ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ರೈತರು ಸಮೂಹ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಬೀದರ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಎಂದು ಜೈ ಕರ್ನಾಟಕ ರಕ್ಷಣಾ ವೇದಿಕೆ ಬೀದರ ಜಿಲ್ಲಾ ಘಟಕ ಒತ್ತಾಯಿಸಿದೆ.
ಈ ಕುರಿತು ಸೋಮವಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಹೆಸರಿಗೆ ಬರೆದ ಮನವಿಯನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.
“ಜಿಲ್ಲೆಯ ಸುಮಾರು ಶೇ 90ರಷ್ಟು ರೈತರು ಮಳೆ ಆಧಾರಿತ ಕೃಷಿಯನ್ನೇ ಅವಲಂಬಿಸಿದ್ದು, ಸಮರ್ಪಕ ನೀರಾವರಿ ಸೌಲಭ್ಯಗಳ ಕೊರತೆಯಿಂದ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಕಾರಂಜಾ ಜಲಾಶಯದ ನೀರಿನ ಪ್ರಯೋಜನ ಜಿಲ್ಲೆಯ ಬಹುತೇಕ ರೈತರಿಗೆ ಲಭ್ಯವಾಗುತ್ತಿಲ್ಲ. ಮಳೆಯ ಅಭಾವದಿಂದ ಕೆರೆ, ಬಾವಿ ಹಾಗೂ ಕೊಳವೆಬಾವಿಗಳ ನೀರಿನ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ಕೃಷಿ ಚಟುವಟಿಕೆಗಳ ಜೊತೆಗೆ ಜಾನುವಾರು ಸಾಕಾಣಿಕೆಯೂ ಸಂಕಷ್ಟಕ್ಕೆ ಸಿಲುಕಿದೆ” ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
“ಸರ್ಕಾರ ಜಿಲ್ಲೆಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿ ಬೀದರ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ರೈತರ ಕೃಷಿ ಸಾಲಗಳನ್ನು ಸಂಪೂರ್ಣ ಮನ್ನಾ ಮಾಡಬೇಕು. ಬೆಳೆ ಹಾನಿಗೆ ತಕ್ಷಣ ಪರಿಹಾರ ಬಿಡುಗಡೆ ಮಾಡಬೇಕು. ಮರುಬಿತ್ತನೆಗೆ ಉಚಿತ ಅಥವಾ ಸಹಾಯಧನದ ಆಧಾರದ ಮೇಲೆ ಬೀಜ ಹಾಗೂ ರಸಗೊಬ್ಬರ ವಿತರಿಸಬೇಕು. ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಮತ್ತು ನೀರಿನ ವ್ಯವಸ್ಥೆಯನ್ನು ತುರ್ತಾಗಿ ಕಲ್ಪಿಸಬೇಕು” ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಇದನ್ನೂ ಓದಿ : ಬೀದರ್ | ಸೋನಂ ವಾಂಗ್ಚೂಕ್ ಹೋರಾಟಕ್ಕೆ ಬೆಂಬಲ : ಪ್ರಧಾನಿ ಮೋದಿ, ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯ
ಜೈ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ರಮೇಶ ಮರ್ಜಾಪೂರ, ಜಿಲ್ಲಾ ಗೌರವಾಧ್ಯಕ್ಷ ಸೈಯದ್ ನವಾಜ್, ಜಿಲ್ಲಾ ಉಪಾಧ್ಯಕ್ಷ ಮೋಹಸಿನ್ ಪಟೇಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ತುಕಾರಾಮ ಚಿದ್ರಿ, ಕಾರ್ಮಿಕ ನಗರ ಘಟಕದ ಉಪಾಧ್ಯಕ್ಷ ಗೌಸ್ ಖಾನ್ ಹಾಗೂ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.





