ಕನ್ನಡ ಭಾಷೆ ಪ್ರಾಚೀನ ಹಾಗೂ ಶ್ರೀಮಂತ ಭಾಷೆಯಾಗಿದ್ದು, ಅದರ ಉಳಿವು, ಬಳಕೆ ಮತ್ತು ಬೆಳವಣಿಗೆಯ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗನ ಮೇಲಿದೆ ಎಂದು ವಚನಾಮೃತ ಕನ್ನಡ ಸಂಘದ ಅಧ್ಯಕ್ಷ ಸಿದ್ರಾಮಪ್ಪ ಮಾಸಿಮಾಡೆ ಹೇಳಿದರು.
ಬೀದರ್ ತಾಲ್ಲೂಕಿನ ಕಮಠಾಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈಚೆಗೆ ಶ್ರೀ ಬಸವಸಿರಿ ಎಜುಕೇಶನಲ್ ಮತ್ತು ಚಾರಿಟೆಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
“ಕನ್ನಡಿಗರು ನಿತ್ಯ ಜೀವನದಲ್ಲಿ ಕನ್ನಡ ಪದಗಳನ್ನು ಬಳಸುವ ಮೂಲಕ ಭಾಷೆಯ ಗೌರವ ಹೆಚ್ಚಿಸಬೇಕು.ಕನ್ನಡ ಭಾಷಾ ಬೆಳವಣಿಗೆಗೆ ಯುವ ಸಮೂಹ, ಯುವಕರು ಹೆಚ್ಚು ತೊಡಗಿಸಿಕೊಳ್ಳಬೇಕು. ಕನ್ನಡ ಸಾಹಿತ್ಯ ಓದುವ ಜೊತೆಗೆ ನಾಡು-ನುಡಿ, ಸಂಸ್ಕೃತಿಯನ್ನು ಅರಿಯಬೇಕಿದೆ. ಪಠ್ಯದ ಜೊತೆಗೆ ಸಾಹಿತ್ಯ ಓದುವ ಹವ್ಯಾಸ ಮೈಗೂಡಿಸಿಕೊಳ್ಳಬೇಕು” ಎಂದರು.
ಬೀದರ್ ಡಿಡಿಪಿಐ ಕಚೇರಿಯ ವಿಷಯ ಪರಿವೀಕ್ಷಕ ಗುಂಡಪ್ಪ ಹುಡಗೆ ಮಾತನಾಡಿ, “ಪ್ರತಿಯೊಬ್ಬರೂ ತಮ್ಮ ಮನೆ- ಮನಗಳಲ್ಲಿ ಹೆಚ್ಚು ಕನ್ನಡ ಭಾಷೆಯ ಬಳಕೆಗೆ ಆದ್ಯತೆ ನೀಡಿದಾಗ ಕನ್ನಡಕ್ಕೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ. ಮಾತ್ರಭಾಷೆಗೆ ಮೊದಲ ಆದ್ಯತೆ ನೀಡಬೇಕಿದೆ. ನಮ್ಮ ಭಾಷೆ, ಕಲೆ, ಸಂಸ್ಕೃತಿ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ” ಎಂದು ತಿಳಿಸಿದರು.

ಶ್ರೀ ಬಸವಸಿರಿ ಟ್ರಸ್ಟ್ ಅಧ್ಯಕ್ಷೆ ಶೈಲಜಾ ಜಿ. ಹುಡಗೆ ಪ್ರಾಸ್ತಾವಿಕವಾಗಿ ಮಾತನಾಡಿ, “ಮಕ್ಕಳಲ್ಲಿ ಕನ್ನಡ ನಾಡು-ನುಡಿ, ಸಂಸ್ಕೃತಿ ಹಾಗೂ ಭಾಷೆಯ ಬಗ್ಗೆ ಅಭಿಮಾನ ಬೆಳೆಸಬೇಕು. ಕನ್ನಡವನ್ನು ಉಳಿಸಿ, ಬೆಳೆಸಿ, ಬಳಸುವುದು ಪ್ರತಿಯೊಬ್ಬ ಕನ್ನಡಿಗನ ಆದ್ಯ ಕರ್ತವ್ಯವಾಗಿದೆ” ಎಂದು ತಿಳಿಸಿದರು.
ಕಾಲೇಜಿನ ಉಪನ್ಯಾಸಕ ಪ್ರಕಾಶ ಕಾಂಜೋಳಗೆ ಅವರು ಕರ್ನಾಟಕದ ಇತಿಹಾಸ, ಸಂಸ್ಕೃತಿ ಹಾಗೂ ಗತವೈಭವದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಸಮಾಜಶಾಸ್ತ್ರ ಉಪನ್ಯಾಸಕಿ ಶಶಿಕಲಾ ಅವರು ಮಕ್ಕಳ ದಿನಾಚರಣೆಯ ಅಂಗವಾಗಿ ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಜೀವನ ಮತ್ತು ಸಾಧನೆಗಳ ಕುರಿತು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಪ್ರತಿಭಾ ಡಿ.ಮಾತನಾಡಿ, “ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆಯ ಬಗ್ಗೆ ಒಲವು ಮತ್ತು ಅಭಿಮಾನ ಹೆಚ್ಚಿಸಲು ಇಂತಹ ಕಾರ್ಯಕ್ರಮಗಳು ಪ್ರೇರಣೆಯಾಗುತ್ತವೆ” ಎಂದರು.
ಇದನ್ನೂ ಓದಿ : ಭಾಲ್ಕಿ | ಬಸವಣ್ಣನವರ ಅವಹೇಳನ : ರವಿ ಹಂಜ್, ವಿಶ್ವೇಶ್ವರ ಭಟ್ ಪ್ರತಿಕೃತಿ ದಹಿಸಿ ಆಕ್ರೋಶ
ಕಾರ್ಯಕ್ರಮದಲ್ಲಿ ಟ್ರಸ್ಟ್ ಕಾರ್ಯದರ್ಶಿ ಡಾ.ಬಸವದರ್ಶನ ಜಿ.ಹುಡಗೆ, ಉಪನ್ಯಾಸಕಿ ವಿದ್ಯಾವತಿ ಹಿರೇಮಠ ಹಾಗೂ ಉದಗಿರೆ ಆನಂದ, ಸುನಿಲ್ ವೈಜಾಪೂರೆ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.




