ಗ್ರಾಮೀಣ ಪ್ರದೇಶದ ನಿವೇಶನ ರಹಿತ ಅರ್ಹ ಕುಟುಂಬಗಳಿಗೆ ಗ್ರಾಮೀಣ ಆಶ್ರಯ ನಿವೇಶನ ಯೋಜನೆಯಡಿ ನಿವೇಶನ ಸೌಲಭ್ಯ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ್ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುತ್ತಿರುವ ಅರ್ಹ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡುವ ಉದ್ದೇಶದಿಂದ ಗ್ರಾಮೀಣ ಆಶ್ರಯ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡಲು, ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಲಭ್ಯವಿರುವ ಸರ್ಕಾರಿ ಜಮೀನುಗಳನ್ನು ಕಂದಾಯ ಇಲಾಖೆಯ ಮೂಲಕ ಮಂಜೂರು ಮಾಡಲು ಕರ್ನಾಟಕ ಭೂ ಮಂಜೂರಾತಿ ನಿಯಮಗಳಲ್ಲಿ ಅವಕಾಶವಿದೆ.
ಗ್ರಾಮೀಣ ಆಶ್ರಯ ನಿವೇಶನ ಯೋಜನೆಯಡಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವಾಸಿಸುತ್ತಿರುವ ನಿವೇಶನ ರಹಿತ ಬಡ ಕುಟುಂಬಗಳಿಗೆ ಪ್ರತಿ ಜಿಲ್ಲೆಗೆ 50,000 ನಿವೇಶನಗಳ ಗುರಿಯನ್ನು ಸರ್ಕಾರ ನಿಗದಿಪಡಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹತೆ ಏನು?
- ಅರ್ಜಿದಾರರು ಕಡ್ಡಾಯವಾಗಿ ಮಹಿಳೆಯಾಗಿರಬೇಕು. ವಿವಾಹಿತ ಮಹಿಳೆ ಅಥವಾ ಏಕ ಮಹಿಳಾ ಒಡೆತನದ ಗೃಹಿಣಿಯಾಗಿರಬೇಕು. ಮಾಜಿ ಸೈನಿಕರು, ವಿಧವೆಯರು, ಅಂಗವಿಕಲರು ಹಾಗೂ ಹಿರಿಯ ನಾಗರಿಕರಾಗಿದ್ದಲ್ಲಿ ಪುರುಷರೂ ಅರ್ಹರಾಗಿರುತ್ತಾರೆ.ಅರ್ಜಿದಾರರು ಸಂಬಂಧಪಟ್ಟ ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿರಬೇಕು. ಅರ್ಜಿದಾರರ ಕುಟುಂಬವು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದಿದ್ದು, ವಾರ್ಷಿಕ ಆದಾಯ ₹1,20,000 ಒಳಗಿರಬೇಕು.
- ಅರ್ಜಿದಾರರ ಕುಟುಂಬವು ನಿವೇಶನ ರಹಿತವಾಗಿರಬೇಕು. ಅರ್ಜಿದಾರರು ಅಥವಾ ಕುಟುಂಬದ ಯಾವುದೇ ಸದಸ್ಯರ ಹೆಸರಿನಲ್ಲಿ ಕರ್ನಾಟಕದ ಯಾವುದೇ ಭಾಗದಲ್ಲಿ ಸ್ವಂತ ಮನೆ ಅಥವಾ ನಿವೇಶನ ಇರಬಾರದು. ಬೇರೆ ಯಾವುದೇ ಯೋಜನೆ ಅಥವಾ ಇಲಾಖೆಯಿಂದ ಈಗಾಗಲೇ ವಸತಿ ಅಥವಾ ನಿವೇಶನ ಸೌಲಭ್ಯ ಪಡೆದಿರಬಾರದು.
ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುತ್ತಿರುವ ಸಾರ್ವಜನಿಕರಿಗಾಗಿ ಆಯಾ ಗ್ರಾಮ ಪಂಚಾಯಿತಿಗಳಲ್ಲಿ ನಿವೇಶನ ರಹಿತರ ಸಮೀಕ್ಷೆ ಈಗಾಗಲೇ ನಡೆಯುತ್ತಿದೆ. ಅರ್ಹ ನಿವೇಶನ ರಹಿತರು ಗ್ರಾಮೀಣ ಆಶ್ರಯ ನಿವೇಶನ ಯೋಜನೆಯ ಮಾರ್ಗಸೂಚಿಯಂತೆ ಅಗತ್ಯ ದಾಖಲೆಗಳೊಂದಿಗೆ ಆಯಾ ಗ್ರಾಮ ಪಂಚಾಯಿತಿ ಕಚೇರಿಗೆ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ : ಬೀದರ್ | ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಆಹ್ವಾನ
ಅರ್ಜಿಯೊಂದಿಗೆ ಪಡಿತರ ಚೀಟಿ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ ಹಾಗೂ ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು. ಅರ್ಜಿಗಳನ್ನು 2026ರ ಸೆಪ್ಟೆಂಬರ್ 30ರೊಳಗೆ ಸಲ್ಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





