ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನಡೆಯುತ್ತಿರುವ ಅವ್ಯವಹಾರಗಳನ್ನು ತಡೆದು, ಕಾರ್ಮಿಕರಿಗೆ ನ್ಯಾಯಯುತವಾಗಿ ದೊರೆಯಬೇಕಾದ ಕಲ್ಯಾಣ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ಎಐಸಿಸಿಟಿಯು ರಾಜ್ಯಾಧ್ಯಕ್ಷ ಕಾಮ್ರೇಡ್ ಪಿ.ಪಿ.ಅಪ್ಪಣ್ಣ ಆಗ್ರಹಿಸಿದರು.
ಕರ್ನಾಟಕ ಪ್ರಗತಿಪರ ಕಟ್ಟಡ ಕಾರ್ಮಿಕ ಸಂಘ (ಎಐಸಿಸಿಟಿಯು) ವತಿಯಿಂದ ಬೀದರ್ ನಗರದ ಮಂಗಲ್ ಪೇಟೆಯ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಲಕ್ಷಾಂತರ ಕಟ್ಟಡ ಕಾರ್ಮಿಕರು ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿಕೊಂಡಿದ್ದರೂ, ಅವರಿಗೆ ಸಿಗಬೇಕಾದ ಸೌಲಭ್ಯಗಳು ಸಮರ್ಪಕವಾಗಿ ತಲುಪುತ್ತಿಲ್ಲ. ಕಾರ್ಮಿಕರ ಕಲ್ಯಾಣಕ್ಕಾಗಿ ಸಂಗ್ರಹವಾಗುತ್ತಿರುವ ಹಣವನ್ನು ಅವರ ಹಿತಕ್ಕಾಗಿ ಬಳಸುವ ಬದಲು, ವಿವಿಧ ರೀತಿಯ ಅವ್ಯವಹಾರ ಮತ್ತು ಭ್ರಷ್ಟಾಚಾರಗಳಿಗೆ ಅವಕಾಶ ನೀಡಲಾಗುತ್ತಿದೆ ಎಂದು ಆರೋಪಿಸಿದರು.
ಕಾರ್ಮಿಕರಿಗೆ ಸಾಮಾಜಿಕ ಭದ್ರತೆ, ಶಿಕ್ಷಣ,ಆರೋಗ್ಯ ಮತ್ತು ವಸತಿ ಸೇರಿದಂತೆ ಅಗತ್ಯ ಕಲ್ಯಾಣ ಸೌಲಭ್ಯಗಳನ್ನು ಒದಗಿಸಬೇಕಾದ ಮಂಡಳಿಯು ಕಿಟ್‌ಗಳ ವಿತರಣೆಗೆ ಆದ್ಯತೆ ನೀಡುವ ಮೂಲಕ ಕಾರ್ಮಿಕರ ಮೂಲಭೂತ ಹಕ್ಕುಗಳು ಮತ್ತು ಬೇಡಿಕೆಗಳನ್ನು ಕಡೆಗಣಿಸುತ್ತಿದೆ. ಕಿಟ್‌ಗಳ ಮೂಲಕ ಕಾರ್ಮಿಕರನ್ನು ಅವಲಂಬಿತರನ್ನಾಗಿ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಟೀಕಿಸಿದರು.
‘ಕಾರ್ಮಿಕರು ಎಐಸಿಸಿಟಿಯು ಸಂಘಟನೆಯಡಿ ಒಗ್ಗಟ್ಟಿನಿಂದ ಸಂಘಟಿತರಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಬೇಕು’ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ರಾಮಣ್ಣ ವಿಟ್ಲ ಕರೆ ನೀಡಿದರು.ಕಲ್ಯಾಣ ಮಂಡಳಿಯಲ್ಲಿನ ಭ್ರಷ್ಟಾಚಾರ ಮತ್ತು ಅವ್ಯವಹಾರಗಳನ್ನು ಪ್ರಶ್ನಿಸಿ, ಕಾರ್ಮಿಕರಿಗೆ ನ್ಯಾಯಯುತವಾಗಿ ದೊರೆಯಬೇಕಾದ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಂಘಟಿತ ಹೋರಾಟ ಅಗತ್ಯವಾಗಿದೆ. ಕಾರ್ಮಿಕರು ತಮ್ಮ ದುಡಿಮೆಯ ಹಕ್ಕುಗಳ ಜೊತೆಗೆ ದೇಶದ ರಾಜಕೀಯ ಮತ್ತು ಸಾಮಾಜಿಕ ಬೆಳವಣಿಗೆಗಳ ಬಗ್ಗೆಯೂ ರಾಜಕೀಯ ಪ್ರಜ್ಞೆ ಬೆಳೆಸಿಕೊಳ್ಳಬೇಕು ಎಂದರು.
ಕಾರ್ಮಿಕ ವರ್ಗವು ಸಂಘಟಿತ ಶಕ್ತಿಯಾಗಿ ರೂಪುಗೊಂಡು ದೇಶದ ರಾಜಕೀಯವನ್ನು ನಿರ್ಧರಿಸುವ ಮಟ್ಟಕ್ಕೆ ಬೆಳೆಯಬೇಕು.ಆಳುವ ಸರ್ಕಾರಗಳ ನೀತಿಗಳು ಕಾರ್ಮಿಕರ ಹಿತಾಸಕ್ತಿಗಳಿಗೆ ವಿರುದ್ಧವಾಗಿವೆ ಎಂದು ಆರೋಪಿಸಿದ ಅವರು, ಕಾರ್ಮಿಕ ವಿರೋಧಿ ನೀತಿಗಳು ಹಾಗೂ ಕಾರ್ಮಿಕರ ಹಕ್ಕುಗಳನ್ನು ದುರ್ಬಲಗೊಳಿಸುವ ಕ್ರಮಗಳ ವಿರುದ್ಧ ಕಟ್ಟಡ ಕಾರ್ಮಿಕರು ಸೇರಿದಂತೆ ಇಡೀ ಕಾರ್ಮಿಕ ವರ್ಗ ಸಂಘಟಿತವಾಗಿ ಹೋರಾಟ ನಡೆಸಬೇಕು ಎಂದು ಹೇಳಿದರು.
ಕಟ್ಟಡ ಕಾರ್ಮಿಕರ ಹಕ್ಕುಗಳ ರಕ್ಷಣೆ, ಕಲ್ಯಾಣ ಮಂಡಳಿಯ ಪಾರದರ್ಶಕ ಕಾರ್ಯನಿರ್ವಹಣೆ ಹಾಗೂ ಕಾರ್ಮಿಕರಿಗೆ ದೊರೆಯಬೇಕಾದ ಸೌಲಭ್ಯಗಳ ಸಮರ್ಪಕ ಜಾರಿಗಾಗಿ ಎಐಸಿಸಿಟಿಯು ನಿರಂತರ ಹೋರಾಟ ನಡೆಸಲಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಬೀದರ್ | 71ನೇ ಕನ್ನಡ ರಾಜೋತ್ಸವ: ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ
ಸಮಾವೇಶದಲ್ಲಿ ರಾಜ್ಯ ಜಂಟಿ ಕಾರ್ಯದರ್ಶಿ ಅಜೀಜ್ ಜಾಗೀರದಾರ್ ಸೇರಿದಂತೆ ಸಂಘಟನೆಯ ಪ್ರಮುಖರಾದ ಸಯ್ಯದ್ ಮುಜೀಬ್, ಶ್ರೀನಿವಾಸ್, ಕೌಶಲ್, ಜಾಕಿರ್ ಹುಸೇನ್, ಮಹಮ್ಮದ್ ಅಲ್ತಾಫ್, ಸೈಫ್, ಇಂಜಿಬಂ, ಮೋದಿನ್, ಬಸಪ್ಪ ಹಾಗೂ ಬಾಲಾಜಿ ಉಪಸ್ಥಿತರಿದ್ದರು.




