ಭಾರತದ ಸಂವಿಧಾನವು ವಿಶಿಷ್ಟ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದ್ದು, ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಸಂವಿಧಾನವು 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ನಾಗರಿಕನಿಗೂ ಮತದಾನದ ಹಕ್ಕು ಕಲ್ಪಿಸಿದೆ. ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕಾಗಿ ಯುವಕರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಯುವ ಸಂಸತ್ತು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
“ಬ್ರಿಟಿಷರ ಆಳ್ವಿಕೆಯಲ್ಲಿ ಸೀಮಿತ ವರ್ಗದ ಜನರಿಗೆ ಮಾತ್ರ ಮತದಾನದ ಹಕ್ಕು ನೀಡಲಾಗಿತ್ತು. ಆದರೆ ಸ್ವತಂತ್ರ ಭಾರತದ ಸಂವಿಧಾನವು 18 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರಿಗೂ ಮತದಾನದ ಹಕ್ಕು ಕಲ್ಪಿಸುವ ಮೂಲಕ ಪ್ರಜಾಪ್ರಭುತ್ವಕ್ಕೆ ಭದ್ರ ಬುನಾದಿ ಹಾಕಿದೆ. ಭಾರತದ ಸಂವಿಧಾನವು ಅತ್ಯಂತ ಸುಂದರ ಹಾಗೂ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಹೊಂದಿದ್ದು, ವಿಶ್ವಕ್ಕೆ ಮಾದರಿಯಾಗಿದೆ” ಎಂದು ಹೇಳಿದರು.
ಸಂಸತ್ತಿನಲ್ಲಿ ನಡೆಯುವ ಅಧಿವೇಶನಗಳು, ಚರ್ಚೆಗಳು ಹಾಗೂ ಪ್ರಚಲಿತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಕ್ರಿಯೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ತಿಳಿಸಿಕೊಡುವ ಉದ್ದೇಶದಿಂದ ಯುವ ಸಂಸತ್ತು ಆಯೋಜಿಸಲಾಗಿದೆ. ಮುಖ್ಯಮಂತ್ರಿಗಳು, ಸಚಿವರು, ಶಾಸಕರು ಹಾಗೂ ವಿರೋಧ ಪಕ್ಷದ ಸದಸ್ಯರು ಸದನದಲ್ಲಿ ಹೇಗೆ ಚರ್ಚೆ ನಡೆಸುತ್ತಾರೆ ಎಂಬುದನ್ನು ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಮೂಲಕ ಅರಿತುಕೊಳ್ಳಬೇಕು. ವಾಕ್ಚಾತುರ್ಯ, ವಿಷಯ ಮಂಡನೆ ಹಾಗೂ ಚರ್ಚಾ ಕೌಶಲ ಬೆಳೆಸಿಕೊಂಡರೆ ಭವಿಷ್ಯದಲ್ಲಿ ಇಂತಹ ಸದನಗಳ ಕಲಾಪಗಳಲ್ಲಿ ಭಾಗವಹಿಸುವ ಅವಕಾಶ ದೊರೆಯಬಹುದು. ಹೀಗಾಗಿ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಮಾತನಾಡಿ, “ಶಾಲಾ-ಕಾಲೇಜು ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂಸತ್ತಿನ ಕಾರ್ಯವೈಖರಿಯ ಬಗ್ಗೆ ಅರಿವು ಮೂಡಿಸುವುದು ಅಗತ್ಯವಾಗಿದೆ. ಸದನದಲ್ಲಿ ನಡೆಯುವ ಚರ್ಚೆಗಳು, ಪ್ರಶ್ನೋತ್ತರ ಹಾಗೂ ವಿವಿಧ ವಿಷಯಗಳ ಕುರಿತು ಅಭಿಪ್ರಾಯ ಮಂಡಿಸುವ ಪ್ರಕ್ರಿಯೆಗಳನ್ನು ತಿಳಿದುಕೊಳ್ಳಲು ಯುವ ಸಂಸತ್ತು ಉತ್ತಮ ವೇದಿಕೆಯಾಗಿದೆ” ಎಂದರು.
ಸಂವಿಧಾನದ ಪ್ರಮುಖ ಅಂಗಗಳಾದ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗದ ಕಾರ್ಯನಿರ್ವಹಣೆ ಮತ್ತು ಮಾಧ್ಯಮಗಳ ಪಾತ್ರದ ಕುರಿತು ತಿಳಿವಳಿಕೆ ಹಾಗೂ ಪ್ರಾಯೋಗಿಕ ಅನುಭವ ಪಡೆಯಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.
ಯುವ ಸಂಸತ್ತಿನ ಕಲಾಪಗಳನ್ನು ಸುಗಮವಾಗಿ ನಡೆಸುವ ಉದ್ದೇಶದಿಂದ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡು ಸಭಾಧ್ಯಕ್ಷರನ್ನು ಆಯ್ಕೆ ಮಾಡಿದರು. ಕಲಾಪ ಆರಂಭಕ್ಕೂ ಮುನ್ನ ವಂದೇ ಮಾತರಂ ಗಾಯನ ಹಾಗೂ ಸಂವಿಧಾನದ ಪೀಠಿಕೆಯ ಬೋಧನೆ ನಡೆಯಿತು.
ನಂತರ ಪ್ರಶ್ನೋತ್ತರ ಅವಧಿ, ಶೂನ್ಯವೇಳೆ, ಗಮನ ಸೆಳೆಯುವ ವಿಷಯಗಳ ಮಂಡನೆ, ಮಸೂದೆಗಳ ಕುರಿತು ಚರ್ಚೆ ಹಾಗೂ ಸದನದ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡುವ ಪ್ರಕ್ರಿಯೆಗಳನ್ನು ವಿದ್ಯಾರ್ಥಿಗಳು ಪ್ರಾತ್ಯಕ್ಷಿಕೆ ಮೂಲಕ ನಡೆಸಿಕೊಟ್ಟರು.

ಪ್ರಶ್ನೋತ್ತರ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಿಟ್ಟ ಅನುದಾನದ ಬಳಕೆ ಕುರಿತು ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ಸದಸ್ಯರ ನಡುವೆ ಚರ್ಚೆ ನಡೆಯಿತು. ಪಂಚ ಗ್ಯಾರಂಟಿ ಯೋಜನೆಗಳು, ಗಡಿಭಾಗದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಮೂಲಸೌಕರ್ಯಗಳು, ರೈತರ ಬೆಳೆಗಳಿಗೆ ಸೂಕ್ತ ಬೆಲೆ ಹಾಗೂ ಕೆಪಿಎಸ್‌ಸಿ ನೇಮಕಾತಿ ಸೇರಿದಂತೆ ವಿವಿಧ ಪ್ರಚಲಿತ ವಿಷಯಗಳ ಕುರಿತು ವಿದ್ಯಾರ್ಥಿಗಳು ಚರ್ಚೆ ನಡೆಸಿ ಗಮನ ಸೆಳೆದರು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಯೋಗೇಶ್, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇದನ್ನೂ ಓದಿ : ಕೊಪ್ಪಳ | ಬಲ್ಡೋಟಾ ಕಾರ್ಖಾನೆ ವಿರುದ್ಧದ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಸಂಸದ ರಾಜಶೇಖರ ಹಿಟ್ನಾಳ




