ್ವಾಮಿ ಇತರರಿದ್ದರು.





