ಶಿಕ್ಷಣವೇ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಪ್ರಮುಖ ಸಾಧನವಾಗಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಇಂತಹ ಪುರಸ್ಕಾರಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಿ ಮತ್ತಷ್ಟು ಸಾಧನೆಗೆ ಪ್ರೇರಣೆ ನೀಡುತ್ತವೆ ಎಂದು ಗುಲ್ಬರ್ಗ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ದೇವದಾಸ ಮಾಲೆ ಹೇಳಿದರು.
ಕರ್ನಾಟಕ ರಾಜ್ಯ ಮಾದಿಗ ನೌಕರರ ಸಂಘದ ಬೀದರ್ ಜಿಲ್ಲಾ ಘಟಕದ ವತಿಯಿಂದ ನಗರದ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಈಚೆಗೆ ನಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶಾಹೀನ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಡಾ.ಅಬ್ದುಲ್ ಖದೀರ್ ಮಾತನಾಡಿ, “ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕೇವಲ ಅಂಕಗಳಿಗೆ ಸೀಮಿತವಾಗದೆ ಜ್ಞಾನ, ಕೌಶಲ್ಯ, ಸಂಶೋಧನಾ ಮನೋಭಾವ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೂ ಉತ್ತಮ ಶಿಕ್ಷಣ ದೊರೆಯಲು ಸಂಘ-ಸಂಸ್ಥೆಗಳು ಕೈಜೋಡಿಸಬೇಕು” ಎಂದರು.
ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಡಾ.ದೇವದಾಸ ತುಮಕುಂಟೆ ಮಾತನಾಡಿ, “ಮಾದಿಗ ನೌಕರರ ಸಂಘವು ನೌಕರರ ಹಿತಾಸಕ್ತಿಯ ಜೊತೆಗೆ ಸಮಾಜದ ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸುವ ಮೂಲಕ ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ನಡೆಸುತ್ತಿದೆ” ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿ ರಂಗೋಲಿ ಮಾತನಾಡಿ, “ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ನೈತಿಕತೆ, ಶಿಸ್ತು, ಸಾಮಾಜಿಕ ಬದ್ಧತೆ ಹಾಗೂ ಸೇವಾ ಮನೋಭಾವವನ್ನು ರೂಢಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಸಂಘದ ವತಿಯಿಂದ ವಿದ್ಯಾರ್ಥಿವೇತನ, ವೃತ್ತಿ ಮಾರ್ಗದರ್ಶನ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಚಂದ್ರಕಾಂತ ಹಿಪ್ಪಳಗಾಂವ್, ಗೋಖಲೆ, ರಾಜು ಕೌಡಿಯಾಳ, ಫರ್ನಾಂಡಿಸ್ ಹಾಗೂ ರಜಾಕ್ ಮಾದರ ಅವರು ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಸ್ನಾತಕೋತ್ತರ, ವೃತ್ತಿಪರ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಿದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ಅಧಿಕಾರಿಗಳು, ಶಿಕ್ಷಕರು, ವೈದ್ಯರು, ಸಮಾಜ ಸೇವಕರು ಹಾಗೂ ಸಾಧಕರನ್ನು ಗೌರವಿಸಿ ಸನ್ಮಾನಿಸಲಾಯಿತು.
ಇದನ್ನೂ ಓದಿ : ಬೀದರ್ | ಕಾಂಗ್ರೆಸ್‌ನಿಂದ ಜನರನ್ನು ಒಗ್ಗೂಡಿಸುವ ಕಾರ್ಯ : ಸಿಎಂ ಡಿ.ಕೆ.ಶಿವಕುಮಾರ
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು, ಜನಪ್ರತಿನಿಧಿಗಳು, ಶಿಕ್ಷಣ ತಜ್ಞರು, ಸರ್ಕಾರಿ ಅಧಿಕಾರಿಗಳು, ಸಮಾಜದ ಮುಖಂಡರು, ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಶಿಕ್ಷಕ ಮನೋಹರ ಎಂ.ಎಸ್. ಅವರು ಸಂವಿಧಾನದ ಪೀಠಿಕೆ ಓದಿಸಿದರು, ಸಂಘದ ಕಾರ್ಯದರ್ಶಿ ಜೈಭಾರತ ನಿರೂಪಿಸಿದರು.




