ವಿಶ್ವದಲ್ಲೇ ಅತ್ಯಂತ ಮಾದರಿಯಾದ ಹಾಗೂ ಬೃಹತ್ ಲಿಖಿತ ಸಂವಿಧಾನ ಹೊಂದಿರುವ ಭಾರತದಲ್ಲಿ ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿಯಲು ಮತ್ತು ಯುವಜನರಲ್ಲಿ ಸಂವಿಧಾನದ ಅರಿವು ಮೂಡಿಸಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರು ಮತ್ತು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಕರೆ ನೀಡಿದರು.
ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ʼಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
“ದೇಶದ ಭವಿಷ್ಯದ ಪ್ರಜೆಗಳಾದ ವಿದ್ಯಾರ್ಥಿಗಳಿಗೆ ಸಂವಿಧಾನದ ಆಶಯಗಳು, ಸದಾಶಯಗಳು ಹಾಗೂ ಹಕ್ಕು-ಬಾಧ್ಯತೆಗಳ ಕುರಿತು ಜಾಗೃತಿ ಮೂಡಿಸುವುದು ಈ ಆಚರಣೆಯ ಮುಖ್ಯ ಉದ್ದೇಶವಾಗಿದೆ. ಕಳೆದ ವರ್ಷ ಪ್ರಜಾಪ್ರಭುತ್ವ ದಿನದಂದು ಬಸವಕಲ್ಯಾಣದಿಂದ ಆರಂಭವಾದ ಬೃಹತ್ ಮಾನವ ಸರಪಳಿಯಲ್ಲಿ ಲಕ್ಷಾಂತರ ಜನರು ಭಾಗವಹಿಸುವ ಮೂಲಕ ರಾಜ್ಯಾದ್ಯಂತ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಲಾಗಿತ್ತು” ಎಂದರು.
ಇಂದಿನ ದಿನಗಳಲ್ಲಿ ಸಮಾಜದಲ್ಲಿ ಜಾತಿ, ಧರ್ಮಗಳ ಹೆಸರಿನಲ್ಲಿ ಭಾವನಾತ್ಮಕ ವಿಷಯಗಳನ್ನು ಕೆರಳಿಸಿ ಸಮಾಜವನ್ನು ಒಡೆಯುವ ಪ್ರಯತ್ನಗಳು ನಡೆಯುತ್ತಿವೆ. ಇದರ ವಿರುದ್ಧ ಪ್ರತಿಯೊಬ್ಬರೂ ಸೋದರತ್ವ, ಸಹಬಾಳ್ವೆ ಹಾಗೂ ಸಾಮರಸ್ಯದ ಸಮಾಜ ನಿರ್ಮಾಣಕ್ಕೆ ಪೂರಕವಾಗಿ ನಿಲ್ಲಬೇಕು. ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿಕಲ್ಪನೆಯಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ತಲುಪಿ, ಆತ ಸಬಲನಾದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ. ತಳಸಮುದಾಯಗಳ ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಯು ಇಡೀ ದೇಶಕ್ಕೆ ಶಕ್ತಿ ತರುತ್ತದೆ” ಎಂದು ಹೇಳಿದರು.

“ಎಐ ಹಾಗೂ ರೊಬೊಟಿಕ್ಸ್‌ನ ಯುಗದಲ್ಲಿ ಜ್ಞಾನವೇ ನಿಜವಾದ ಶಕ್ತಿಯಾಗಿದೆ. ಡಾ. ಬಿ.ಆರ್.ಅಂಬೇಡ್ಕರ್ ಅವರ ‘ಶಿಕ್ಷಣ, ಸಂಘಟನೆ, ಹೋರಾಟ’ ಎಂಬ ಮೂರು ಸೂತ್ರಗಳಂತೆ ಯುವಜನತೆ ಉನ್ನತ ಶಿಕ್ಷಣ ಪಡೆದು ಸ್ಪರ್ಧಾತ್ಮಕ ಜಗತ್ತಿನಲ್ಲಿ ಆತ್ಮವಿಶ್ವಾಸದಿಂದ ಮುನ್ನಡೆಯಬೇಕು. ದೇಶದ ಐಕ್ಯತೆ, ಅಖಂಡತೆ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ರಕ್ಷಿಸಲು ಪ್ರತಿಯೊಬ್ಬರೂ ಸಂವಿಧಾನಬದ್ಧವಾಗಿ ನಡೆದುಕೊಳ್ಳುವುದು ಅಗತ್ಯ. ಸಂವಿಧಾನವು ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ಆಡಳಿತವನ್ನು ಟೀಕಿಸುವ ಹಕ್ಕನ್ನು ನೀಡಿದೆ. ಆದರೆ ಸಮಾಜದಲ್ಲಿ ದ್ವೇಷ ಬಿತ್ತುವುದು ಅಥವಾ ಸುಳ್ಳು ಸುದ್ದಿಗಳನ್ನು ಹಬ್ಬಿಸುವುದು ಸ್ವಾತಂತ್ರ್ಯವಲ್ಲ” ಎಂದರು.
12ನೇ ಶತಮಾನದಲ್ಲೇ ಬಸವಾದಿ ಶರಣರು ‘ಅನುಭವ ಮಂಟಪ’ದ ಮೂಲಕ ಪ್ರಜಾಪ್ರಭುತ್ವಕ್ಕೆ ಬಲಿಷ್ಠ ಬುನಾದಿ ಹಾಕಿದ್ದರು. ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಹಾಗೂ ಬುದ್ಧ, ಬಸವಣ್ಣನವರ ತತ್ವಗಳನ್ನು ವೈಯಕ್ತಿಕ ಜೀವನದಲ್ಲಿ ಅಳವಡಿಸಿಕೊಂಡರೆ ಎಂತಹ ಸವಾಲುಗಳನ್ನೂ ಎದುರಿಸಲು ಸಾಧ್ಯವಾಗುತ್ತದೆ ಎಂದರು.
ಜಿಲ್ಲೆಯಲ್ಲಿ ಶಿಕ್ಷಣ, ಆರೋಗ್ಯ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಹೆಚ್ಚಿಸಲು ಆದ್ಯತೆ ನೀಡಲಾಗಿದೆ. ಕೆಕೆಆರ್‌ಡಿಬಿ ಅನುದಾನದಡಿ ₹15 ಕೋಟಿ ವೆಚ್ಚದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನಾ ಕೇಂದ್ರ ಸ್ಥಾಪನೆಗೆ ಅನುಮೋದನೆ ದೊರೆತಿದ್ದು, ಶೀಘ್ರದಲ್ಲೇ ಶಂಕುಸ್ಥಾಪನೆ ನೆರವೇರಿಸಲಾಗುವುದು. ವಿವಿಧತೆಯಲ್ಲಿ ಏಕತೆಯೇ ಭಾರತದ ನಿಜವಾದ ಶಕ್ತಿಯಾಗಿದ್ದು, ಜಿಲ್ಲೆಯಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯವನ್ನು ಕಾಪಾಡಿಕೊಂಡು ಅಭಿವೃದ್ಧಿಯತ್ತ ಕೊಂಡೊಯ್ಯಲು ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಮಾಜಿ ಸಚಿವ ಹಾಗೂ ಶಾಸಕ ರಹೀಮ್ ಖಾನ್ ಮಾತನಾಡಿ, “ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನ ಅವಕಾಶ ಸಿಗಲು ಸಂವಿಧಾನವೇ ಮೂಲ ಕಾರಣವಾಗಿದೆ. ವಿಶ್ವರತ್ನ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶಿಕ್ಷಣ ಪಡೆಯುವ ಸಂದರ್ಭದಲ್ಲಿ ಸಾಕಷ್ಟು ಅಡೆತಡೆಗಳು ಹಾಗೂ ಸೌಲಭ್ಯಗಳ ಕೊರತೆ ಎದುರಿಸಿದರೂ ಉತ್ತಮ ಶಿಕ್ಷಣ ಪಡೆದು ವಿಶ್ವದ ಶ್ರೇಷ್ಠ ಸಂವಿಧಾನವನ್ನು ರಚಿಸಿದರು. ಇಂದಿನ ವಿದ್ಯಾರ್ಥಿಗಳಿಗೆ ಸಾಕಷ್ಟು ಅವಕಾಶಗಳಿವೆ. ಅವುಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆದು ಉತ್ತಮ ನಾಯಕರಾಗಿ ರೂಪುಗೊಳ್ಳಬೇಕು” ಎಂದು ಕರೆ ನೀಡಿದರು.
ವಿಶೇಷ ಉಪನ್ಯಾಸ ನೀಡಿದ ಭಾಲ್ಕಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಮನಬಾಯಿ ಶಿಂಧೆ, “ಪ್ರಜಾಪ್ರಭುತ್ವ ಎಂದರೆ ಕೇವಲ ಚುನಾವಣೆ, ಮತದಾನ ಅಥವಾ ಸರ್ಕಾರ ರಚನೆಯಷ್ಟೇ ಅಲ್ಲ. ಅದು ಜನರ ಪಾಲ್ಗೊಳ್ಳುವಿಕೆ, ಸಮಾನತೆ, ಸ್ವಾತಂತ್ರ್ಯ, ನ್ಯಾಯ, ಬಂಧುತ್ವ ಹಾಗೂ ಜವಾಬ್ದಾರಿಯುತ ಆಡಳಿತವನ್ನು ಒಳಗೊಂಡ ವ್ಯವಸ್ಥೆಯಾಗಿದೆ” ಎಂದು ಹೇಳಿದರು.

“ಭಾರತದಲ್ಲಿ ಪ್ರಜಾಪ್ರಭುತ್ವದ ಬೇರುಗಳು ಅತ್ಯಂತ ಪ್ರಾಚೀನವಾಗಿವೆ. ಜಿಲ್ಲೆಯ ಬಸವಕಲ್ಯಾಣದಲ್ಲಿ ಬಸವಣ್ಣನವರು ಸ್ಥಾಪಿಸಿದ ‘ಅನುಭವ ಮಂಟಪ’ವು ಪ್ರಜಾಪ್ರಭುತ್ವದ ಚರ್ಚಾ ಪರಂಪರೆಗೆ ಮಾದರಿಯಾಗಿತ್ತು. ಇಲ್ಲಿ ಜಾತಿ, ಮತ, ಲಿಂಗ ಭೇದವಿಲ್ಲದೆ ಗಂಗಾಂಬಿಕೆ, ನೀಲಾಂಬಿಕೆ, ಅಕ್ಕಮಹಾದೇವಿ ಸೇರಿದಂತೆ ಎಲ್ಲ ಶರಣ-ಶರಣೆಯರಿಗೆ ಮುಕ್ತ ಚರ್ಚೆಗೆ ಸಮಾನ ಅವಕಾಶ ಕಲ್ಪಿಸಲಾಗಿತ್ತು. ಇದಲ್ಲದೆ, 1881ರಲ್ಲಿ ಮೈಸೂರು ಸಂಸ್ಥಾನದಲ್ಲಿ ಸ್ಥಾಪನೆಯಾದ ಮೈಸೂರು ಪ್ರತಿನಿಧಿ ಸಭೆಯು ಕರ್ನಾಟಕದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ಪ್ರಮುಖ ಮೈಲಿಗಲ್ಲಾಗಿದೆ” ಎಂದರು.
ಇಂದಿನ ಭಾರತೀಯ ಪ್ರಜಾಪ್ರಭುತ್ವದಲ್ಲಿ ಸಾರ್ವತ್ರಿಕ ವಯಸ್ಕ ಮತದಾನ, ಸಂಸದೀಯ ಚರ್ಚೆ, ಸ್ವತಂತ್ರ ನ್ಯಾಯಾಂಗ ಹಾಗೂ ಮೂಲಭೂತ ಹಕ್ಕುಗಳು ಪ್ರಮುಖ ಪಾತ್ರ ವಹಿಸುತ್ತವೆ. ಇಂದಿನ ಯುವಕರೇ ನಾಳೆಯ ಪ್ರಜೆಗಳು. ಆದ್ದರಿಂದ ಯುವಜನತೆ ಸಂವಿಧಾನವನ್ನು ಅರಿತುಕೊಳ್ಳಬೇಕು, ತಮ್ಮ ಹಕ್ಕು ಮತ್ತು ಕರ್ತವ್ಯಗಳನ್ನು ಪಾಲಿಸಬೇಕು ಹಾಗೂ ಸಮಾಜದ ಹಿತಕ್ಕಾಗಿ ಪ್ರಶ್ನಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಜಾಗೃತಿ ಜಾಥಾ
ಕಾರ್ಯಕ್ರಮಕ್ಕೂ ಮುನ್ನ ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರು ಮತ್ತು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು, ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು.
ಜಾಥಾವು ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಆರಂಭವಾಗಿ ನಗರದ ವಿವಿಧ ಪ್ರಮುಖ ವೃತ್ತಗಳ ಮೂಲಕ ಸಾಗಿ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಮುಕ್ತಾಯಗೊಂಡಿತು.
ಇದನ್ನೂ ಓದಿ : ಬೀದರ್ | ಮುಂದಿನ ಎಲ್ಲ ಚುನಾವಣೆಯಲ್ಲಿ ʼಆಪ್ʼ ಸ್ಪರ್ಧೆ : ಸಿದ್ದಪ್ಪ ಫುಲಾರಿ
ಸಮಾರಂಭದಲ್ಲಿ ಭೀಮರಾಯನಗುಡಿ ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬು ಹೊನ್ನನಾಯ್ಕ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಸಂಜಯ ಮಠಪತಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠಲ್‌ರಾವ್, ಅಪರ ಜಿಲ್ಲಾಧಿಕಾರಿ ಸುರೇಖಾ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಡಾ.ಯೋಗೀಶ್ ಎಸ್.ಬಿ. ಸೇರಿದಂತೆ ವಿವಿಧ ಸಮಾಜದ ಮುಖಂಡರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.




