ನೀಟ್ ಪರೀಕ್ಷೆಯಲ್ಲಿನ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳನ್ನು ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಂ ವಾಂಗ್ಚೂಕ್ ಅವರಿಗೆ ಬೆಂಬಲಿಸಿ ದಲಿತ ವಿದ್ಯಾರ್ಥಿ ಪರಿಷತ್ ಬೀದರ್ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.
ಬೀದರ್ ನಗರದ ಅಂಬೇಡ್ಕರ್ ವೃತ್ತ ಸಮೀಪದ ಪ್ರವಾಸಿ ಮಂದಿರ ಎದುರುಗಡೆ ಶನಿವಾರ ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಮುಖಂಡರು ಮಾತನಾಡಿ, “ನೀಟ್ ಪರೀಕ್ಷೆಯಲ್ಲಿನ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳಿಂದ ಲಕ್ಷಾಂತರ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸು ಭಗ್ನಗೊಂಡಿದೆ. ಇದು ಸಂವಿಧಾನದ ಸಮಾನತೆಯ ಹಕ್ಕು ಮತ್ತು ಘನತೆಯಿಂದ ಬದುಕುವ ಹಕ್ಕಿನ ಉಲ್ಲಂಘನೆಯಾಗಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದರು .
“ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ಕಾಯ್ದೆ–2024′ ಅಡಿ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಮಧ್ಯವರ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಕಾರ್ಯವೈಖರಿ ಕುರಿತು ಸಮಗ್ರ ತನಿಖೆ ನಡೆಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು” ಎಂದು ಆಗ್ರಹಿಸಿದರು.

“ಲಡಾಖ್ನ ಪರಿಸರ, ಸ್ಥಳೀಯ ಸಂಸ್ಕೃತಿ ಹಾಗೂ ಹಕ್ಕುಗಳ ರಕ್ಷಣೆಗಾಗಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಹೋರಾಟಗಾರ ಸೋನಂ ವಾಂಗ್ಚೂಕ್ ಅವರ ಹೋರಾಟಕ್ಕೆ ದಲಿತ ವಿದ್ಯಾರ್ಥಿ ಪರಿಷತ್ ಸಂಪೂರ್ಣ ಬೆಂಬಲಿಸುತ್ತದೆ. ಲಡಾಖ್ಗೆ ಸಂವಿಧಾನದ 6ನೇ ಅನುಸೂಚಿಯಡಿ ವಿಶೇಷ ಸ್ವಾಯತ್ತ ಸ್ಥಾನಮಾನ ನೀಡಬೇಕು ಹಾಗೂ ಶಾಂತಿಯುತ ಪ್ರತಿಭಟನೆ ನಡೆಸುವ ಹಕ್ಕನ್ನು ಗೌರವಿಸಬೇಕು” ಎಂದು ಮನವಿಯಲ್ಲಿ ತಿಳಿಸಲಾಗಿದೆ.
“ನೀಟ್ ಹಗರಣದ ಸಮಗ್ರ ತನಿಖೆಗೆ ಆದೇಶಿಸುವುದರ ಜೊತೆಗೆ, ಕೇಂದ್ರ ಸರ್ಕಾರಕ್ಕೆ ಶಿಕ್ಷಣ ಸಚಿವರ ರಾಜೀನಾಮೆ ಪಡೆಯುವಂತೆ ರಾಷ್ಟ್ರಪತಿಗಳು ನಿರ್ದೇಶನ ನೀಡಬೇಕು. ಸೋನಂ ವಾಂಗ್ಚೂಕ್ ಅವರ ನ್ಯಾಯಸಮ್ಮತ ಬೇಡಿಕೆಗಳನ್ನು ಸಂವಿಧಾನದ ಚೌಕಟ್ಟಿನೊಳಗೆ ಈಡೇರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಎಂದು ಒತ್ತಾಯಿಸಿದರು.
ಇದನ್ನೂ ಓದಿ : ಭಾಲ್ಕಿ | ವಲಸೆ ಹೋಗ್ಬೇಡಿ, ವಿಬಿ-ಜಿ ರಾಮ್ ಜಿ ಯೋಜನೆಯಡಿ ಕೆಲಸ ಮಾಡಿ
ಪ್ರತಿಭಟನೆಯಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಂಚಾಲಕ ಸಂದೀಪ ಕಾಂಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ ಮಾಲೆ, ಭಾಲ್ಕಿ ತಾಲೂಕು ಸಂಚಾಲಕ ಮಹಾದೇವ, ಔರಾದ್ ತಾಲೂಕು ಸಂಚಾಲಕ ಆನಂದ ಕಾಂಬಳೆ ಸೇರಿದಂತೆ ಪ್ರಮುಖರಾದ ವಿಠಲದಾಸ ಪ್ಯಾಗೆ, ರಮೇಶ್ ಡಾಕುಳಗಿ, ಬಾಬು ಪಾಸ್ವಾನ್, ಶ್ರೀಪತರಾವ ದೀನೆ, ಶಿವಕುಮಾರ ನೀಲಿಕಟ್ಟಿ, ಪ್ರದೀಪ ನಾಟೇಕರ, ಸುರೇಶ್ ಜೋಜನಕಾರ, ಸಾಯಿ ಸಿಂಧೆ, ರಮೇಶ್ ಪಾಸ್ವಾನ್, ಗೋಪಾಲ ದೊಡ್ಡಿ, ಸಂಗಮೇಶ ಭಾವಿದೊಡ್ಡಿ, ಬಸವರಾಜ ಭಾವಿದೊಡ್ಡಿ, ಜನಾರ್ಧನ ದೀನೆ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.





