ಬೀದರ ಜಿಲ್ಲೆಯಲ್ಲಿ ಕಳೆದ ಹಲವು ತಿಂಗಳುಗಳಿಂದ ಖಾಲಿ ಇರುವ ವಿಶೇಷ ಭೂಸ್ವಾಧೀನ ಅಧಿಕಾರಿಯನ್ನು (SLAO) ಶೀಘ್ರದಲ್ಲಿ ನೇಮಿಸಬೇಕೆಂದು ಕಾರಂಜಾ ಮುಳುಗಡೆ ಸಂತ್ರಸ್ತ ರೈತರು ಹಾಗೂ ಹಿತರಕ್ಷಣಾ ಸಮಿತಿ ಸದಸ್ಯರು ಆಗ್ರಹಿಸಿ ಮಂಗಳವಾರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಮನವಿ ಸಲ್ಲಿಸಿದ್ದಾರೆ.
“ಕಳೆದ ಹಲವು ತಿಂಗಳುಗಳಿಂದ ವಿಶೇಷ ಭೂಸ್ವಾಧೀನ ಅಧಿಕಾರಿ (SLAO) ಹುದ್ದೆ ಖಾಲಿ ಇರುವುದರಿಂದ ಭೂಸ್ವಾಧೀನಕ್ಕೆ ಸಂಬಂಧಿಸಿದ ನೂರಾರು ಪ್ರಕರಣಗಳು ಬಾಕಿ ಉಳಿದಿದ್ದು, ಜಿಲ್ಲೆಯ ರೈತರು ಹಾಗೂ ಭೂಸ್ವಾಧೀನ ಸಂತ್ರಸ್ತರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಭೂಸ್ವಾಧೀನ ಹುದ್ದೆಗೆ ತಕ್ಷಣ ಹಿರಿಯ ಹಾಗೂ ಸಮರ್ಥ ಅಧಿಕಾರಿಯನ್ನು ನಿಯೋಜಿಸಬೇಕು” ಎಂದು ಒತ್ತಾಯಿಸಿದರು.
“ಜಿಲ್ಲೆಯಲ್ಲಿ ಭೂಸ್ವಾಧೀನಕ್ಕೆ ಸಂಬಂಧಿಸಿದ ಪರಿಹಾರ ವಿತರಣೆ, ಪ್ರಕರಣಗಳ ವಿಚಾರಣೆ, ದಾಖಲೆಗಳ ಪರಿಶೀಲನೆ, ತಕರಾರುಗಳ ಇತ್ಯರ್ಥ ಹಾಗೂ ರೈತರಿಗೆ ನ್ಯಾಯಸಮ್ಮತ ಪರಿಹಾರ ಕಲ್ಪಿಸುವ ಕೆಲಸಗಳು ಭೂಸ್ವಾಧೀನ ಕಚೇರಿಯ ವ್ಯಾಪ್ತಿಗೆ ಬರುತ್ತವೆ. ಆದರೆ ಹುದ್ದೆ ಖಾಲಿ ಇರುವುದರಿಂದ ಈ ಎಲ್ಲಾ ಕಾರ್ಯಗಳು ಕುಂಠಿತಗೊಂಡಿದ್ದು, ರೈತರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಿಂಗಳುಗಟ್ಟಲೆ ಕಾದು ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
“ಪ್ರಸ್ತುತ ಭೂಸ್ವಾಧೀನ ಇಲಾಖೆ ಕಚೇರಿ ನೌಬಾದ್ ರಸ್ತೆಯಲ್ಲಿರುವ ರೇಷ್ಮೆ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗದಿರುವುದರಿಂದ ರೈತರು ಮತ್ತು ಸಂತ್ರಸ್ತರು ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಕಚೇರಿಯನ್ನು ಬೀದರ ನಗರದಲ್ಲಿಯೇ ಪ್ರತ್ಯೇಕ ಕಚೇರಿಯಾಗಿ ಸ್ಥಾಪಿಸಿ, ಸಾರ್ವಜನಿಕರಿಗೆ ಸುಲಭವಾಗಿ ಸಂಪರ್ಕ ಸಾಧಿಸಲು ಅನುಕೂಲ ಕಲ್ಪಿಸಬೇಕು” ಎಂದು ಒತ್ತಾಯಿಸಿದರು.
“ಕಾರಂಜಾ ಜಲಾಶಯ ನಿರ್ಮಾಣಕ್ಕಾಗಿ ಬೆಲೆಬಾಳುವ ಕೃಷಿ ಭೂಮಿ ನೀಡಿರುವ ರೈತರು ಹಲವು ವರ್ಷಗಳಿಂದ ಬಾಕಿ ಇರುವ ಪರಿಹಾರ, ಹೆಚ್ಚುವರಿ ಪರಿಹಾರ ಮೊತ್ತ, ದಾಖಲೆ ತಿದ್ದುಪಡಿ ಹಾಗೂ ಇತರೆ ಬೇಡಿಕೆಗಳ ಪರಿಹಾರಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಈ ಬಗ್ಗೆ ಕಾರಂಜಾ ಮುಳುಗಡೆ ಸಂತ್ರಸ್ತ ರೈತರ ಬೇಡಿಕೆಗಳ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು” ಎಂದರು.
ಇದನ್ನೂ ಓದಿ : ಬೀದರ್ | ಜಿಲ್ಲಾದ್ಯಂತ ಶಾಲೆಗಳು ಆರಂಭ : ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಿದ ಶಿಕ್ಷಕರು
ನಮ್ಮ ಮನವಿಗೆ ಸ್ಪಂದಿಸಿ 5 ದಿನಗಳೊಳಗೆ ಅಗತ್ಯ ಕ್ರಮ ಕೈಗೊಂಡು ಅಧಿಕೃತ ಆದೇಶ ಹೊರಡಿಸಬೇಕು. ಇಲ್ಲದಿದ್ದರೆ ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿಯ ನೇತ್ರತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಭೂಸ್ವಾಧೀನ ಅಧಿಕಾರಿಯನ್ನು ನಿಯೋಜಿಸುವವರೆಗೆ ನಿರಂತರ ಧರಣಿ ಸತ್ಯಾಗ್ರಹ ಆರಂಭಿಸಲಾಗುವುದು. ಇದಕ್ಕೆ ಜಿಲ್ಲಾಡಳಿತವೇ ಸಂಪೂರ್ಣ ಹೊಣೆಯಾಗುತ್ತದೆ ಎಂದು ಎಚ್ಚರಿಸಲಾಗಿದೆ.
ಈ ಸಂದರ್ಭದಲ್ಲಿ ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಾಟೀಲ್ ಹೊಚಕನಳ್ಳಿ ಸೇರಿದಂತೆ ರೈತರು, ಸಂತ್ರಸ್ತ ರೈತರು ಇದ್ದರು.





