ಬೀದರ್ ದಕ್ಷಿಣ ಕ್ಷೇತ್ರದ ವ್ಯಾಪ್ತಿಗೆ ಬರುವ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಮಹತ್ವದ ವಿಷಯಗಳ ಕುರಿತು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ವಿಸ್ತೃತ ಚರ್ಚೆ ನಡೆಸಿ, ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವಂತೆ ಬೀದರ್ ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಸೂಚಿಸಿದರು.
ಬೀದರ್ ಮಹಾನಗರ ಪಾಲಿಕೆ ಕಚೇರಿಯ ಸಭೆಯಲ್ಲಿ ಮಾತನಾಡಿದ ಅವರು, ʼಬೀದರ್ ದಕ್ಷಿಣ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಅಮಲಾಪುರ, ಗೋರನಳ್ಳಿ, ಚೊಂಡಿ, ಚೌಳಿ, ಕೋಳಾರ (ಕೆ), ಹಜ್ಜರಗಿ, ಕಮಲಪುರ ಹಾಗೂ ನಿಜಾಂಪುರ ಗ್ರಾಮಗಳು ಹೊಸದಾಗಿ ಮಹಾನಗರ ಪಾಲಿಕೆಗೆ ಸೇರ್ಪಡೆಗೊಂಡಿರುವ ಹಿನ್ನೆಲೆ, ಈ ಗ್ರಾಮಗಳ ಅಭಿವೃದ್ಧಿ ಕಾಮಗಾರಿಗಳನ್ನು ವೇಗಗೊಳಿಸಿ ಸಾರ್ವಜನಿಕರಿಗೆ ಉತ್ತಮ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆದ್ಯತೆ ನೀಡಬೇಕುʼ ಎಂದು ತಿಳಿಸಿದರು.
“ಎಲ್ಲಾ ಗ್ರಾಮಗಳಲ್ಲಿ ಸ್ವಚ್ಛತಾ ಕಾರ್ಯಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಡೆಸಬೇಕು. ಕಸ ವಿಲೇವಾರಿ ವ್ಯವಸ್ಥೆಯನ್ನು ಸುಧಾರಿಸಿ, ಪ್ರತಿಯೊಂದು ವಾರ್ಡ್‌ನಲ್ಲಿ ನಿಯಮಿತವಾಗಿ ಸ್ವಚ್ಛತಾ ಕಾರ್ಯ ನಡೆಯಬೇಕು. ಸಾರ್ವಜನಿಕರೂ ಸಹ ನಗರ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಸಹಕರಿಸಬೇಕು” ಎಂದು ಮನವಿ ಮಾಡಿದರು.
ಈ ಗ್ರಾಮಗಳಿಗೆ ಸಮರ್ಪಕ ಕುಡಿಯುವ ನೀರಿನ ಪೂರೈಕೆಗೆ ಆದ್ಯತೆ ನೀಡುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ನೀರಿನ ಸಮಸ್ಯೆ ಎದುರಿಸುತ್ತಿರುವ ಪ್ರದೇಶಗಳನ್ನು ಗುರುತಿಸಿ ತುರ್ತು ಕ್ರಮಗಳ ಮೂಲಕ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಸೂಚಿಸಲಾಯಿತು. ಜೊತೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಕಟ್ಟುನಿಟ್ಟಿನ ನಿರ್ದೇಶನ ನೀಡಲಾಯಿತು.
ಒಳಚರಂಡಿ ವ್ಯವಸ್ಥೆ ಸುಧಾರಣೆ, ಮಳೆ ನೀರು ಸರಾಗವಾಗಿ ಹರಿದು ಹೋಗಲು ಅಗತ್ಯ ಕ್ರಮಗಳು, ಬೀದಿ ದೀಪಗಳ ದುರಸ್ತಿ ಹಾಗೂ ಹೊಸ ದೀಪಗಳ ಅಳವಡಿಕೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಜನರ ಅಹವಾಲುಗಳಿಗೆ ತ್ವರಿತ ಸ್ಪಂದನೆ ನೀಡುವುದು ಅಧಿಕಾರಿಗಳ ಪ್ರಮುಖ ಜವಾಬ್ದಾರಿಯಾಗಿದೆ. ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಶೀಲಿಸಿ ತಕ್ಷಣ ಪರಿಹಾರ ಒದಗಿಸುವ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಸೂಚಿಸಲಾಯಿತು.
“ನಗರವನ್ನು ಸ್ವಚ್ಛ, ಸುಂದರ ಹಾಗೂ ಅಭಿವೃದ್ಧಿ ಹೊಂದಿದ ಮಾದರಿ ನಗರವನ್ನಾಗಿ ರೂಪಿಸುವುದು ನಮ್ಮೆಲ್ಲರ ಗುರಿಯಾಗಿದೆ. ಸರ್ಕಾರ, ಮಹಾನಗರ ಪಾಲಿಕೆ ಹಾಗೂ ಸಾರ್ವಜನಿಕರು ಒಟ್ಟಾಗಿ ಕೈಜೋಡಿಸಿದಾಗ ಮಾತ್ರ ಅಭಿವೃದ್ಧಿಯ ಕನಸು ನನಸಾಗುತ್ತದೆ” ಎಂದು ಶಾಸಕ ಶೈಲೇಂದ್ರ ಬೆಲ್ದಾಳೆ ಅಭಿಪ್ರಾಯಪಟ್ಟರು.
ಮಹಾನಗರ ಪಾಲಿಕೆಯ ಆಯುಕ್ತ ಮುಕುಲ್ ಜೈನ್ ಅವರು ಸಭೆಯಲ್ಲಿ ಮಾತನಾಡಿ, “ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ಹಾಗೂ ಮಹಾ ನಗರ ಪಾಲಿಕೆ ವ್ಯಾಪ್ತಿಯ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಉತ್ತಮಗೊಳಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ ಒತ್ತು ನೀಡಲಾಗುವುದು. ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಅಭಿವೃದ್ಧಿ ಕಾಮಗಾರಿಗಳನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲಾಗುವುದು” ಎಂದರು.
ಸಭೆಯಲ್ಲಿ ಮಹಾನಗರ ಪಾಲಿಕೆಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.




