ಬೀದರ್: ಬೀದರ್-ಚಿಂಚೋಳಿ ಪ್ರಮುಖ ರಸ್ತೆಯ ಬಗದಲ ಗ್ರಾಮದ ಸಮೀಪ ಕಾರಂಜಾ ನದಿಯ ಹಿನ್ನೀರಿನಲ್ಲಿ ನಿರ್ಮಿಸಿರುವ ಹಳೆಯ ಸೇತುವೆ ಶಿಥಿಲಾವಸ್ಥೆಗೆ ತಲುಪಿದ್ದು, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ₹21 ಕೋಟಿ ವೆಚ್ಚದಲ್ಲಿ ನೂತನ ಸೇತುವೆ ನಿರ್ಮಿಸಬೇಕು ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಸೋಮವಾರ ಸೇತುವೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಸೇತುವೆಯ ದುಸ್ಥಿತಿ ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಂಡರು. ನೂತನ ಸೇತುವೆ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿರುವುದಾಗಿ ತಿಳಿಸಿದರು.
“ಬಗದಲ ಸೇತುವೆಯು ಬೀದರ್-ಚಿಂಚೋಳಿ ಪ್ರಮುಖ ಸಂಪರ್ಕ ರಸ್ತೆಯಲ್ಲಿದ್ದು, ಸುತ್ತಮುತ್ತಲಿನ ಹಲವು ಗ್ರಾಮಗಳ ಜನರ ದೈನಂದಿನ ಸಂಚಾರಕ್ಕೆ ಪ್ರಮುಖ ಆಧಾರವಾಗಿದೆ. ಈ ಮಾರ್ಗದಲ್ಲಿ ಸಾರ್ವಜನಿಕರು, ರೈತರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ವಿವಿಧ ವಾಹನಗಳು ಪ್ರತಿನಿತ್ಯ ಸಂಚರಿಸುತ್ತವೆ. ವಿಶೇಷವಾಗಿ ಕಬ್ಬು ಬೆಳೆಗಾರರು ತಮ್ಮ ಉತ್ಪನ್ನವನ್ನು ಸಕ್ಕರೆ ಕಾರ್ಖಾನೆಗಳಿಗೆ ಸಾಗಿಸಲು ಇದೇ ರಸ್ತೆಯನ್ನು ಅವಲಂಬಿಸಿದ್ದಾರೆ. ಸೇತುವೆ ಶಿಥಿಲಗೊಂಡಿರುವುದರಿಂದ ಜನರಲ್ಲಿ ಆತಂಕ ಮೂಡಿದೆ” ಎಂದರು.
“ಸೇತುವೆಯ ದುಸ್ಥಿತಿಯ ಕುರಿತು ಮಾಹಿತಿ ಪಡೆದಿದ್ದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ಮೂರು ತಿಂಗಳ ಹಿಂದೆಯೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆಗ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದು, ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ದುರಸ್ತಿ ಕಾರ್ಯ ಕೈಗೊಳ್ಳಬೇಕು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು” ಎಂದು ಸೂಚಿಸಿದ್ದರು.

ಸೇತುವೆಯ ಪ್ರಸ್ತುತ ಸ್ಥಿತಿಯನ್ನು ಗಮನಿಸಿದರೆ ತಾತ್ಕಾಲಿಕ ದುರಸ್ತಿಯಿಂದ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುವುದಿಲ್ಲ. ಹೀಗಾಗಿ ನೂತನ ಸೇತುವೆ ನಿರ್ಮಾಣವೇ ಅನಿವಾರ್ಯವಾಗಿದೆ. ಇದಕ್ಕಾಗಿ ಅಂದಾಜು ₹21 ಕೋಟಿ ಅನುದಾನದ ಅಗತ್ಯವಿದ್ದು, ಸರ್ಕಾರದ ಮಟ್ಟದಲ್ಲಿ ಪ್ರಯತ್ನ ಮುಂದುವರಿಸಲಾಗಿದೆ ಎಂದು ತಿಳಿಸಿದರು.
ಸೇತುವೆಯ ಸುರಕ್ಷತೆಯನ್ನು ಪರಿಗಣಿಸಿ ಜಿಲ್ಲಾಧಿಕಾರಿಗಳು ಭಾರೀ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅದರಂತೆ ಮನ್ನಾಏಖೇಳ್ಳಿ ಕ್ರಾಸ್‌ನಿಂದ ಬಂಗೂರ ಕ್ರಾಸ್ ಮಾರ್ಗವಾಗಿ ಮನ್ನಳ್ಳಿ ಗ್ರಾಮದ ಮೂಲಕ ಭಾರೀ ವಾಹನಗಳು ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ. ಬೀದರ್ ನಗರದಿಂದ ಬರುವ ವಾಹನಗಳು ಮೊರಾರ್ಜಿ ದೇಸಾಯಿ ಶಾಲೆಯ ಬಳಿಯ ಮನ್ನಳ್ಳಿ ರಸ್ತೆಯ ಮೂಲಕ ಸಂಚರಿಸುವಂತೆ ಸೂಚಿಸಲಾಗಿದೆ.
ವಾಹನ ಸವಾರರು ಜಿಲ್ಲಾಡಳಿತ ಸೂಚಿಸಿರುವ ಪರ್ಯಾಯ ಮಾರ್ಗಗಳನ್ನು ಅನುಸರಿಸಿ ಸಹಕರಿಸಬೇಕು. ಸೇತುವೆಯ ಸುರಕ್ಷತೆ ಹಾಗೂ ಸಂಚಾರ ನಿಯಂತ್ರಣಕ್ಕೆ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಇದನ್ನೂ ಓದಿ :ಬೀದರ್ | ಗುಡ್ಡಗಾಡು ಓಟದಲ್ಲಿ ಕರ್ನಾಟಕ ಕಾಲೇಜಿಗೆ ಪ್ರಥಮ ಸ್ಥಾನ
ಬಿಜೆಪಿ ಬೀದರ್ ದಕ್ಷಿಣ ಮಂಡಲದ ಅಧ್ಯಕ್ಷ ಗುರುನಾಥ ಎಂ.ರಾಜಗಿರಾ, ಮುಖಂಡರಾದ ರೇವಣಪ್ಪ ಮೈಲಾರ, ಸೋಮನಾಥ ಪೋಶೆಟ್ಟಿ, ಶಶಿಕಾಂತ್ ಕಲವೆಟಿ, ಶಿವಕುಮಾರ್ ಗೌಡಪ್ಪನೂರ್, ಅಣ್ಣಪ್ಪ ರಾಜಗಿರಿ, ಪ್ರಭುರಾವ್ ಹಲಬುರ್ಗಿ, ಹನ್ನಾನ್ ಗಾಜಿ, ಕಂಟೆಪ್ಪ ಮೈಲಾರ್, ಅಶೋಕ್ ಜಮಾದಾರ್, ಇಕ್ಬಾಲ್ ಗಾಜಿ, ಸುಭಾಷ್ ಮಟ್ಟಿಗೆ, ಯಾದುಲ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.





