ಬೀದರ್ ತಾಲೂಕಿನ ಆಣದೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಅ.7ರಂದು ಬೆಳಿಗ್ಗೆ 10 ಗಂಟೆಗೆ ಸಾಮೂಹಿಕ ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಬಸವಪ್ರಸಾದ ಮಂಗೇರಿ ತಿಳಿಸಿದ್ದಾರೆ.
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆಯೋಜಿಸಿರುವ ಶಿಬಿರದಲ್ಲಿ 18ರಿಂದ 65 ವರ್ಷ ವಯಸ್ಸಿನ ಆರೋಗ್ಯವಂತರು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡುವಂತೆ ಅವರು ಮನವಿ ಮಾಡಿದ್ದಾರೆ.
ಗರ್ಭಿಣಿಯರು, ಬಾಣಂತಿಯರು, ಅಪಘಾತಕ್ಕೊಳಗಾದವರು ಹಾಗೂ ತೀವ್ರ ರಕ್ತಹೀನತೆಯಿಂದ ಬಳಲುತ್ತಿರುವವರಿಗೆ ತುರ್ತು ಸಂದರ್ಭದಲ್ಲಿ ರಕ್ತದ ಅವಶ್ಯಕತೆ ಇರುತ್ತದೆ. ಇಂತಹ ರೋಗಿಗಳ ಪ್ರಾಣರಕ್ಷಣೆಗೆ ರಕ್ತ ಸಂಗ್ರಹಣೆ ಅತ್ಯಂತ ಅಗತ್ಯವಾಗಿರುವ ಹಿನ್ನೆಲೆಯಲ್ಲಿ ಶಿಬಿರ ಆಯೋಜಿಸಲಾಗಿದೆ.
ಇದನ್ನೂ ಓದಿ : ಬೀದರ್ | ಉದ್ಯೋಗ ಖಾತ್ರಿ ಯೋಜನೆಯಡಿ 20 ಲಕ್ಷ ಮಾನವ ದಿನ ಸೃಜನೆ: ಈಶ್ವರ ಖಂಡ್ರೆ
ಅಣದೂರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಕೈಗಾರಿಕಾ ಪ್ರದೇಶ, ಸಣ್ಣ-ಪುಟ್ಟ ಗುಡಿ ಕೈಗಾರಿಕೆಗಳು, ವಿವಿಧ ಸಂಘ-ಸಂಸ್ಥೆಗಳು ಹಾಗೂ ಸರ್ಕಾರಿ ಕಚೇರಿಗಳು ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಿಗಳ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಜಿಲ್ಲೆಯ ರಕ್ತನಿಧಿ ಕೇಂದ್ರವು ಜಿಲ್ಲೆಯಾದ್ಯಂತ ನಡೆಯುವ ರಕ್ತದಾನ ಶಿಬಿರಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ರಕ್ತದ ಕೊರತೆ ನೀಗಿಸಲು ಸಹಕರಿಸುತ್ತಿರುವುದು ಪ್ರಶಂಸನೀಯವಾಗಿದೆ ಎಂದು ಡಾ.ಬಸವಪ್ರಸಾದ ಮಂಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



