2027ರ ಜನಗಣತಿಯಲ್ಲಿ ಯಾವುದೇ ಮನೆ ಅಥವಾ ವ್ಯಕ್ತಿ ಹೊರಗುಳಿಯದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಎಚ್ಚರಿಕೆ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸುರೇಖಾ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಗುರುವಾರ ಭಾರತ ಜನಗಣತಿ 2027ರ ಎರಡನೇ ಹಂತದ ಕಾರ್ಯಾಚರಣೆಗಾಗಿ ಜನಗಣತಿ ಕಾರ್ಯನಿರ್ವಹಿಸಲಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಮುಂಬರುವ ಜನಗಣತಿ ಪ್ರಕ್ರಿಯೆಯ ಎರಡನೇ ಹಂತದ ಸಿದ್ಧತೆಗಳು ಹಾಗೂ ಮೇಲ್ವಿಚಾರಣಾ ಮಾರ್ಗಸೂಚಿಗಳ ಕುರಿತು ಈಗಾಗಲೇ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಗಿದೆ. ಜನಗಣತಿ ಕಾರ್ಯವನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ, ನಿಖರವಾದ ಮಾಹಿತಿಯನ್ನು ಸಂಗ್ರಹಿಸಬೇಕು ಎಂದು ತಿಳಿಸಿದರು.
ಜನಗಣತಿಯ ಮೊದಲ ಹಂತದಲ್ಲಿ ಯಶಸ್ವಿಯಾಗಿ ಪೂರ್ಣಗೊಂಡಿರುವ ಮನೆಗಳ ಪಟ್ಟಿ ಮಾಡುವಿಕೆಯ ಬ್ಲಾಕ್‌ಗಳನ್ನು ಈಗ ಜನಸಂಖ್ಯಾ ಗಣತಿಯ ಎರಡನೇ ಹಂತಕ್ಕೆ ವರ್ಗಾಯಿಸಲಾಗುತ್ತದೆ. ಮೊದಲ ಹಂತದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ ಗಣತಿದಾರರು (ಎನ್ಯುಮರೇಟರ್‌ಗಳು) ಮತ್ತು ಮೇಲ್ವಿಚಾರಕರು ತಮ್ಮ ಜವಾಬ್ದಾರಿಗಳನ್ನು ಮುಂದುವರಿಸಲಿದ್ದಾರೆ ಎಂದರು.
ಪ್ರತಿ ಕುಟುಂಬದ ಪ್ರತಿಯೊಬ್ಬ ಸದಸ್ಯರ ಮಾಹಿತಿಯನ್ನು ಗಣತಿಯಲ್ಲಿ ದಾಖಲಿಸುವುದು ಎರಡನೇ ಹಂತದ ಪ್ರಮುಖ ಉದ್ದೇಶವಾಗಿದೆ. ಈ ಬಾರಿಯ ಜನಗಣತಿ ಸಂಪೂರ್ಣವಾಗಿ ಡಿಜಿಟಲ್ ರೂಪದಲ್ಲಿ ನಡೆಯಲಿದ್ದು, ಮೊಬೈಲ್ ಆ್ಯಪ್ ಮತ್ತು ಸಿಎಂಎಸ್ ಪೋರ್ಟಲ್ ಮೂಲಕ ಮೇಲ್ವಿಚಾರಣೆ ನಡೆಸಲಾಗುತ್ತದೆ. ಸಾರ್ವಜನಿಕರಿಗೆ ಸ್ವಯಂ ಜನಗಣತಿ (Self-Enumeration) ಸೌಲಭ್ಯವನ್ನೂ ಕಲ್ಪಿಸಲಾಗಿದೆ ಎಂದರು.
ಜನಗಣತಿ ಉಸ್ತುವಾರಿ ಅಧಿಕಾರಿಗಳು ಮತ್ತು ಮೇಲ್ವಿಚಾರಕರು ಕ್ಷೇತ್ರಮಟ್ಟದಲ್ಲಿ ನಿರಂತರ ಪರಿಶೀಲನೆ ನಡೆಸಬೇಕು. ಯಾವುದೇ ಮನೆ ಅಥವಾ ವ್ಯಕ್ತಿ ಗಣತಿಯಿಂದ ಹೊರಗುಳಿಯದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ತರಬೇತಿ ಕಾರ್ಯಾಗಾರದಲ್ಲಿ ಜನಗಣತಿ-2027ರ ಎರಡನೇ ಹಂತದ ಜಿಲ್ಲಾ ನೋಡಲ್ ಅಧಿಕಾರಿ ಸತ್ಯೇಂದ್ರಕುಮಾರ ಅವರು ಜನಗಣತಿ ಕಾರ್ಯನಿರ್ವಹಿಸಲಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತರಬೇತಿ ನೀಡಿದರು.
ಬೀದರ ಸಹಾಯಕ ಆಯುಕ್ತ ಅಭಿನವ್ ಜೈನ್, ಬಸವಕಲ್ಯಾಣ ಸಹಾಯಕ ಆಯುಕ್ತ ಪ್ರಕಾಶ ಕುದರೆ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸೂರ್ಯಕಾಂತ ಬಿರಾದಾರ, ಜಿಲ್ಲಾ ಪಂಚಾಯಿತಿ ಸಿಪಿಒ ಕಿಶೋರಕುಮಾರ ದುಬೆ ಸೇರಿದಂತೆ ಜನಗಣತಿ ಕಾರ್ಯದಲ್ಲಿ ಭಾಗವಹಿಸಲಿರುವ ವಿವಿಧ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಇದನ್ನೂ ಓದಿ : ಬೀದರ್ | ಪ್ರಥಮ ದಲಿತ ಬಂಡಾಯ ಸಮ್ಮೇಳನ ಸರ್ವಾಧ್ಯಕ್ಷರಿಗೆ ಆಹ್ವಾನ




