ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷೆ ರದ್ದತಿ ಘಟನೆ ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ವಿಶ್ವಾಸವನ್ನೇ ಕುಸಿತಗೊಳಿಸಿದ್ದು, ಇದು ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ನೀಡಿರುವ ದೊಡ್ಡ ದ್ರೋಹವಾಗಿದೆ ಎಂದು ಸಂಸದ ಸಾಗರ ಖಂಡ್ರೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ದೇಶದಾದ್ಯಂತ ಸುಮಾರು 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆಯುವ ಕನಸಿನೊಂದಿಗೆ ನೀಟ್ ಪರೀಕ್ಷೆಗೆ ತಯಾರಿ ನಡೆಸಿದ್ದರು. ಕರ್ನಾಟಕದಲ್ಲಿಯೇ ಸುಮಾರು 1 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಗಲು-ರಾತ್ರಿ ಶ್ರಮಪಟ್ಟು ಪರೀಕ್ಷೆಗೆ ಸಿದ್ಧರಾಗಿದ್ದರು. ವಿದ್ಯಾರ್ಥಿಗಳ ಜೊತೆಗೆ ಪೋಷಕರು ಕೂಡ ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಅನೇಕ ತ್ಯಾಗಗಳನ್ನು ಮಾಡಿದ್ದಾರೆ. ಆದರೆ, ಪರೀಕ್ಷೆಯನ್ನು ಪಾರದರ್ಶಕವಾಗಿ ಹಾಗೂ ಸುರಕ್ಷಿತವಾಗಿ ನಡೆಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ’ ಎಂದು ಟೀಕಿಸಿದರು.
‘ಪ್ರತಿ ವರ್ಷವೂ ನೀಟ್ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ, ಅಕ್ರಮಗಳು ಹಾಗೂ ಅವ್ಯವಸ್ಥೆಗಳು ನಡೆಯುತ್ತಿದ್ದು, ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿದ್ಯಾರ್ಥಿಗಳ ಪರಿಶ್ರಮ, ಪೋಷಕರ ಕನಸುಗಳು ಮತ್ತು ದೇಶದ ಶಿಕ್ಷಣ ವ್ಯವಸ್ಥೆಯ ಗೌರವವನ್ನು ರಕ್ಷಿಸುವಲ್ಲಿ ಕೇಂದ್ರ ಸರ್ಕಾರ ನಿರಂತರವಾಗಿ ವಿಫಲವಾಗುತ್ತಿದೆʼ ಎಂದು ಪ್ರಕಟಣೆಯಲ್ಲಿ ತಿಳಿಸಿದರು.
ಒಂದು ಕಡೆ ವಿದ್ಯಾರ್ಥಿಗಳು ವರ್ಷಪೂರ್ತಿ ಶ್ರಮಪಟ್ಟು ಪರೀಕ್ಷೆಗೆ ಸಿದ್ಧರಾಗುತ್ತಿದ್ದರೆ, ಮತ್ತೊಂದು ಕಡೆ ಸರ್ಕಾರದ ನಿರ್ಲಕ್ಷ್ಯ ಮತ್ತು ಅವ್ಯವಸ್ಥೆಯಿಂದ ಅವರ ಕನಸುಗಳು ಭಗ್ನಗೊಳ್ಳುತ್ತಿವೆ. ಇದು ಕೇವಲ ಆಡಳಿತ ವೈಫಲ್ಯವಲ್ಲ, ದೇಶದ ಯುವಜನತೆಗೆ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ಸಾಗರ ಖಂಡ್ರೆ ಆರೋಪಿಸಿದರು.
ಇದನ್ನೂ ಓದಿ : SIR | 16 ರಾಜ್ಯಗಳಿಗೆ ಕಾಲಿಟ್ಟ ಎಸ್‌ಐಆರ್; ಕರ್ನಾಟಕದಲ್ಲಿ ಜೂನ್ 30ರಿಂದ ಆರಂಭ
ʼನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತು ಸಮಗ್ರ ಹಾಗೂ ಪಾರದರ್ಶಕ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಜೊತೆಗೆ, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಬಲವಾದ ಹಾಗೂ ವಿಶ್ವಾಸಾರ್ಹ ಪರೀಕ್ಷಾ ವ್ಯವಸ್ಥೆಯನ್ನು ರೂಪಿಸಬೇಕುʼ ಎಂದು ಅವರು ಆಗ್ರಹಿಸಿದರು.




