ರಾಜ್ಯದಾದ್ಯಂತ ಅದರಲ್ಲೂ ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಬೆಳೆ ವಿಮೆ ನೋಂದಣಿ ಅವಧಿಯನ್ನು ಇನ್ನೂ 15 ದಿನಗಳ ಕಾಲ ವಿಸ್ತರಿಸುವಂತೆ ಆಗ್ರಹಿಸಿ ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಆಗ್ರಹಿಸಿದೆ.
ಈ ಸಂಬಂಧ ಶನಿವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಸರಿಗೆ ಬರೆದ ಮನವಿಯನ್ನು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಸಲ್ಲಿಸಿದರು.
“ಈ ವರ್ಷದ ಮುಂಗಾರು ಮಳೆ ರಾಜ್ಯದ ಬಹುತೇಕ ಭಾಗಗಳಲ್ಲಿ ಸಮರ್ಪಕವಾಗಿ ಸುರಿಯದ ಪರಿಣಾಮ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಲ್ಯಾಣ ಕರ್ನಾಟಕದ ಬೀದರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯ ಕೊರತೆಯಿಂದ ಬಿತ್ತನೆ ವಿಳಂಬವಾಗಿದ್ದು, ಈಗಾಗಲೇ ಬಿತ್ತನೆ ಮಾಡಿದ ಬೆಳೆಗಳೂ ಒಣಗುವ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ವಿವರಿಸಿದ್ದಾರೆ.
ಜುಲೈ 31ರಂದು ಬೆಳೆ ವಿಮೆ ನೋಂದಣಿಯ ಅಂತಿಮ ದಿನಾಂಕ ಮುಕ್ತಾಯಗೊಂಡಿರುವುದರಿಂದ ಸಾವಿರಾರು ರೈತರು ವಿಮೆ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಮಳೆಯ ನಿರೀಕ್ಷೆಯಿಂದ ಬಿತ್ತನೆ ಮುಂದೂಡಿರುವುದು, ಸೇವಾ ಕೇಂದ್ರಗಳಲ್ಲಿನ ವಿಳಂಬ, ತಾಂತ್ರಿಕ ಸಮಸ್ಯೆಗಳು, ದಾಖಲೆಗಳ ಕೊರತೆ ಹಾಗೂ ಆರ್ಥಿಕ ಸಂಕಷ್ಟದಂತಹ ಕಾರಣಗಳಿಂದ ಅನೇಕ ರೈತರು ನಿಗದಿತ ಅವಧಿಯಲ್ಲಿ ನೋಂದಣಿ ಮಾಡಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಬೆಳೆ ವಿಮೆ ಕೇವಲ ಸರ್ಕಾರಿ ಯೋಜನೆಯಲ್ಲ, ಪ್ರಕೃತಿ ವಿಕೋಪದಿಂದ ನಲುಗಿರುವ ರೈತರ ಬದುಕಿಗೆ ರಕ್ಷಾ ಕವಚವಾಗಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ವಿಮೆಯ ಅವಕಾಶವೂ ಕೈತಪ್ಪಿದರೆ ರೈತರು ಮತ್ತಷ್ಟು ಸಾಲದ ಸುಳಿಯಲ್ಲಿ ಸಿಲುಕಿ ಜೀವನೋಪಾಯ ಕಳೆದುಕೊಳ್ಳುವ ಅಪಾಯ ಎದುರಿಸಬೇಕಾಗುತ್ತದೆ ಎಂದು ಸಮಿತಿ ಕಳವಳ ವ್ಯಕ್ತಪಡಿಸಿದೆ.
ಮುಖ್ಯಮಂತ್ರಿಗಳು ತಮ್ಮ ವಿಶೇಷ ಅಧಿಕಾರವನ್ನು ಬಳಸಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ, ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ, ಬೆಳೆ ವಿಮೆ ನೋಂದಣಿ ಅವಧಿಯನ್ನು ಇನ್ನೂ 15 ದಿನಗಳ ಕಾಲ ವಿಸ್ತರಿಸುವಂತೆ ಸಂಬಂಧಪಟ್ಟ ಇಲಾಖೆಗೆ ತುರ್ತು ನಿರ್ದೇಶನ ನೀಡಬೇಕು. ಈ ನಿರ್ಧಾರದಿಂದ ಲಕ್ಷಾಂತರ ರೈತರಿಗೆ ಮತ್ತೊಂದು ಅವಕಾಶ ದೊರೆತು, ಸರ್ಕಾರ ರೈತರ ಬೆನ್ನೆಲುಬಾಗಿ ನಿಂತಿದೆ ಎಂಬ ವಿಶ್ವಾಸ ಮೂಡಲಿದೆ ಎಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಬೀದರ್ | ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ: ಸಿಇಒ ಗಿರೀಶ್ ಬದೋಲೆ
ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಪಾಟೀಲ ಹೊಚಕನಳ್ಳಿ, ಸಂಯೋಜಕ ವಿನಯಕುಮಾರ್ ಮಾಳಗೆ, ಸದಸ್ಯ ರಾಜಶೇಖರ ಬೂಸಾ ಖೇಣಿ ರಂಜೋಳ ಹಾಗೂ ಪ್ರೇಮನಾಥ ಗಾಂವ್ಕರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.




