ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ನಡೆಸಿರುವ ದಾಳಿಯನ್ನು ತೀವ್ರವಾಗಿ ಖಂಡಿಸುವುದಾಗಿ ಬೀದರನ ಪ್ರಥಮ ದರ್ಜೆ ಪಿಡಬ್ಲ್ಯುಡಿ ಗುತ್ತಿಗೆದಾರ ಜೈಶೀಲಕುಮಾರ ತಿಳಿಸಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತನಿಖಾ ಸಂಸ್ಥೆಗಳು ನಿಷ್ಪಕ್ಷಪಾತವಾಗಿ ಹಾಗೂ ಕಾನೂನುಬದ್ಧವಾಗಿ ಕಾರ್ಯನಿರ್ವಹಿಸುವುದು ಅತ್ಯಂತ ಮಹತ್ವದ್ದಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕೇಂದ್ರ ತನಿಖಾ ಸಂಸ್ಥೆಗಳನ್ನು ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯ ಸರ್ಕಾರದ ಸಚಿವರ ವಿರುದ್ಧ ರಾಜಕೀಯ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇಂತಹ ಬೆಳವಣಿಗೆಗಳು ಸಾರ್ವಜನಿಕರಲ್ಲಿ ಹಲವು ಅನುಮಾನಗಳಿಗೆ ಕಾರಣವಾಗುತ್ತಿವೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.
ಸತೀಶ ಜಾರಕಿಹೊಳಿ ಅವರು ಸಾಮಾಜಿಕ ಕಳಕಳಿ ಹೊಂದಿರುವ ಹಿರಿಯ ರಾಜಕೀಯ ನಾಯಕರು ಹಾಗೂ ಸಾರ್ವಜನಿಕ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇಂತಹ ನಾಯಕರ ಮೇಲೆ ಹಠಾತ್ತನೆ ಇ.ಡಿ. ದಾಳಿ ನಡೆಸಿರುವುದು ಖಂಡನೀಯ. ತನಿಖಾ ಸಂಸ್ಥೆಗಳು ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗದೆ, ಕಾನೂನಿನ ಚೌಕಟ್ಟಿನಲ್ಲಿ ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೇಂದ್ರ ತನಿಖಾ ಸಂಸ್ಥೆಗಳ ಕಾರ್ಯವೈಖರಿ ಕುರಿತು ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಾಗೂ ಸಂಬಂಧಪಟ್ಟ ಸಂಸ್ಥೆಗಳು ಸಂಪೂರ್ಣ ಪಾರದರ್ಶಕತೆ ಕಾಪಾಡಬೇಕು. ರಾಜಕೀಯ ಭಿನ್ನಾಭಿಪ್ರಾಯಗಳ ಹಿನ್ನೆಲೆಯಲ್ಲಿ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಭಾವನೆ ಸಾರ್ವಜನಿಕರಲ್ಲಿ ಮೂಡದಂತೆ ಅಗತ್ಯ ಎಚ್ಚರಿಕೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇಡಿ ದಾಳಿ ಖಂಡಿಸಿದ ಮಾನವ ಬಂಧುತ್ವ ವೇದಿಕೆ
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ನಡೆಸಿರುವ ದಾಳಿ ಅಹಿಂದ ನಾಯಕರನ್ನು ಹತ್ತಿಕ್ಕುವ ಪ್ರಯತ್ನವಾಗಿದೆ ಎಂದು ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಯುವ ಘಟಕದ ಸಂಚಾಲಕ ಗೌತಮ ಮುತ್ತಂಗಿಕರ್ ಆರೋಪಿಸಿದ್ದಾರೆ.
ಸತೀಶ್ ಜಾರಕಿಹೋಳಿ ಅವರು ಅಲ್ಪಸಂಖ್ಯಾತರು, ಹಿಂದುಳಿದವರು ಹಾಗೂ ದಲಿತರ ಪರ ನಿರಂತರವಾಗಿ ಧ್ವನಿ ಎತ್ತುತ್ತಾ ಬಂದಿದ್ದಾರೆ. ಅಲ್ಲದೆ, ರಾಜ್ಯದ ಪ್ರಭಾವಿ ನಾಯಕರಾಗಿ ಹೊರಹೊಮ್ಮುತ್ತಿರುವ ಅವರ ರಾಜಕೀಯ ಬೆಳವಣಿಗೆಗೆ ತಡೆ ಒಡ್ಡುವ ಉದ್ದೇಶದಿಂದಲೇ ಇ.ಡಿ. ದಾಳಿ ನಡೆಸಲಾಗಿದೆ ಎಂದು ದೂರಿದ್ದಾರೆ.
ಇದನ್ನೂ ಓದಿ : ಹುಲಸೂರ ತಾಲೂಕು ಬರಪೀಡಿತ ಘೋಷಣೆಗೆ ಆಗ್ರಹ : ಮೂರನೇ ದಿನಕ್ಕೆ ಕಾಲಿಟ್ಟ ಅಹೋರಾತ್ರಿ ಧರಣಿ
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತನ್ನ ಅಧೀನದಲ್ಲಿರುವ ಜಾರಿ ನಿರ್ದೇಶನಾಲಯ (ಇ.ಡಿ.), ಸಿಬಿಐ ಸೇರಿದಂತೆ ವಿವಿಧ ತನಿಖಾ ಸಂಸ್ಥೆಗಳನ್ನು ರಾಜಕೀಯ ಉದ್ದೇಶಗಳಿಗೆ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಖಂಡನೀಯ. ತನಿಖಾ ಸಂಸ್ಥೆಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕಿದ್ದು, ರಾಜಕೀಯ ವಿರೋಧಿಗಳನ್ನು ಗುರಿಯಾಗಿಸಿಕೊಂಡು ಅವುಗಳನ್ನು ಬಳಸಿಕೊಳ್ಳುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವಂತಹದ್ದು ಎಂದು ಗೌತಮ ಮುತ್ತಂಗಿಕರ್ ಹೇಳಿದ್ದಾರೆ.





