ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳು, ನಿಗಮಗಳು, ಮಂಡಳಿಗಳು, ಸ್ಥಳೀಯ ಸಂಸ್ಥೆಗಳು ಸೇರಿದಂತೆ ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 4.5 ಲಕ್ಷ ಹೊರಗುತ್ತಿಗೆ ನೌಕರರ ಹಿತದೃಷ್ಟಿಯಿಂದ ಕನಿಷ್ಠ ವೇತನ ಪರಿಷ್ಕರಣೆ ಕುರಿತು ಹೊರಡಿಸಿರುವ ಅಧಿಸೂಚನೆಯನ್ನು ಕಡ್ಡಾಯವಾಗಿ ಜಾರಿಗೆ ತರಬೇಕು ಎಂದು ಬೀದರ್ ಜಿಲ್ಲಾ ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘ ಒತ್ತಾಯಿಸಿದೆ.
ಈ ಕುರಿತು ನಗರದಲ್ಲಿ ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಜಿಲ್ಲಾಧ್ಯಕ್ಷ ಮುಜಾಯಿದ್ ಪಾಶಾ ಮಾತನಾಡಿ, “ವಿವಿಧ ಸರ್ಕಾರಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೂಡಲೇ ಕನಿಷ್ಠ ವೇತನ ಜಾರಿ ಮಾಡುವಂತೆ ಆದೇಶಿಸಬೇಕೆಂದು ಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಕನಿಷ್ಠ ವೇತನ ಉಪಸಮಿತಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರಿಗೆ ಮನವಿ ಸಲ್ಲಿಸಲಾಗುವುದು” ಎಂದರು.
ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರ ಜೀವನಮಟ್ಟ, ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಪ್ರಸ್ತುತ ಜೀವನ ವೆಚ್ಚವನ್ನು ಪರಿಗಣಿಸಿ ಕನಿಷ್ಠ ವೇತನವನ್ನು ಸಮರ್ಪಕವಾಗಿ ಪರಿಷ್ಕರಿಸುವುದು ಅತ್ಯಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆಯು ಕನಿಷ್ಠ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಅಧಿಸೂಚನೆ/ಆದೇಶ ಹೊರಡಿಸಿದ್ದು, ನೌಕರರಿಗೆ ಪರಿಷ್ಕೃತ ವೇತನ ದರ ನಿಗದಿಪಡಿಸುವ ಪ್ರಕ್ರಿಯೆ ಕೈಗೊಂಡಿದೆ ಎಂದು ತಿಳಿಸಿದರು.
ಪರಿಷ್ಕೃತ ಕನಿಷ್ಠ ವೇತನದ ಅನುಷ್ಠಾನದಲ್ಲಿ ಯಾವುದೇ ರೀತಿಯ ವಿಳಂಬವಾಗದಂತೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಸರ್ಕಾರಿ ಇಲಾಖೆಗಳು, ನಿಗಮಗಳು, ಮಂಡಳಿಗಳು, ಸ್ಥಳೀಯ ಸಂಸ್ಥೆಗಳು ಹಾಗೂ ಇತರೆ ಸರ್ಕಾರಿ ಸಂಸ್ಥೆಗಳಲ್ಲಿ ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಎಲ್ಲ ನೌಕರರಿಗೂ ಪರಿಷ್ಕೃತ ಕನಿಷ್ಠ ವೇತನ ಕಡ್ಡಾಯವಾಗಿ ಪಾವತಿಸುವಂತೆ ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರಿಗೆ ಸ್ಪಷ್ಟ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.
ಕನಿಷ್ಠ ವೇತನ ಪರಿಷ್ಕರಣೆಯ ಅಧಿಸೂಚನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಮೂಲಕ ಸಾವಿರಾರು ಹೊರಗುತ್ತಿಗೆ ನೌಕರರ ಆರ್ಥಿಕ ಸಂಕಷ್ಟಕ್ಕೆ ಪರಿಹಾರ ಕಲ್ಪಿಸಬೇಕು. ನೌಕರರ ಶ್ರಮಕ್ಕೆ ತಕ್ಕ ನ್ಯಾಯಯುತ ವೇತನ ದೊರೆಯುವಂತೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘ, ಬೀದರ್ ಜಿಲ್ಲಾ ಘಟಕ ಒತ್ತಾಯಿಸಿದೆ.
ಸಭೆಯಲ್ಲಿ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಶೇಕ್ ಸಾಜಿದ್, ವಿಜಯಕುಮಾರ ಸೇರಿದಂತೆ ಪ್ರಮುಖರಾದ ಸತೀಶ್ ಪಾಟೀಲ್, ಮಹಾದೇವ ಮಂಠಾಳ, ಜಗನ್ನಾಥ, ಮಂಜುನಾಥ, ವಿನಿತಾ, ಎಲಿಜಿಬೆತ್ ರಾಣಿ, ರೋಹಿತ್ ಲಾಂಬಳೆ ಅನೇಕರಿದ್ದರು.




