ನೀಟ್ ಪರೀಕ್ಷೆ ಪೇಪರ್ ಸೋರಿಕೆ ಪ್ರಕರಣವನ್ನು ಖಂಡಿಸಿ, ಶಿಕ್ಷಣ ಕ್ಷೇತ್ರದಲ್ಲಿ ಸಮಗ್ರ ಸುಧಾರಣೆ ಜಾರಿಗೆ ತರಬೇಕು ಹಾಗೂ ನೀಟ್ ಪರೀಕ್ಷೆ ಅಕ್ರಮಕ್ಕೆ ನೈತಿಕ ಹೊಣೆ ಹೊತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ವಿವಿಧ ವಿದ್ಯಾರ್ಥಿ ಸಂಘಟನೆಗಳು ಹಾಗೂ ಸಾಮಾಜಿಕ ಸಂಘಟನೆಗಳು ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಬೀದರ್ ನಗರದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿ ಚಂದ್ರಕಾಂತ ಆರ್.ನಿರಾಟೆ ನೇತೃತ್ವದಲ್ಲಿ ಕೆಲ ಹೊತ್ತು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ರಾಷ್ಟ್ರಪತಿಗಳ ಹೆಸರಿಗೆ ಬರೆದ ಮನವಿಯನ್ನು ತಹಸೀಲ್ದಾರ್ ಅವರಿಗೆ ಸಲ್ಲಿಸಿದರು.
ಲಡಾಖ್‌ನ ಪರಿಸರ ಹೋರಾಟಗಾರ ಹಾಗೂ ವಿಜ್ಞಾನಿ ಸೋನಂ ವಾಂಗ್ಚೂಕ್ ಅವರು ದೆಹಲಿಯ ಜಂತರ್‌ಮಂತರ್‌ನಲ್ಲಿ ಶಿಕ್ಷಣ ಕ್ಷೇತ್ರದ ಸುಧಾರಣೆ ಮತ್ತು ನೀಟ್ ಪೇಪರ್ ಸೋರಿಕೆ ವಿರೋಧಿಸಿ ನಡೆಸುತ್ತಿರುವ ಅಮರಣಾಂತಿಕ ಉಪವಾಸ ಸತ್ಯಾಗ್ರಹಕ್ಕೆ ಸಂಘಟಕರು ಬೆಂಬಲ ಸೂಚಿಸಿದರು.
ಮುಖಂಡರು ಮಾತನಾಡಿ, “ಪ್ರತಿ ವರ್ಷ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗುತ್ತಿರುವುದರಿಂದ ಲಕ್ಷಾಂತರ ವಿದ್ಯಾರ್ಥಿಗಳ ವೈದ್ಯರಾಗುವ ಕನಸು ನುಚ್ಚುನೂರಾಗುತ್ತಿದೆ. ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದ ಅನೇಕ ವಿದ್ಯಾರ್ಥಿಗಳು ಮಾನಸಿಕವಾಗಿ ಕುಗ್ಗಿದ್ದು, ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಕೇಂದ್ರ ಸರ್ಕಾರದ ದುರಾಡಳಿತ ಹಾಗೂ ಶಿಕ್ಷಣ ವ್ಯವಸ್ಥೆಯ ವೈಫಲ್ಯವೇ ಕಾರಣ” ಎಂದು ಆರೋಪಿಸಿದರು.
ನೀಟ್ ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಶಿಕ್ಷಣ ಕ್ಷೇತ್ರದಲ್ಲಿ ಮೂಲಭೂತ ಸುಧಾರಣೆ ತರಬೇಕು. ನೀಟ್ ಪೇಪರ್ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ಇದನ್ನೂ ಓದಿ : ಬೀದರ್ | ಸೋನಂ ವಾಂಗ್ಚೂಕ್ ಸತ್ಯಾಗ್ರಹಕ್ಕೆ ಬೆಂಬಲ: ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ
ಪ್ರತಿಭಟನೆಯಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ರಾಜಕುಮಾರ ಗೂನ್ನಳ್ಳಿ, ಅಂಬೇಡ್ಕರ್ ಯುವ ಸೇನೆ ಜಿಲ್ಲಾಧ್ಯಕ್ಷ ವಿನೋದ ಅಪ್ಪೆ, ನೀತಿಶ್ ಉಪ್ಪೆ, ಜೈ ಭೀಮ್ ಗರ್ಜನೆ ರಾಜ್ಯಾಧ್ಯಕ್ಷ ರಾಹುಲ್ ಡಾಂಗೆ, ಭೀಮ ಟೈಗರ್ ಸೇನೆ ಜಿಲ್ಲಾಧ್ಯಕ್ಷ ನರಸಿಂಗ್ ಸಾಮ್ರಾಟ್, ಭೀಮ ಆರ್ಮಿ ಭಾರತ ಏಕತಾ ಮಿಷನ್ ಜಿಲ್ಲಾ ಉಪಾಧ್ಯಕ್ಷ ಗೌತಮ ಬಗದಲ್‌ಕರ, ಡಿ.ಎಸ್.ಎಸ್. ನೀಲಿಸೇನೆ ಜಿಲ್ಲಾಧ್ಯಕ್ಷ ಜಗನ್ನಾಥ ಹೊನ್ನಾ, ರಾಷ್ಟ್ರೀಯ ಭೀಮ ಶಕ್ತಿ ಜಿಲ್ಲಾಧ್ಯಕ್ಷ ರಾಜಕುಮಾರ ಭಾವಿಕಟ್ಟಿ, ಗೋಪಾಲ ದೊಡ್ಡಿ, ಭಾರತೀಯ ಪ್ರಜಾ ಸೇನೆ ಜಿಲ್ಲಾಧ್ಯಕ್ಷ ಸಂಜಯ ಭೋಸ್ಲೆ ಸೇರಿದಂತೆ ರೂಪಾಲಿ ನೀರಾಟೆ, ದೀಪಕ ಕಾಂಬಳೆ, ದರ್ಶನ ಕಾಂಬಳೆ, ಪೃಥ್ವಿರಾಜ , ರಾಹುಲ ಭಂಗೂರೆ, ಸುಶೀಲಕುಮಾರ ಬರೂರೆ, ರಾಜಕುಮಾರ ಸೋರಳ್ಳಿಕರ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.





