ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿ ಅಪಮಾನಿಸಿರುವ ಅನಿವಾಸಿ ಭಾರತೀಯ ಲೇಖಕ ರವಿ ಹಂಜ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಸವ ಪರ ಸಂಘಟನೆಗಳ ಕಾರ್ಯಕರ್ತರು ಗುರುವಾರ ಬೀದರ್‌ನಲ್ಲಿ ಪ್ರತಿಭಟನೆ ನಡೆಸಿದರು.
ಜಾಗತಿಕ ಲಿಂಗಾಯತ ಮಹಾಸಭಾ ನೇತೃತ್ವದಲ್ಲಿ ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ವಿವಿಧ ಬಸವ ಪರ ಸಂಘಟನೆಗಳ ಕಾರ್ಯಕರ್ತರು ರವಿ ಹಂಜ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ರವಿ ಹುಂಜ ಅವರ ಪ್ರತಿಕೃತಿಗೆ ಚಪ್ಪಲಿ ಹಾರ ಹಾಕಿ, ಚಪ್ಪಲಿಯಿಂದ ಹೊಡೆದು ದಹಿಸಿ ಆಕ್ರೋಶ ಹೊರಹಾಕಿದರು.

ಬಳಿಕ ನ್ಯೂಟೌನ್ ಪೊಲೀಸ್ ಠಾಣೆಗೆ ತೆರಳಿದ ಜಾಗತಿಕ ಲಿಂಗಾಯತ ಮಹಾಸಭಾ, ರಾಷ್ಟ್ರೀಯ ಬಸವ ದಳ, ಭಾರತೀಯ ಬಸವ ಬಳಗ, ಲಿಂಗಾಯತ ಸಮಾಜ, ಬಸವ ಕೇಂದ್ರ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ರವಿ ಹಂಜ್ ವಿರುದ್ಧ ಸಾಮೂಹಿಕ ದೂರು ಸಲ್ಲಿಸಿದರು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರನ್ನು ಭೇಟಿ ಮಾಡಿ, ರವಿ ಹಂಜ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಸಲ್ಲಿಸಿದರು.
ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಬಸವರಾಜ ಧನ್ನೂರ ಮಾತನಾಡಿ, “ಸ್ವಯಂಘೋಷಿತ ಲೇಖಕ ರವಿ ಹಂಜ್ ಅವರು ಬಸವಣ್ಣನವರ ಜೀವನ ಹಾಗೂ ವಚನಗಳ ಕುರಿತು ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಇಡೀ ಲಿಂಗಾಯತ ಧರ್ಮದ ಅನುಯಾಯಿಗಳು ಹಾಗೂ ನಾಡಿನ ಸಮಸ್ತ ಜನರ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ. ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ದೊರೆಯಬಾರದು ಎಂಬ ಹುನ್ನಾರದಿಂದ ಕೆಲವು ಪಟ್ಟಭದ್ರ ಶಕ್ತಿಗಳು ಇಂತಹ ವಿಕೃತ ಮನೋಭಾವವನ್ನು ಪ್ರದರ್ಶಿಸುತ್ತಿವೆ. ಬಸವಣ್ಣನವರ ವ್ಯಕ್ತಿತ್ವ ಹಾಗೂ ವಚನ ಸಾಹಿತ್ಯಕ್ಕೆ ಮಾಡುವ ಇಂತಹ ಅಪಮಾನವನ್ನು ಎಂದಿಗೂ ಸಹಿಸುವುದಿಲ್ಲ. ಸರ್ಕಾರ ಕೂಡಲೇ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡು ರವಿ ಹಂಜ್ ಅವರನ್ನು ಬಂಧಿಸಿ, ಕಾನೂನು ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದರು.
ಇತಿಹಾಸದ ಕುರಿತು ವಿಮರ್ಶೆ ಮಾಡುವ ಸ್ವಾತಂತ್ರ್ಯ ಎಲ್ಲರಿಗೂ ಇದೆ. ಆದರೆ, ಸೂಕ್ತ ದಾಖಲೆ ಮತ್ತು ಆಧಾರಗಳಿಲ್ಲದೆ ಅವಹೇಳನಕಾರಿ ಪದಗಳನ್ನು ಬಳಸುವುದು ಸರಿಯಲ್ಲ. ಬಸವಣ್ಣನವರ ಘನತೆ ನಮ್ಮ ಸ್ವಾಭಿಮಾನದ ಪ್ರತೀಕವಾಗಿದ್ದು, ಶರಣರ ವಚನ ಪರಂಪರೆ ಹಾಗೂ ಬಸವ ತತ್ವಗಳ ಗೌರವದ ರಕ್ಷಣೆಗಾಗಿ ಕಾನೂನುಬದ್ಧ ಹೋರಾಟ ಮುಂದುವರಿಸಲಾಗುವುದು ಎಂದರು.
ಬಸವಪ್ರಭು ಸ್ವಾಮೀಜಿ ಮಾತನಾಡಿ, “12ನೇ ಶತಮಾನದಲ್ಲಿಯೇ ಸಮಾನತೆ, ಕಾಯಕ, ದಾಸೋಹ, ಸಾಮಾಜಿಕ ನ್ಯಾಯ ಹಾಗೂ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಬಸವಣ್ಣನವರು ಮಹಾನ್ ದಾರ್ಶನಿಕರು. ಅಂತಹ ಮಹಾನ್ ವ್ಯಕ್ತಿತ್ವದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ರವಿ ಹಂಜ್ ಅವರ ಎಲ್ಲ ಪಾಸ್‌ಪೊರ್ಟ್‌ಗಳನ್ನು ಭಾರತ ಸರ್ಕಾರ ರದ್ದುಗೊಳಿಸಬೇಕು.ಕೂಡಲೇ ರವಿ ಹಂಜ್ ವಿರುದ್ಧ ದೂರು ದಾಖಲಿಸಿ ಬಂಧಿಸಬೇಕು. ಆತನ ಕೃತಿ ಬಸವ ಮಂಟಪ ಕೃತಿ ಮುಟ್ಟುಗೋಲು ಹಾಕಬೇಕು” ಎಂದು ಒತ್ತಾಯಿಸಿದರು.

ರವಿ ಹಂಜ್ ಹೇಳಿಕೆ ಸರ್ಕಾರ ತನಿಖೆ ನಡೆಸಲಿ
ಬಸವಣ್ಣನವರ ಕುರಿತು ರವಿ ಹಂಜ ಅವರು ನೀಡಿರುವ ಹೇಳಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಸಂಬಂಧಪಟ್ಟ ಇಲಾಖೆಗಳ ಮೂಲಕ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಅವರ ಹೇಳಿಕೆಗಳಲ್ಲಿ ಕಾನೂನು ಉಲ್ಲಂಘನೆಯಾಗಿರುವುದು ಕಂಡುಬಂದಲ್ಲಿ ಸಂಬಂಧಪಟ್ಟ ಕಾನೂನುಗಳ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು.
ಆಕ್ಷೇಪಾರ್ಹ ಹೇಳಿಕೆಗಳನ್ನು ಒಳಗೊಂಡಿರುವ ಸಾಮಾಜಿಕ ಜಾಲತಾಣಗಳ ವಿಡಿಯೋ ಹಾಗೂ ಪೋಸ್ಟ್‌ಗಳನ್ನು ಸೈಬರ್ ಕ್ರೈಂ ವಿಭಾಗದ ಮೂಲಕ ಪರಿಶೀಲಿಸಿ, ಕಾನೂನುಬದ್ಧ ಕ್ರಮ ಜರುಗಿಸಬೇಕು. ರವಿ ಹಂಜ ಅವರ ಪಾಸ್‌ಪೋರ್ಟ್ ಹಾಗೂ ಕರ್ನಾಟಕ ರಾಜ್ಯ ಪ್ರವೇಶಕ್ಕೆ ಸಂಬಂಧಿಸಿದಂತೆ ಅನ್ವಯಿಸುವ ಕಾನೂನು ಮತ್ತು ನಿಯಮಗಳ ಅಡಿಯಲ್ಲಿ ಪರಿಶೀಲನೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಕೇಂದ್ರ ಮತ್ತು ರಾಜ್ಯ ಪ್ರಾಧಿಕಾರಗಳಿಗೆ ಶಿಫಾರಸು ಮಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಬಸವಣ್ಣನವರ ವ್ಯಕ್ತಿತ್ವ ಹಾಗೂ ಶರಣರ ವಚನ ಪರಂಪರೆಯ ಕುರಿತು ಅವಹೇಳನಕಾರಿ ವಿಷಯಗಳನ್ನು ಪ್ರಸಾರ ಮಾಡುವುದನ್ನು ತಡೆಯಲು ಕಾನೂನುಬದ್ಧವಾಗಿ ಸಾಧ್ಯವಿರುವ ಎಲ್ಲ ಕ್ರಮಗಳನ್ನು ಸರ್ಕಾರ ಕೈಗೊಳ್ಳಬೇಕು. ಅಲ್ಲದೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಸಂಘಟನೆಗಳಿಗೆ ಅಧಿಕೃತವಾಗಿ ಮಾಹಿತಿ ನೀಡಬೇಕು ಎಂದು ಒತ್ತಾಯಿಸಲಾಗಿದೆ.

ಪ್ರತಿಭಟನೆಯಲ್ಲಿ ಚನ್ನಬಸವಾನಂದ ಸ್ವಾಮೀಜಿ, ಮಾತೆ ಸತ್ಯದೇವಿ, ರಾಷ್ಟ್ರೀಯ ಬಸವ ದಳದ ಜಿಲ್ಲಾ ಅಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ, ಪ್ರಧಾನ ಕಾರ್ಯದರ್ಶಿ ಸುರೇಶ ಸ್ವಾಮಿ, ಜಿಲ್ಲಾ ಲಿಂಗಾಯತ ಸಮಾಜದ ಅಧ್ಯಕ್ಷ ಕುಶಾಲರಾವ್ ಪಾಟೀಲ ಖಾಜಾಪುರ, ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಉಷಾ ಮಿರ್ಚೆ, ಮಲ್ಲಮ್ಮ ಆರ್.ಪಾಟೀಲ, ಮಹಾಸಭಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಜೊನ್ನಿಕೇರಿ, ಪ್ರವೀಣ ಏಕಲಾರೆ, ಹಾವಶೆಟ್ಟಿ ಪಾಟೀಲ್, ರವಿ ಪಾಪಡೆ, ಯೋಗೇಶ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ಇದನ್ನೂ ಓದಿ : ಈ ದಿನ ಸಂಪಾದಕೀಯ | ಬರಗಾಲ, ಬೆಲೆ ಏರಿಕೆ, ಭ್ರಷ್ಟಾಚಾರ: ಬಡವರು ಬದುಕುವುದು ಹೇಗೆ?




