ಕ್ರೈಸ್ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳ ವಸತಿ ಶಾಲೆಗಳು ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಮೈಲುಗಲ್ಲು ಸ್ಥಾಪಿಸಿವೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಡಾ.ಯೋಗಿಶ್ ಎಸ್.ಬಿ ಹೇಳಿದರು.
ಕರ್ನಾಟಕ ರಾಜ್ಯ ಕ್ರೈಸ್ ಪ್ರಾಂಶುಪಾಲರ ಸಂಘ, ವಸತಿ ಶಾಲಾ ನೌಕರರ ಸಂಘ ಹಾಗೂ ನಿಲಯಪಾಲಕರ ಸಂಘ ಬೀದರ ಇವರ ಸಹಯೋಗದಲ್ಲಿ ಆಯೋಜಿಸಿದ್ದ 2025-26ನೇ ಸಾಲಿನ ದ್ವಿತೀಯ ಪಿಯುಸಿ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
‘ಗ್ರಾಮೀಣ ಭಾಗದ ಬಡ, ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದಲ್ಲಿ ವಸತಿ ಶಾಲೆಗಳು ಮಹತ್ವದ ಪಾತ್ರ ವಹಿಸುತ್ತಿವೆ. ಬಡ ಮಕ್ಕಳ ಪಾಲಿನ ಗುರುಕುಲವೆನಿಸಿರುವ ಬೀದರ ಜಿಲ್ಲೆಯ 29 ವಸತಿ ಶಾಲೆಗಳ ಪೈಕಿ 18 ಶಾಲೆಗಳು ಶೇ.100 ಫಲಿತಾಂಶ ದಾಖಲಿಸಿವೆ. ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ ಶೇ.92.18 ಇದ್ದರೆ, ವಸತಿ ಶಾಲೆಗಳ ಸರಾಸರಿ ಫಲಿತಾಂಶ ಶೇ.98.30 ಆಗಿದೆ’ ಎಂದು ತಿಳಿಸಿದರು.
‘ಪರೀಕ್ಷೆಗೆ ಹಾಜರಾದ 1,295 ವಿದ್ಯಾರ್ಥಿಗಳ ಪೈಕಿ 1,273 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 299 ವಿದ್ಯಾರ್ಥಿಗಳು ಅಗ್ರಶ್ರೇಣಿ, 711 ವಿದ್ಯಾರ್ಥಿಗಳು ಪ್ರಥಮ ದರ್ಜೆ, 173 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಹಾಗೂ 90 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಇದು ಗುಣಮಟ್ಟದ ಶಿಕ್ಷಣದ ಪ್ರತಿಬಿಂಬವಾಗಿದೆ’ ಎಂದು ಹೇಳಿದರು.
ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಗಿರೀಶ್ ರಂಜೋಳಕರ್ ಮಾತನಾಡಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಶಾಲೆಗಳಿಗೆ ದೊರೆಯುವ ಸೌಲಭ್ಯಗಳನ್ನು ವಸತಿ ಶಾಲೆಗಳಿಗೂ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ’ ಭರವಸೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಕ್ರೈಸ್ ಜಿಲ್ಲಾ ಸಮನ್ವಯಾಧಿಕಾರಿ ಶರಣಪ್ಪ ಬಿರಾದಾರ ಮಾತನಾಡಿ, ‘ಬಡ ವಿದ್ಯಾರ್ಥಿಗಳು ವಸತಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿ ಉತ್ತಮ ಸಾಧನೆ ಮಾಡುತ್ತಿರುವ ಸಂದರ್ಭದಲ್ಲಿ ಖಾಸಗಿ ಕಾಲೇಜುಗಳಿಗೆ ಹೆಚ್ಚಿನ ಹಣ ನೀಡಿ ಸೇರ್ಪಡೆಗೊಳ್ಳುವ ಪ್ರವೃತ್ತಿ ಸರಿಯಲ್ಲ’ ಎಂದರು.

‘ವಸತಿ ಪದವಿ ಪೂರ್ವ ಕಾಲೇಜುಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ, ನೀಟ್ ಹಾಗೂ ಜೆಇಇ ಉಚಿತ ತರಬೇತಿ ನೀಡಲಾಗುತ್ತಿದೆ. ಅಗ್ರಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ₹10 ಸಾವಿರ ನಗದು ಪುರಸ್ಕಾರ ನೀಡಲಾಗುತ್ತಿದೆ. ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಉತ್ತಮ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸರ್ಕಾರದಿಂದಲೇ ನೆರವು ಒದಗಿಸಲಾಗುತ್ತಿದೆ’ ಎಂದು ತಿಳಿಸಿದರು.
ಕ್ರೈಸ್ ಪ್ರಾಂಶುಪಾಲರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚನ್ನಬಸವ ಹೇಡೆ ಪ್ರಾಸ್ತಾವಿಕವಾಗಿ ಮಾತನಾಡಿ, ಹಲವು ಸಮಸ್ಯೆಗಳ ನಡುವೆಯೂ ವಸತಿ ಶಾಲೆಗಳು ಪ್ರತಿಭೆ ಬೆಳೆಸುವಲ್ಲಿ ಮಹತ್ವದ ಕೆಲಸ ಮಾಡುತ್ತಿವೆ. ಇದಕ್ಕೆ ಬೋಧಕ-ಬೋಧಕೇತರ ಸಿಬ್ಬಂದಿಗಳ ಸಮರ್ಪಿತ ಸೇವೆಯೇ ಕಾರಣ’ ಎಂದು ಹೇಳಿದರು.
‘ಅಕ್ಷರ ಅವಿಷ್ಕಾರ ಹಾಗೂ ಪಿ.ಎಂ.ಶ್ರೀ ಯೋಜನೆಗಳಲ್ಲಿ ವಸತಿ ಶಾಲೆಗಳನ್ನು ಪರಿಗಣಿಸಬೇಕು. ಶಿಕ್ಷಕರನ್ನು ಜಿಲ್ಲಾ ಹಾಗೂ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗಳಿಗೆ ಆಯ್ಕೆ ಮಾಡಬೇಕು’ ಎಂದು ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಪ್ರತಿ ವಸತಿ ಶಾಲೆಯಿಂದ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ, ಶೇ.100 ಫಲಿತಾಂಶ ದಾಖಲಿಸಿದ ವಸತಿ ಶಾಲೆಗಳ ಪ್ರಾಂಶುಪಾಲರು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿಗೆ ಸನ್ಮಾನಿಸಲಾಯಿತು.
ಬೀದರ್ | ₹2.50 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ಪ್ರಾಂಶುಪಾಲರ ಸಂಘದ ಜಿಲ್ಲಾಧ್ಯಕ್ಷ ರವೀಂದ್ರ ಚಟ್ನಳ್ಳಿ, ವಸತಿ ಶಾಲಾ ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವಿದಾಸ ಜೋಶಿ, ನಿಲಯಪಾಲಕರ ಸಂಘದ ಜಿಲ್ಲಾಧ್ಯಕ್ಷ ಶ್ರೀಮಂತ ಸಪಾಟೆ, ಕ್ರೈಸ್ ಸಿಬ್ಬಂದಿ, ಪಾಲಕರು, ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.




