ಬೀದರ್ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಗಿತ್ತೆ ಮಾಧವ ವಿಠ್ಠಲರಾವ್ ಅವರು ಸೋಮವಾರ ಮುಂಜಾನೆ ಕಮಲನಗರ ತಾಲ್ಲೂಕಿನ ಮದನೂರ ಗ್ರಾಮಕ್ಕೆ ದಿಢೀರ್ ಭೇಟಿ ನೀಡಿ, ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಜನಪರ ಯೋಜನೆಗಳ ಅನುಷ್ಠಾನವನ್ನು ಸ್ಥಳದಲ್ಲೇ ಪರಿಶೀಲಿಸಿದರು.
ಮದನೂರ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ ಅವರು, ಪಿಡಿಒ ಕಚೇರಿಯಲ್ಲಿ ಹಾಜರಿಲ್ಲದಿರುವುದನ್ನು ಗಮನಿಸಿ ಅಸಮಾಧಾನ ವ್ಯಕ್ತಪಡಿಸಿದರು. ಪಿಡಿಒ ಸೇರಿದಂತೆ ಎಲ್ಲ ಸಿಬ್ಬಂದಿ ನಿಗದಿತ ಸಮಯಕ್ಕೆ ಕಚೇರಿಯಲ್ಲಿ ಹಾಜರಿದ್ದು, ಸಾರ್ವಜನಿಕರ ಕೆಲಸಗಳಿಗೆ ಸ್ಪಂದಿಸಬೇಕು ಎಂದು ಸೂಚಿಸಿದ ಅವರು, ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳು ಹಾಗೂ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡರು.
ಬಳಿಕ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಸಿಇಒ, ಮಕ್ಕಳಿಗೆ ನೀಡಲಾಗುತ್ತಿರುವ ಪೌಷ್ಠಿಕ ಆಹಾರ, ಕಲಿಕಾ ಸಾಮಗ್ರಿಗಳು ಹಾಗೂ ಕೇಂದ್ರದಲ್ಲಿನ ಮೂಲಸೌಕರ್ಯಗಳನ್ನು ಪರಿಶೀಲಿಸಿದರು. ಅಂಗನವಾಡಿಯಲ್ಲಿ ಕಂಡುಬಂದ ಅವ್ಯವಸ್ಥೆ ಕುರಿತು ಅಸಮಾಧಾನ ವ್ಯಕ್ತಪಡಿಸಿ, ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮದ ಗ್ರಂಥಾಲಯಕ್ಕೂ ಭೇಟಿ ನೀಡಿದ ಅವರು, ಕಟ್ಟಡ ಹಾಗೂ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಗ್ರಂಥಾಲಯದಲ್ಲಿ ಸಮರ್ಪಕ ಸೌಲಭ್ಯಗಳ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ಅವರು, ಗ್ರಾಮೀಣ ಭಾಗದ ಜನರು ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ, ಗ್ರಂಥಾಲಯವನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚಿಸಿದರು.

ನಂತರ ಮದನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಖತಗಾಂವ ಗ್ರಾಮದಲ್ಲಿ ವಿಬಿಜಿ ರಾಮ್‌ಜಿ ಯೋಜನೆಯಡಿ ನಡೆಯುತ್ತಿದ್ದ ಕಾಮಗಾರಿಯನ್ನು ಸಿಇಒ ವೀಕ್ಷಿಸಿದರು. ಕಾಮಗಾರಿಯ ಪ್ರಗತಿ ಕುರಿತು ಕೂಲಿ ಕಾರ್ಮಿಕರಿಂದ ಮಾಹಿತಿ ಪಡೆದ ಅವರು, ಸ್ಥಳದಲ್ಲೇ ಸ್ವತಃ ಮಣ್ಣು ಅಗೆದು ಬುಟ್ಟಿಗೆ ತುಂಬುವ ಮೂಲಕ ಕಾರ್ಮಿಕರನ್ನು ಪ್ರೋತ್ಸಾಹಿಸಿದರು.
ಈ ವೇಳೆ ಕೂಲಿ ಕಾರ್ಮಿಕರೊಂದಿಗೆ ಚರ್ಚಿಸಿದ ಸಿಇಒ, ಕೂಲಿ ಪಾವತಿ ಸೇರಿದಂತೆ ಅವರ ಸಮಸ್ಯೆಗಳನ್ನು ಆಲಿಸಿದರು. ಕೆಲವು ತಾಂತ್ರಿಕ ಕಾರಣಗಳಿಂದ ಕೂಲಿ ಪಾವತಿಯಲ್ಲಿ ವಿಳಂಬವಾಗಿತ್ತು. ಇದೀಗ ಸಮಸ್ಯೆ ಬಗೆಹರಿದಿದ್ದು, ಇನ್ನು ಮುಂದೆ ನಿಗದಿತ ಸಮಯಕ್ಕೆ ಕೂಲಿ ಪಾವತಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಕೆಲಸಕ್ಕೆ ಬರುವಂತೆ ಕರೆ ನೀಡಿದ ಅವರು, ಕೂಲಿ ಪಾವತಿ ಕುರಿತು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು.
ಅಧಿಕಾರಿಗಳು ಹಾಗೂ ಸಿಬ್ಬಂದಿ ಕಚೇರಿಗೆ ಸೀಮಿತವಾಗದೆ ಗ್ರಾಮೀಣ ಪ್ರದೇಶಗಳಿಗೆ ತೆರಳಿ ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟ ಹಾಗೂ ವಿವಿಧ ಯೋಜನೆಗಳ ಅನುಷ್ಠಾನವನ್ನು ಸ್ಥಳದಲ್ಲೇ ಪರಿಶೀಲಿಸಬೇಕು. ಇದರಿಂದ ಯೋಜನೆಗಳ ನೈಜ ಪ್ರಗತಿ ಹಾಗೂ ಜನರಿಗೆ ಆಗುತ್ತಿರುವ ಪ್ರಯೋಜನವನ್ನು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಸಿಇಒ ತಿಳಿಸಿದರು.
ಇದನ್ನೂ ಓದಿ : ಈಶಾನ್ಯ ಶಿಕ್ಷಕರ ಕ್ಷೇತ್ರ: ಆರು ಅಭ್ಯರ್ಥಿಗಳಿಂದ 10 ನಾಮಪತ್ರ ಸಲ್ಲಿಕೆ
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಣಮಂತರಾಯ ಕೌಟಗೆ, ಪಿಡಿಒ ಅನಿತಾ, ಡಿಇಒ ಮಹೇಶ, ಬಿಲ್ ಕಲೆಕ್ಟರ್ ರಾಹುಲ್, ಟಿಎ ವಿರೂಪಾಕ್ಷ ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.




