ವಿಧವಾ ವೇತನ, ವೃದ್ಧಾಪ್ಯ ವೇತನ, ಅಂಗವಿಕಲರ ಮಾಸಾಶನ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಬಾಕಿ ಮೊತ್ತವನ್ನು ಅರ್ಹ ಫಲಾನುಭವಿಗಳಿಗೆ ಕೂಡಲೇ ಬಿಡುಗಡೆ ಮಾಡುವಂತೆ ಜೈ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕ ಒತ್ತಾಯಿಸಿದೆ.
ಈ ಕುರಿತು ವೇದಿಕೆಯ ಪದಾಧಿಕಾರಿಗಳು ಬೀದರ್ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿ, “ಜಿಲ್ಲೆಯಲ್ಲಿ ವೃದ್ಧರು, ವಿಧವೆಯರು, ಅಂಗವಿಕಲರು ಹಾಗೂ ಇತರೆ ಅರ್ಹ ಫಲಾನುಭವಿಗಳಿಗೆ ಸಾಮಾಜಿಕ ಭದ್ರತಾ ಯೋಜನೆಗಳ ಮಾಸಾಶನ ಬಾಕಿಯಾಗಿರುವುದರಿಂದ ಜೀವನ ನಿರ್ವಹಣೆಗೆ ತೊಂದರೆಯಾಗುತ್ತಿದೆ. ಫಲಾನುಭವಿಗಳ ಸಮಸ್ಯೆಗಳನ್ನು ಮಾನವೀಯ ದೃಷ್ಟಿಯಿಂದ ಪರಿಗಣಿಸಿ ತುರ್ತು ಕ್ರಮ ಕೈಗೊಳ್ಳಬೇಕು” ಎಂದರು.
“ವಿಧವಾ ವೇತನ, ವೃದ್ಧಾಪ್ಯ ವೇತನ, ಅಂಗವಿಕಲರ ಮಾಸಾಶನ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಬಾಕಿ ಮೊತ್ತವನ್ನು ಅರ್ಹ ಫಲಾನುಭವಿಗಳಿಗೆ ಶೀಘ್ರವಾಗಿ ಬಿಡುಗಡೆ ಮಾಡಬೇಕು. ಸ್ಥಗಿತಗೊಂಡಿರುವ ಮಾಸಾಶನ ಪುನರಾರಂಭಿಸಲು ದಾಖಲೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಫಲಾನುಭವಿಗಳು ಬೆಳಿಗ್ಗೆಯಿಂದ ಸಂಜೆವರೆಗೆ ಸರತಿ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದ್ದು, ದಾಖಲೆಗಳನ್ನು ತ್ವರಿತವಾಗಿ ಸ್ವೀಕರಿಸಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು” ಎಂದು ಆಗ್ರಹಿಸಿದರು.
ಸ್ಥಗಿತಗೊಂಡಿರುವ ಮಾಸಾಶನದ ಫಲಾನುಭವಿಗಳಿಗೆ ಆಯಾ ನೆಮ್ಮದಿ ಕೇಂದ್ರಗಳಲ್ಲಿಯೇ ದಾಖಲೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಬೇಕು. ಕಚೇರಿಗೆ ಬರಲು ಸಾಧ್ಯವಾಗದ ವೃದ್ಧರು ಹಾಗೂ ಅಂಗವಿಕಲ ಫಲಾನುಭವಿಗಳ ದಾಖಲೆಗಳನ್ನು ಅವರ ಮನೆಗಳಿಂದಲೇ ಪಡೆದುಕೊಳ್ಳುವ ವ್ಯವಸ್ಥೆ ಮಾಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಆಯಾ ಗ್ರಾಮ ಲೆಕ್ಕಾಧಿಕಾರಿಗಳ ಮೂಲಕ ಫಲಾನುಭವಿಗಳಿಗೆ ಅಗತ್ಯವಿರುವ ದಾಖಲೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಸಾರ್ವಜನಿಕ ಹಿತಾಸಕ್ತಿಯ ಈ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಒಂದು ವಾರದೊಳಗಾಗಿ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳದಿದ್ದಲ್ಲಿ, ಫಲಾನುಭವಿಗಳ ಪರವಾಗಿ ಉಗ್ರ ಹೋರಾಟ ನಡೆಸಲಾಗುವುದು ಎಂದು ವೇದಿಕೆ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ : ವಚನ ಕಲ್ಯಾಣ | ಸತ್ಯಶುದ್ಧವಿಲ್ಲದುದು ಕಾಯಕವಲ್ಲ
ಜೈಕರವೇ ಜಿಲ್ಲಾಧ್ಯಕ್ಷ ರಮೇಶ ರಾಜಾಪೂರ, ಜಿಲ್ಲಾ ಗೌರವಾಧ್ಯಕ್ಷ ಸೈಯದ್ ನವಾಜ್, ಜಿಲ್ಲಾ ಉಪಾಧ್ಯಕ್ಷ ಮೋಹಸಿನ್ ಪಟೇಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ತುಕಾರಾಮ ಚಿದ್ರಿ, ನಗರ ಕಾರ್ಮಿಕ ಘಟಕದ ಅಧ್ಯಕ್ಷ ಸಿಜಾವುದ್ದಿನ್, ಬೀದರ್ ತಾಲೂಕು ಅಧ್ಯಕ್ಷ ಮಾಣಿಕ್ ಸೋಲಪೂರ, ಮೋಸಿನ್ ಮಾಲೆಗಾಂವ್, ಜಾಫರ್ ರಾಜಾಪೂರ ಹಾಗೂ ರಾಜಕುಮಾರ್ ಉಪಸ್ಥಿತರಿದ್ದರು.





