ಬೀದರ್ ಜಿಲ್ಲೆಯ ರೇಷನ್ ಕಾರ್ಡ್‌ನಲ್ಲಿರುವ ಎಲ್ಲಾ ಕುಟುಂಬದ ಸದಸ್ಯರು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಈ ಹಿಂದೆ ಐದು ವರ್ಷಗಳ ಹಿಂದೆ ಇ-ಕೆವೈಸಿ ಮಾಡಿಸಿಕೊಂಡಿರುವ ಪಡಿತರ ಚೀಟಿ ಸದಸ್ಯರು ಕಡ್ಡಾಯವಾಗಿ ಪುನಃ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
“ಜಿಲ್ಲೆಯಲ್ಲಿ ಒಟ್ಟು 8,39,132 ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಐದು ವರ್ಷಗಳ ಹಿಂದೆ ಮಾಡಲಾಗಿದ್ದು, ಈ ಪೈಕಿ ಇದುವರೆಗೆ 14,062 ಸದಸ್ಯರು ಇ-ಕೆವೈಸಿ ಮಾಡಿಸಿಕೊಂಡಿದ್ದಾರೆ. ಇನ್ನೂ 8,25,070 ಸದಸ್ಯರು ಇ-ಕೆವೈಸಿ ಮಾಡಿಸಿಕೊಳ್ಳುವುದು ಬಾಕಿಯಿದ್ದು, ಅವರು ಕೂಡಲೇ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಇ-ಕೆವೈಸಿ ಪೂರ್ಣಗೊಳಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.
ವಯೋವೃದ್ಧರು, ಅಂಗವಿಕಲರು ಹಾಗೂ ಇತರ ಅರ್ಹ ಸದಸ್ಯರು ಐರಿಸ್ ಸ್ಕ್ಯಾನ್ ಮೂಲಕವೂ ಇ-ಕೆವೈಸಿ ಮಾಡಿಸಿಕೊಳ್ಳಬಹುದಾಗಿದೆ. ಸಾರ್ವಜನಿಕರು ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಇ-ಕೆವೈಸಿ ಕಾರ್ಯವನ್ನು ಪೂರ್ಣಗೊಳಿಸಿಕೊಳ್ಳಬೇಕು. ಇ-ಕೆವೈಸಿ ಸಂಗ್ರಹಣಾ ಕಾರ್ಯಕ್ಕಾಗಿ ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. ಇ-ಕೆವೈಸಿ ಸೇವೆ ಸಂಪೂರ್ಣ ಉಚಿತವಾಗಿರುತ್ತದೆ. ಯಾವುದೇ ನ್ಯಾಯಬೆಲೆ ಅಂಗಡಿ ವರ್ತಕರು ಇ-ಕೆವೈಸಿಗೆ ಸಂಬಂಧಿಸಿದಂತೆ ಶುಲ್ಕ ವಸೂಲಿ ಮಾಡಬಾರದು ಎಂದು ತಿಳಿಸಲಾಗಿದೆ.
ಇದನ್ನೂ ಓದಿ : ವಚನ ಕಲ್ಯಾಣ | ಈ ವಿಕಾರದ ಹಿಂಡ ಬಿಡಿಸಿ, ನಿಜ ನಿಳಯ ನಿಮ್ಮಂಗವ ತೋರಿ, ಸುಸಂಗದಲ್ಲಿರಿಸು!
ಹೆಚ್ಚಿನ ಮಾಹಿತಿಗಾಗಿ ಪಡಿತರ ಚೀಟಿ ಸದಸ್ಯರು ಸಹಾಯವಾಣಿ ಸಂಖ್ಯೆ 1967, ಸಂಬಂಧಪಟ್ಟ ತಾಲ್ಲೂಕಿನ ತಹಸೀಲ್ದಾರ್ ಕಚೇರಿ ಅಥವಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರ ಕಚೇರಿಯ 08482-226232 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.




