ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ನ.21 ಮತ್ತು 22ರಂದು ನಡೆಯಲಿರುವ 22ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರಾರ್ಥ ಮುದ್ರಿಸಲಾದ ಭಿತ್ತಿಪತ್ರವನ್ನು ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರೂ ಆದ ಬೀದರ್ ದಕ್ಷಿಣ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಬುಧವಾರ ಬಿಡುಗಡೆ ಮಾಡಿದರು.
ಈ ವೇಳೆ ಮಾತನಾಡಿದ ಅವರು, ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡಿಗರ ಹಬ್ಬವಾಗಿದೆ. ಸಮ್ಮೇಳನದ ಯಶಸ್ಸಿಗೆ ಜಿಲ್ಲೆಯ ಪ್ರತಿಯೊಬ್ಬ ಕನ್ನಡಾಭಿಮಾನಿಯೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲೆಯಲ್ಲಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಅವರು ಜಿಲ್ಲಾ, ತಾಲ್ಲೂಕು ಹಾಗೂ ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸುವ ವಿಶೇಷ ಸಮ್ಮೇಳನಗಳನ್ನು ಸಂಘಟಿಸುವ ಮೂಲಕ ಕನ್ನಡ ಪರ ವಾತಾವರಣ ನಿರ್ಮಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತನ್ನು ಜಿಲ್ಲೆಯ ಜನರ ಮನೆ ಬಾಗಿಲಿಗೆ ತಲುಪಿಸಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ ಎಂದು ಹೇಳಿದರು.
ಸಮ್ಮೇಳನವನ್ನು ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಲು ಸುರೇಶ ಚನಶೆಟ್ಟಿ ಅವರ ನೇತೃತ್ವದಲ್ಲಿ ಪರಿಷತ್ತಿನ ಪದಾಧಿಕಾರಿಗಳು ಮತ್ತು ವಿವಿಧ ಸಮಿತಿಗಳ ಪ್ರಮುಖರು ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸುರೇಶ ಚನಶೆಟ್ಟಿ, “ಸಾಹಿತಿ ಡಾ. ಬಸವರಾಜ ಬಲ್ಲೂರ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ ಸಮ್ಮೇಳನಕ್ಕೆ ಅಂತಿಮ ಹಂತದ ಸಿದ್ಧತೆಗಳು ತ್ವರಿತಗತಿಯಲ್ಲಿ ಸಾಗಿವೆ. ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಆಗಮಿಸುವ ಅತಿಥಿಗಳು ಮತ್ತು ಗಣ್ಯರಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ” ಎಂದರು.
ಸಮ್ಮೇಳನದ ಅಂಗವಾಗಿ ಸಾರೋಟಿನಲ್ಲಿ ಈವರೆಗಿನ ಸಮ್ಮೇಳನಗಳ ಸರ್ವಾಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷರು ಹಾಗೂ ತಾಲ್ಲೂಕು ಘಟಕಗಳ ಅಧ್ಯಕ್ಷರ ಭವ್ಯ ಮೆರವಣಿಗೆ ಆಯೋಜಿಸಲಾಗಿದೆ. ವಿವಿಧ ಗೋಷ್ಠಿಗಳು ನಡೆಯಲಿದ್ದು, ಮಹಿಳಾ ಮತ್ತು ಮಕ್ಕಳ ಗೋಷ್ಠಿಗಳು ವಿಶೇಷ ಆಕರ್ಷಣೆಯಾಗಲಿವೆ. ಸ್ಥಳೀಯ ಕಲಾವಿದರ ಕಾವ್ಯ, ಕುಂಚ, ಗಾಯನ ಹಾಗೂ ನರ್ತನ ಕಾರ್ಯಕ್ರಮಗಳು ಗಮನ ಸೆಳೆಯಲಿವೆ ಎಂದು ತಿಳಿಸಿದರು.

ಸಮ್ಮೇಳನದ ಕುರಿತು ಜಿಲ್ಲೆಯಾದ್ಯಂತ ಭಿತ್ತಿಪತ್ರ, ಪೋಸ್ಟರ್, ಬ್ಯಾನರ್, ಕಟೌಟ್, ಆಟೋ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಲಾಗಿದೆ. ಜಿಲ್ಲೆಯ ಕನ್ನಡಾಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸಲಾಗಿದೆ ಎಂದರು.
ಸಮ್ಮೇಳನಕ್ಕೆ ಚುನಾಯಿತ ಪ್ರತಿನಿಧಿಗಳು, ಸಾಹಿತಿಗಳು, ಗಣ್ಯರು ಹಾಗೂ ಸಾಹಿತ್ಯಾಸಕ್ತರನ್ನು ಆಹ್ವಾನಿಸಲು ಒಂದು ಸಾವಿರ ಆಮಂತ್ರಣ ಪತ್ರಿಕೆಗಳನ್ನು ಮುದ್ರಿಸಲಾಗಿದೆ. ಅಲ್ಲದೆ, ಪರಿಷತ್ತಿನ ಸದಸ್ಯರಿಗೆ ಆಹ್ವಾನಿಸುವ ಉದ್ದೇಶದಿಂದ 10 ಸಾವಿರ ಅಂಚೆ ಕಾರ್ಡ್‌ಗಳನ್ನು ಕಳುಹಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ತಿಳಿಸಿದ್ದಾರೆ.
ಶಿಕ್ಷಕರು, ಉಪನ್ಯಾಸಕರಿಗೆ ಒಒಡಿ ಸೌಲಭ್ಯ
22ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಶಾಲಾ ಶಿಕ್ಷಣ ಇಲಾಖೆಯು ಕರ್ತವ್ಯದ ನಿಮಿತ್ತ ರಜೆ (ಒಒಡಿ) ಸೌಲಭ್ಯ ಕಲ್ಪಿಸಿದೆ. ಶಿಕ್ಷಕರು ಹಾಗೂ ಉಪನ್ಯಾಸಕರು ಈ ಸೌಲಭ್ಯದ ಪ್ರಯೋಜನ ಪಡೆದು ಸಮ್ಮೇಳನದಲ್ಲಿ ಭಾಗವಹಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಮನವಿ ಮಾಡಿದ್ದಾರೆ.

ಮಹಾನಗರ ಪಾಲಿಕೆ ಸದಸ್ಯ ಶಶಿಧರ ಹೊಸಳ್ಳಿ, ಸಿದ್ಧಾರೂಢ ಭಾಲ್ಕೆ, ಸಂಗಮೇಶ ಜ್ಯಾಂತೆ, ಭೀಮಣ್ಣ ಸೋರಳ್ಳಿ, ಆಕಾಶ್ ಕೋಟೆ, ಶಿವಕುಮಾರ ಪಾಟೀಲ, ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ : ಬಸವಕಲ್ಯಾಣ | ಜನಪದ ಸಾಹಿತ್ಯದಲ್ಲಿ ಬಸವಣ್ಣನವರ ಸಮಗ್ರ ಕ್ರಾಂತಿಯ ದರ್ಶನ: ಬಸವಲಿಂಗ ಪಟ್ಟದ್ದೇವರು



