ಎನ್ಎಸ್ಎಸ್ ಶಿಬಿರವು ಸಮಾಜದ ಸಮಸ್ಯೆಗಳ ಕುರಿತು ಅರಿವು ಮೂಡಿಸಿ ಸೇವಾ ಮನೋಭಾವನೆ ಹಾಗೂ ಮಾನವೀಯತೆ ಬೆಳೆಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಬೀದರ್ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ರವೀಂದ್ರ ಗಬಾಡೆ ಹೇಳಿದರು.
ಚಿಟಗುಪ್ಪ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನಡೆದ ರಾಷ್ಟ್ರೀಯ ಸೇವಾ ಯೋಜನೆ(ಎನ್ಎಸ್ಎಸ್) ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
“ವಿದ್ಯಾರ್ಥಿಗಳು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸಿ ಅನುಭವಾಧಾರಿತ ಶಿಕ್ಷಣ ಪಡೆಯುತ್ತಾರೆ. ವಿದ್ಯಾರ್ಥಿಗಳು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾಮಾಜಿಕ ಹೊಣೆಗಾರಿಕೆಯನ್ನು ಅರಿಯಬೇಕು. ಶೈಕ್ಷಣಿಕ ಪ್ರಗತಿಯೊಂದಿಗೆ ನೈತಿಕ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಅನೀಲಕುಮಾರ್ ಸಿಂಧೆ ಅವರು ಮಾತನಾಡಿ, ʼಎನ್ಎಸ್ಎಸ್ ಯುವಕರಲ್ಲಿ ಶಿಸ್ತು, ನಾಯಕತ್ವ, ಸಹಕಾರ ಮನೋಭಾವ ಮತ್ತು ಜವಾಬ್ದಾರಿತನವನ್ನು ಬೆಳೆಸುತ್ತದೆ. ರಾಷ್ಟ್ರ ನಿರ್ಮಾಣದಲ್ಲಿ ಯುವಕರು ಸಕ್ರಿಯವಾಗಿ ಭಾಗವಹಿಸಲು ಈ ಯೋಜನೆ ಪ್ರೇರೇಪಿಸುತ್ತದೆʼ ಎಂದು ಹೇಳಿದರು.
ಪತ್ರಕರ್ತ ರಾಜಕುಮಾರ ಆರ್ ಹಡಪದ ಮಾತನಾಡಿ, ʼಎನ್ಎಸ್ಎಸ್ ಶಿಬಿರದ ಮೂಲಕ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ, ಆರೋಗ್ಯ ಜಾಗೃತಿ, ಸ್ವಚ್ಛತಾ ಅಭಿಯಾನ ಹಾಗೂ ಗ್ರಾಮೀಣಾಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ತಮ್ಮ ವ್ಯಕ್ತಿತ್ವವನ್ನು ವಿಕಸನಗೊಳಿಸಿಕೊಳ್ಳಬಹುದು. ಹೆಚ್ಚಿನ ಅಧ್ಯಯನದಲ್ಲಿ ತೊಡಗಿಸಿಕೊಂಡು ಯಶಸ್ಸಿನೊಂದಿಗೆ ಬದುಕು ರೂಪಿಸಿಕೊಳ್ಳಬೇಕುʼ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಚಾರ್ಯ ಡಾ.ಜಯಕುಮಾರ ಸಿಂಧೆ ಮಾತನಾಡಿ, ʼವಿದ್ಯಾರ್ಥಿಗಳನ್ನು ಉತ್ತಮ ನಾಗರಿಕರನ್ನಾಗಿ ರೂಪಿಸುವ ಶಕ್ತಿ ಹೊಂದಿದ ಯೋಜನೆಯಾಗಿದೆ. ಯುವಕರಲ್ಲಿ ರಾಷ್ಟ್ರೀಯ ಏಕತೆ, ಸಾಮಾಜಿಕ ಜವಾಬ್ದಾರಿ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಇದರ ಪಾತ್ರ ಮಹತ್ವದ್ದಾಗಿದೆʼ ಎಂದು ಹೇಳಿದರು.
ಇದನ್ನೂ ಓದಿ : ಬೀದರ್ | ಏ.20ರಂದು ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತ್ಯುತ್ಸವ
ಕಾರ್ಯಕ್ರಮದಲ್ಲಿ ಪುರಸಭೆಯ ಮಾಜಿ ಸದಸ್ಯ ವಿಶಾಲ ಬೋರಾಳೆ, ನರಸಪ್ಪ ನರನಾಳ, ಕಿರಣ ಐನಾಪೂರ ಸೇರಿದಂತೆ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿ, ಸಿಬ್ಬಂದಿ ಉಪಸ್ಥಿತರಿದ್ದರು.





