ಬೀದರ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡಲಾಗುತ್ತಿದ್ದು, ತಪ್ಪಿತಸ್ಥ ಮಳಿಗೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕ ಶುಕ್ರವಾರ ಜಂಟಿ ಕೃಷಿ ನಿರ್ದೇಶಕಿ ದೇವಿಕಾ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಜಿಲ್ಲಾಧ್ಯಕ್ಷ ಶ್ರೀಮಂತ ಬಿರಾದಾರ ಮಾತನಾಡಿ, “ಮುಂಗಾರು ಹಂಗಾಮು ಆರಂಭವಾಗಿದ್ದು, ಜಿಲ್ಲೆಯ ಹಲವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ (ಪಿಕೆಪಿಎಸ್) ಸಮರ್ಪಕ ಪ್ರಮಾಣದಲ್ಲಿ ರಸಗೊಬ್ಬರ ಲಭ್ಯವಿಲ್ಲದ ಕಾರಣ ರೈತರು ಖಾಸಗಿ ಮಾರುಕಟ್ಟೆಗಳನ್ನು ಅವಲಂಬಿಸಿದ್ದಾರೆ. ಆದರೆ ಡಿಎಪಿ ರಸಗೊಬ್ಬರದ ನಿಗದಿತ ಮಾರುಕಟ್ಟೆ ಬೆಲೆ ರೂ.1,350 ಇದ್ದರೂ, ಕೆಲವು ವ್ಯಾಪಾರಿಗಳು ರೂ.1,800 ನೀಡಿದರೆ ಮಾತ್ರ ರಸಗೊಬ್ಬರ ನೀಡುವುದಾಗಿ ಹೇಳುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.
“ಹೆಚ್ಚುವರಿ ಹಣ ನೀಡಲು ನಿರಾಕರಿಸುವ ರೈತರಿಗೆ ರಸಗೊಬ್ಬರ ದಾಸ್ತಾನು ಇಲ್ಲ ಎಂದು ಹೇಳಿ ವಾಪಸ್ ಕಳುಹಿಸಲಾಗುತ್ತಿದೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಪರಿಶೀಲನೆ ನಡೆಸಿ ತಪ್ಪಿತಸ್ಥ ಅಂಗಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ರೈತರಿಗೆ ನಿಗದಿತ ದರದಲ್ಲಿ ಸಮರ್ಪಕವಾಗಿ ರಸಗೊಬ್ಬರ ದೊರೆಯುವಂತೆ ಕ್ರಮವಹಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.
ರೈತರಿಗೆ ನಿಗದಿತ ದರದಲ್ಲಿ ಗೊಬ್ಬರ ದೊರೆಯದಿದ್ದಲ್ಲಿ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಮುತ್ತಿಗೆ ಹಾಕಿ ಉಗ್ರ ಹೋರಾಟ ನಡೆಸಲಾಗುವುದು. ಹೋರಾಟದ ವೇಳೆ ಯಾವುದೇ ಅಹಿತಕರ ಘಟನೆ ಸಂಭವಿಸಿದರೆ ಅಧಿಕಾರಿಗಳೇ ಹೊಣೆಗಾರರಾಗಿರುತ್ತಾರೆ ಎಂದು ಸಂಘದ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ : ಬೀದರ್ | ʼಮೇಲಾಧಿಕಾರಿಗಳ ಕಿರುಕುಳದಿಂದ ನನ್ನ ಮಗ ಸಾವುʼ : ಮೃತ ಮಹಾದೇವ ತಾಯಿ ಆರೋಪ
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಜಿಲ್ಲಾ ಗೌರವಾಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಸ್ವಾಮಿ ಸಿರ್ಸಿ ಉಪಸ್ಥಿತರಿದ್ದರು.





