ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ನಡೆಸಲಾಗುತ್ತಿದ್ದು, ಮತದಾರರ ಪಟ್ಟಿಯನ್ನು ಇನ್ನಷ್ಟು ನಿಖರ, ದೋಷರಹಿತ ಹಾಗೂ ಪಾರದರ್ಶಕಗೊಳಿಸುವ ಉದ್ದೇಶ ಹೊಂದಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು.
ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯ ಅಂಗವಾಗಿ ಮನೆ-ಮನೆ ಸಮೀಕ್ಷೆ ನಡೆಸಲಾಗುವುದು. ಈ ವೇಳೆ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒ) ಮನೆಗಳಿಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಸಂಗ್ರಹಿಸಿ ಪರಿಶೀಲಿಸಲಿದ್ದಾರೆ. ಸಂಗ್ರಹಿಸಲಾದ ಮಾಹಿತಿಯ ಆಧಾರದ ಮೇಲೆ ಮತದಾರರ ಪಟ್ಟಿಯ ಪರಿಷ್ಕರಣೆ, ತಿದ್ದುಪಡಿ ಹಾಗೂ ನವೀಕರಣ ಕಾರ್ಯ ಕೈಗೊಳ್ಳಲಾಗುವುದು” ಎಂದು ಹೇಳಿದರು.
“2026ರ ಅ.1ಅನ್ನು ಅರ್ಹತಾ ದಿನಾಂಕವನ್ನಾಗಿ ನಿಗದಿಪಡಿಸಲಾಗಿದೆ. ಜೂನ್ 20ರಿಂದ 29ರವರೆಗೆ ಸಿದ್ಧತೆ ಮತ್ತು ತರಬೇತಿ ಕಾರ್ಯಕ್ರಮ, ಜೂನ್ 30ರಿಂದ ಜುಲೈ 29ರವರೆಗೆ ಮನೆ-ಮನೆ ಸಮೀಕ್ಷೆ, ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿ ಪ್ರಕಟಣೆ, ಆಗಸ್ಟ್ 5ರಿಂದ ಸೆಪ್ಟೆಂಬರ್ 4ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆ, ಅಕ್ಟೋಬರ್ 3ರವರೆಗೆ ಅವುಗಳ ವಿಲೇವಾರಿ ಹಾಗೂ ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು” ಎಂದು ವಿವರಿಸಿದರು.
“ಮನೆ-ಮನೆ ಸಮೀಕ್ಷೆ ಸಂದರ್ಭದಲ್ಲಿ ಹೊಸದಾಗಿ ಮತದಾನಕ್ಕೆ ಅರ್ಹರಾಗಿರುವವರ ಹೆಸರು ಸೇರ್ಪಡೆ, ಸ್ಥಳಾಂತರಗೊಂಡ ಮತದಾರರ ವಿವರಗಳ ನವೀಕರಣ, ಮೃತರ ಹೆಸರುಗಳ ತೆರವು ಸೇರಿದಂತೆ ಅಗತ್ಯ ತಿದ್ದುಪಡಿಗಳನ್ನು ಕೈಗೊಳ್ಳಲಾಗುವುದು. ಮತದಾರರು ಅಗತ್ಯ ದಾಖಲೆಗಳನ್ನು ಒದಗಿಸಿ ಮತಗಟ್ಟೆ ಅಧಿಕಾರಿಗಳಿಗೆ ಸಹಕಾರ ನೀಡಬೇಕು” ಎಂದು ಮನವಿ ಮಾಡಿದರು.
“ಮತದಾರರ ಕರಡು ಪಟ್ಟಿ ಪ್ರಕಟವಾದ ಬಳಿಕ ಸಾರ್ವಜನಿಕರು ತಮ್ಮ ಹೆಸರು, ವಿಳಾಸ ಹಾಗೂ ಇತರ ವಿವರಗಳಲ್ಲಿ ಯಾವುದೇ ದೋಷಗಳಿದ್ದಲ್ಲಿ ನಿಗದಿತ ಅವಧಿಯಲ್ಲಿ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. ಸಲ್ಲಿಕೆಯಾಗುವ ಅರ್ಜಿಗಳನ್ನು ಪರಿಶೀಲಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.
“2025ರ ಜನವರಿ 6 ರಂದು ಪ್ರಕಟಗೊಂಡ ಅಂತಿಮ ಮತದಾರರ ಪಟ್ಟಿ ಪ್ರಕಾರ, ಬೀದರ್ ಜಿಲ್ಲೆಯಲ್ಲಿ ಒಟ್ಟು 1,528 ಮತಗಟ್ಟೆಗಳು ಕಾರ್ಯನಿರ್ವಹಿಸುತ್ತಿದ್ದು, 7,40,462 ಪುರುಷ ಮತದಾರರು ಇದ್ದು, 7,059,83 ಮಹಿಳಾ ಮತದಾರರು ಸೇರಿದಂತೆ ಒಟ್ಟು 14,46,445 ಮತದಾರರು ದಾಖಲಾಗಿದ್ದಾರೆ” ಎಂದು ಮಾಹಿತಿ ನೀಡಿದರು.
“ಮತದಾರರ ಪಟ್ಟಿ ಪರಿಷ್ಕರಣೆ ಪ್ರಜಾಪ್ರಭುತ್ವದ ಅತ್ಯಂತ ಮಹತ್ವದ ಪ್ರಕ್ರಿಯೆಯಾಗಿದ್ದು, ಎಲ್ಲ ಮತದಾರರು, ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಬಿಎಲ್ಒಗಳಿಗೆ ಅಗತ್ಯ ಸಹಕಾರ ನೀಡಿ ಮತದಾರರ ಪಟ್ಟಿಯನ್ನು ಸಂಪೂರ್ಣ, ನಿಖರ ಮತ್ತು ಪಾರದರ್ಶಕಗೊಳಿಸಲು ಕೈಜೋಡಿಸಬೇಕು” ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮನವಿ ಮಾಡಿದರು.
ಇದನ್ನೂ ಓದಿ : BIG BREAKING | ಪರಮೇಶ್ವರ್ ಏಕೈಕ ಡಿಸಿಎಂ; ನೂತನ ಸಚಿವ ಸಂಪುಟದ ಅಧಿಕೃತ ಪಟ್ಟಿ!
ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು





