ಪ್ರತಿ ವರ್ಷದಂತೆ ಈ ವರ್ಷವು ಜುಲೈ 29 ರಂದು ಕರ್ನಾಟಕ ಸರಕಾರದಿಂದ ನಡೆಯಲಿರುವ ಶಿವಶರಣ ಹಡಪದ ಅಪ್ಪಣ್ಣರವರ ಜಯಂತಿ ಕಾರ್ಯಕ್ರಮದಲ್ಲಿ ಸಮಾಜದ ಭಾಂದವರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಹಡಪದ ಸಮಾಜದ ಯುವ ಮುಖಂಡ ರೇವಣಸಿದ್ಧ ಹಡಪದ ಮನವಿ ಮಾಡಿದ್ದಾರೆ.
ಇದೇ ಜುಲೈ 29 ರಂದು ಬೆಳಿಗ್ಗೆ 10ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಶಿವಶರಣ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ 10:30 ಗಂಟೆಗೆ ಶಿವಾಜಿ ವೃತ್ತದಿಂದ ವಿವಿಧ ಕಲಾ ತಂಡಗಳೊಂದಿಗೆ ಅದ್ದೂರಿ ಮೆರವಣಿಗೆ ನಡೆಯಲಿದೆ.
ನಂತರ ಮಧ್ಯಾಹ್ನ 1 ಗಂಟೆಗೆ ಪೂಜ್ಯ ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹಾಗೂ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸುವರು. ಹಿರಿಯ ಪತ್ರಕರ್ತ ಶಿವಶರಣಪ್ಪ ವಾಲಿ ಅವರು ಅತಿಥಿ ಉಪನ್ಯಾಸ ಮಂಡಿಸಲಿದ್ದಾರೆ.
ಇದನ್ನೂ ಓದಿ : ಬೀದರ್ | ನಿಷ್ಪಕ್ಷಪಾತ ಪತ್ರಿಕೋದ್ಯಮಕ್ಕೆ ಆದ್ಯತೆ ನೀಡಿ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
ಸಮಾಜದ ಭಾಂದವರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಹಾಗೂ ಸಾರ್ವಜನಿಕರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ರೇವಣಸಿದ್ಧ ಹಡಪದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




