ಮಹಾರಾಷ್ಟ್ರದ ಗಡಿಯೊಂದಿಗೆ ಹೊಂದಿಕೊಂಡಿರುವ ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಉರ್ದು ಹಾಗೂ ಮರಾಠಿ ಶಾಲೆಗಳಲ್ಲಿ ಕನ್ನಡ ಭಾಷಾ ಶಿಕ್ಷಕರ ಕೊರತೆ ನೀಗಿಸುವಂತೆ ತಾಲೂಕು ಕಸಾಪ ಆಗ್ರಹಿಸಿದೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಹಾಗೂ ಕಾರ್ಯದರ್ಶಿ ಸಂತೋಷ ಹಾನಗಲ ಅವರು ಹುಲಸೂರಿನ ಶ್ರೀ ಗುರು ಬಸವೇಶ್ವರ ಸಂಸ್ಥಾನ ಮಠಕ್ಕೆ ಶನಿವಾರ ಭೇಟಿ ನೀಡಿದ ವೇಳೆ, ಹುಲಸೂರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಗರಾಜ ಹಾವಣ್ಣ ಅವರ ನೇತೃತ್ವದಲ್ಲಿ ಮನವಿ ಪತ್ರ ಸಲ್ಲಿಸಿದರು.
“ಹುಲಸೂರು ತಾಲ್ಲೂಕು ಕರ್ನಾಟಕದ ಗಡಿಭಾಗದಲ್ಲಿರುವ ಹಿನ್ನೆಲೆಯಲ್ಲಿ, ಗಡಿಭಾಗದ ಉರ್ದು, ಮರಾಠಿ ಸರ್ಕಾರಿ ಶಾಲೆಗಳಿಗೆ ಅಗತ್ಯವಿರುವ ಕನ್ನಡ ಶಿಕ್ಷಕರನ್ನು ನೇಮಕ ಮಾಡಬೇಕು. ವಾಣಿಜ್ಯ ಅಂಗಡಿಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿ ಅಳವಡಿಸುವಂತೆ ಸ್ಥಳೀಯ ಆಡಳಿತಕ್ಕೆ ಸೂಚಿಸಬೇಕು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಗಡಿಭಾಗದಲ್ಲಿ ಭಾಷಾ ಸೌಹಾರ್ದ ಸಮಾವೇಶ ಆಯೋಜಿಸಬೇಕು” ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಶ್ರೀ ಗುರು ಬಸವೇಶ್ವರ ಸಂಸ್ಥಾನ ಮಠದ ಶಿವಾನಂದ ಸ್ವಾಮೀಜಿ , ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ, ಉಪಾಧ್ಯಕ್ಷ ರಾಜಶೇಖರ ಪಾಟೀಲ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಭೀಮಾಶಂಕರ ಆದೇಪ್ಪ, ಎಸ್ಸಿ-ಎಸ್ಟಿ ಶಿಕ್ಷಕರ ಸಂಘದ ಅಧ್ಯಕ್ಷ ಧರ್ಮೇಂದ್ರ ಭೋಸ್ಲೆ, ಜಿಪಿಟಿ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ರಾಜಕುಮಾರ ಮೇಕರೆ ಹಾಗೂ ಮಹಾದೇವ ಬಡುರೆ, ಸಿದ್ಧಾರೂಢ ಭಾಲ್ಕೆ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ : ಬೀದರ್ | ಅ.24ರಿಂದ ಕಲ್ಯಾಣ ಪರ್ವ: ಭಿತ್ತಿ ಪತ್ರ ಬಿಡುಗಡೆ




