ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ದೇಶದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿ ವಧರ್ಮೇಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂಬ ಆಗ್ರಹದೊಂದಿಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.
ಗುರುವಾರ ಬೀದರ್ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಘೋಷಣೆ ಕೂಗಿದರು. ಬಳಿಕ ಪ್ರವಾಸಿ ಮಂದಿರ ಎದುರುಗಡೆ ಧರಣಿ ಸತ್ಯಾಗ್ರಹ ನಡೆಸಿ. ಪ್ರಧಾನ ಮಂತ್ರಿಗಳ ಹೆಸರಿಗೆ ಬರೆದ ಮನವಿಯನ್ನು ಸ್ಥಳಕ್ಕೆ ಆಗಮಿಸಿದ ಗ್ರೇಡ್-2 ತಹಸೀಲ್ದಾರ್ ಅವರಿಗೆ ಸಲ್ಲಿಸಿದರು.
ಮುಖಂಡರು ಮಾತನಾಡಿ, “ದೇಶದ ಪರೀಕ್ಷಾ ವ್ಯವಸ್ಥೆಯಲ್ಲಿ ಹೆಚ್ಚುತ್ತಿರುವ ಅವ್ಯವಸ್ಥೆಗಳು ವಿದ್ಯಾರ್ಥಿಗಳ ಭವಿಷ್ಯವನ್ನು ಆತಂಕಕ್ಕೆ ದೂಡುತ್ತಿವೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ಪರೀಕ್ಷಾ ಅಕ್ರಮಗಳಿಗೆ ಕೇಂದ್ರ ಸರ್ಕಾರ ನೈತಿಕ ಹೊಣೆ ಹೊತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.
ದೇಶದ ಪರೀಕ್ಷಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸುಧಾರಣೆಯಾಗಬೇಕು. ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳಲ್ಲಿನ ಅಕ್ರಮಗಳಿಗೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ದೆಹಲಿ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚೂಕ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಶಾಂತಿಯುತ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಿದರು. ಜು.20ರಂದು ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಸಂಸತ್ ಚಲೋ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ಹಾಗೂ ಟಿಯರ್ ಗ್ಯಾಸ್ ಪ್ರಯೋಗ ಮಾಡಿರುವುದು ಖಂಡನೀಯವಾಗಿದೆ. ಪರೀಕ್ಷಾ ಅಕ್ರಮಗಳಿಂದ ಸಂಕಷ್ಟಕ್ಕೊಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡಬೇಕು. ಜೀವ ಕಳೆದುಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲಿಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ. ನೀಟ್ ಪರೀಕ್ಷಾ ಅಕ್ರಮಗಳಿಗೆ ನ್ಯಾಯ ಸಿಗಬೇಕು. ದೆಹಲಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿ, ಯುವಜನರ ಹೋರಾಟಕ್ಕೆ ಸಂಪೂರ್ಣವಾಗಿ ಬೆಂಬಲಿಸುತ್ತೇವೆ. ಜನರ ಹಕ್ಕುಗಳಿಗೆ ಗೌರವ ಸಿಗಬೇಕು ಹಾಗೂ ಜನಪ್ರತಿನಿಧಿಗಳು ಜನರ ಆಶಯಗಳಿಗೆ ಉತ್ತರದಾಯಕರಾಗಿರಬೇಕು ಎಂದು ತಿಳಿಸಿದರು.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ನತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ದೇಶದ ಪರೀಕ್ಷಾ ವ್ಯವಸ್ಥೆಯಲ್ಲಿನ ಅವ್ಯವಸ್ಥೆಯನ್ನು ಸಂಪೂರ್ಣವಾಗಿ ಸರಿಪಡಿಸಬೇಕು. ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಹಾಗೂ ಟಿಯರ್ ಗ್ಯಾಸ್ ಪ್ರಯೋಗ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ಹಾನಿಗೊಳಗಾದ ಹಾಗೂ ಜೀವ ಕಳೆದುಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂಬ ಬೇಡಿಕೆಯಿಟ್ಟರು.
ಇದನ್ನೂ ಓದಿ : ಬೀದರ್ | ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ತಕ್ಷಣ ಜಾರಿಗೆ ಆಗ್ರಹಿಸಿ ಸಾಂಕೇತಿಕ ಪ್ರತಿಭಟನೆ
ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಮಾರುತಿ ಬೌದ್ಧೆ, ಜಿಲ್ಲಾ ಸಂಚಾಲಕ ಅರುಣ ಪಟೇಲ್, ಜಿಲ್ಲಾ ಸಂಘಟನಾ ಸಂಚಾಲಕ ಅಶೋಕ ಗಾಯಕವಾಡ, ರಮೇಶ ಉಮಾಪುರೆ ಹಾಗೂ ತಾಲ್ಲೂಕು ಸಂಚಾಲಕರಾದ ಝರೆಪ್ಪಾ ವರ್ಮಾ ಮತ್ತು ವಾಮನರಾವ್ ಮೈಸಲಗೆ ಸೇರಿದಂತೆ ಪ್ರಮುಖರಾದ ದಲಿತ ಕಲಾ ಮಂಡಳಿ ಜಿಲ್ಲಾ ಸಂಚಾಲಕ ಶಿವರಾಜ ತಡಪಳ್ಳಿ, ಶಿರೋಮಣಿ ಹಲಗೆ, ಸತೀಶ್ ರತ್ನಾಕರ್, ರಮೇಶ್ ಬೆಲ್ದಾರ್, ಉದಯ ನಾಯಕ್, ವಿಜಯಕುಮಾರ್ ಭಾವಿಕಟ್ಟಿ, ರಾಹುಲ್ ಹಾಲಹಿಪ್ಪರಗಾ, ಮಹೇಶ್ ಗೋರನಾಳಕರ್, ಬಾಬುರಾವ ಹೊನ್ನಾ, ಮುಕೇಶ್ ರಾಯ್, ವಿನೋದ್ ಭಂಗೆ, ಬಸವರಾಜ್ ಭಾವಿದೊಡ್ಡಿ, ಗೌತಮ್ ಮುತ್ತಂಗಿಕರ್, ರಾಜು ಕಾಂಬಳೆ, ಜಯಭೀಮ್ ಚಿಮನಾಯಕ್, ಶ್ರೀನಿವಾಸ್ ದಯಾಳ , ವಿನಯಕುಮಾರ ಮಾಳಗೆ, ಬಾಬು ಟೈಗರ್, ಓಂಪ್ರಕಾಶ್ ರೊಟ್ಟೆ, ಜಗದೀಶ್ವರ ಬಿರಾದಾರ್, ವಿಠಲದಾಸ್ ಪ್ಯಾಗೆ, ದಶರಥ ಗುರು, ರಮೇಶ ಉಮಾಪುರೆ, ಉತ್ತಮ ಮಾಂಜರೆಕರ್, ಮಲ್ಲಿಕಾರ್ಜುನ ಮಾಲೆ, ಸಚಿನ್ ಭೀಮನಗರ, ನರಸಿಂಗ್ ನಾವದಗೇರಿ, ಸಿದ್ದಪ್ಪ ಫುಲಾರಿ, ಸುಧಾಮಣಿ, ಮಾಯಾವತಿ, ಆಕಾಂಕ್ಷಿ, ಭಾಗ್ಯಜ್ಯೋತಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.





