ನಮ್ಮ ದೇಶಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿರುವ ವಿಶ್ವದ ಅತ್ಯಂತ ಶ್ರೇಷ್ಠ ಹಾಗೂ ಲಿಖಿತ ಸಂವಿಧಾನ ನಮ್ಮ ಹೆಮ್ಮೆಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಹೇಳಿದರು.
ನಗರದ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
“ಸಂವಿಧಾನದ ಪೀಠಿಕೆಯಲ್ಲಿಯೇ ಇಡೀ ಸಂವಿಧಾನದ ಆಶಯ, ಮೌಲ್ಯಗಳು ಹಾಗೂ ಸಾರಾಂಶ ಅಡಕವಾಗಿವೆ. ನ್ಯಾಯ, ಸಮಾನತೆ, ಸ್ವಾತಂತ್ರ್ಯ, ಭ್ರಾತೃತ್ವ, ಅವಕಾಶಗಳ ಸಮಾನತೆ ಮತ್ತು ವ್ಯಕ್ತಿಯ ಗೌರವದಂತಹ ಮಹತ್ವದ ಮೌಲ್ಯಗಳನ್ನು ಪೀಠಿಕೆ ಪ್ರತಿಪಾದಿಸುತ್ತದೆ. ಜಾತಿ, ಧರ್ಮ, ಭಾಷೆ, ಲಿಂಗ ಸೇರಿದಂತೆ ಯಾವುದೇ ರೀತಿಯ ತಾರತಮ್ಯವಿಲ್ಲದೆ ಎಲ್ಲರಿಗೂ ಸಮಾನ ಗೌರವ ಮತ್ತು ಅವಕಾಶ ಕಲ್ಪಿಸುವುದು ಸಂವಿಧಾನದ ಪ್ರಮುಖ ಆಶಯವಾಗಿದೆ” ಎಂದರು.
“ಸಂವಿಧಾನವು ಪ್ರತಿಯೊಬ್ಬರಿಗೂ ಅಭಿವ್ಯಕ್ತಿ ಹಾಗೂ ವಾಕ್ ಸ್ವಾತಂತ್ರ್ಯ ನೀಡುವುದರ ಜತೆಗೆ ಸಾಮಾಜಿಕ ಮತ್ತು ಆರ್ಥಿಕವಾಗಿ ಸಬಲರಾಗಲು ಅವಕಾಶ ಕಲ್ಪಿಸಿದೆ. ಮಹಿಳೆಯರಿಗೂ ಸಮಾನತೆಯ ಹಕ್ಕುಗಳನ್ನು ನೀಡುವ ಮೂಲಕ ವಿಶ್ವಕ್ಕೆ ಮಾದರಿಯಾಗಿದೆ” ಎಂದರು.
“ದೇಶಕ್ಕೆ ಸ್ವಾತಂತ್ರ್ಯ ದೊರೆತ ಸಂದರ್ಭದಲ್ಲಿ ಸಾಕ್ಷರತೆಯ ಪ್ರಮಾಣ ಶೇ.12ರಿಂದ 13ರಷ್ಟಿತ್ತು. ಇಂದು ಶಿಕ್ಷಣ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ, ರೊಬೊಟಿಕ್ಸ್ ಸೇರಿದಂತೆ ಹಲವು ಆಧುನಿಕ ಆವಿಷ್ಕಾರಗಳ ಮೂಲಕ ಗಣನೀಯ ಸಾಧನೆ ಮಾಡಲಾಗಿದೆ. ಸಂವಿಧಾನವನ್ನು ರಕ್ಷಿಸಿ, ಮತ್ತಷ್ಟು ಬಲಪಡಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ” ಎಂದು ಹೇಳಿದರು.
ಇಂದಿನ ಮಕ್ಕಳು ನಾಳಿನ ಪ್ರಜೆಗಳಾಗಿದ್ದು, ವಿದ್ಯಾರ್ಥಿಗಳು ಕಠಿಣ ಪರಿಶ್ರಮದೊಂದಿಗೆ ದೊಡ್ಡ ಕನಸುಗಳನ್ನು ಕಾಣಬೇಕು. ಆತ್ಮವಿಶ್ವಾಸ ಹೊಂದಿದ್ದರೆ ಜೀವನದ ಗುರಿಗಳನ್ನು ಯಶಸ್ವಿಯಾಗಿ ಸಾಧಿಸಲು ಸಾಧ್ಯ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ, ಸಮಾನ ಅವಕಾಶ ಹಾಗೂ ಗೌರವಯುತ ಜೀವನ ಕಲ್ಪಿಸುವುದು ಸಂವಿಧಾನದ ಉದ್ದೇಶವಾಗಿದೆ. ಪ್ರತಿಯೊಬ್ಬರೂ ಸಂವಿಧಾನದ ಮೌಲ್ಯಗಳನ್ನು ಅರಿತು ವೈಯಕ್ತಿಕ, ಸಾಮಾಜಿಕ ಹಾಗೂ ಸಾರ್ವಜನಿಕ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಅರಣ್ಯ ನಾಶ ಹಾಗೂ ಕಾರ್ಖಾನೆಗಳಿಂದ ಹೊರಬರುವ ಮಲಿನ ತ್ಯಾಜ್ಯದಿಂದ ಪರಿಸರ ಮತ್ತು ಮಾನವ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಎಲ್ ನಿನೋ ಸೇರಿದಂತೆ ಪ್ರಕೃತಿಯಲ್ಲಿನ ಬದಲಾವಣೆಗಳಿಂದ ಪ್ರವಾಹ, ಮಳೆ ಕೊರತೆ, ಗುಡ್ಡ ಕುಸಿತ ಹಾಗೂ ತಾಪಮಾನ ಏರಿಕೆಯಂತಹ ಸಮಸ್ಯೆಗಳು ಎದುರಾಗುತ್ತಿವೆ. ಇವುಗಳನ್ನು ತಡೆಗಟ್ಟಲು ಹಸಿರು ಹೊದಿಕೆ ಹೆಚ್ಚಿಸುವ ಸಂಕಲ್ಪ ಮಾಡಬೇಕು. ಪ್ರತಿಯೊಬ್ಬರೂ ಗಿಡಮರಗಳನ್ನು ಬೆಳೆಸಿ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು ಎಂದರು.

ಬೀದರ್ ವಿಧಾನಸಭಾ ಕ್ಷೇತ್ರದ ಶಾಸಕ ರಹೀಂ ಖಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಾಧ್ಯಾಪಕ ದಿಲೀಪ ಮಾಲೆ ಉಪನ್ಯಾಸ ನೀಡಿದರು.
ಇದೇ ಸಂದರ್ಭದಲ್ಲಿ 2026ನೇ ಸಾಲಿನ ಜಿಲ್ಲಾ ಮಟ್ಟದ ಯುವ ಸಂಸತ್‌ನಲ್ಲಿ ಅತ್ಯುತ್ತಮ ವಿಚಾರ ಮಂಡಿಸಿ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮಕ್ಕೂ ಮುನ್ನ ಸಚಿವ ಈಶ್ವರ ಬಿ.ಖಂಡ್ರೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಇದನ್ನೂ ಓದಿ : ಬೀದರ್ | ಡಿ.3ರಂದು ಕನೇರಿ ಸ್ವಾಮೀಜಿ ವಿರುದ್ಧ ಬೃಹತ್ ಪ್ರತಿಭಟನೆ
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕುಮಾರ್ ಅಪ್ಪೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠಲರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಸಹಾಯಕ ಆಯುಕ್ತ ಅಭಿನವ್ ಜೈನ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಡಾ. ಯೋಗೀಶ್ ಸೇರಿದಂತೆ ಗಣ್ಯರು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



