ಬೀದರ ಜಿಲ್ಲೆಯಲ್ಲಿನ ಪೆಟ್ರೋಲ್, ಡೀಸೆಲ್ ಹಾಗೂ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸ್ಪಷ್ಟಪಡಿಸಿದ್ದಾರೆ.
ಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಯಾವುದೇ ಕೊರತೆಯಿಲ್ಲ. ಜಿಲ್ಲೆಯಾದ್ಯಂತ ಎಲ್ಲಾ ತೈಲ ಕಂಪನಿಗಳು ಹಾಗೂ ಪೆಟ್ರೋಲ್ ಬಂಕ್‌ಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಇಂಧನ ದಾಸ್ತಾನು ಲಭ್ಯವಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಲ್ಲಾ ಪೆಟ್ರೋಲ್ ಬಂಕ್‌ಗಳಿಗೆ ನಿರಂತರವಾಗಿ ಇಂಧನ ಪೂರೈಕೆ ನಡೆಯುತ್ತಿದ್ದು, ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ. ಸಾರ್ವಜನಿಕರು ಗಾಬರಿಯಿಂದ ಅಗತ್ಯಕ್ಕಿಂತ ಹೆಚ್ಚು ಇಂಧನ ಸಂಗ್ರಹಿಸಿಟ್ಟುಕೊಳ್ಳಬಾರದು. ಇಂಧನ ಅಭಾವದ ಕುರಿತು ಸುಳ್ಳು ಸುದ್ದಿ ಅಥವಾ ವದಂತಿ ಹಬ್ಬಿಸುವವರ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

This video cannot be played in your browser. Open the video directly
ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಸರಬರಾಜು ಸಹ ಜಿಲ್ಲೆಯಲ್ಲಿ ಸಮರ್ಪಕವಾಗಿ ನಡೆಯುತ್ತಿದೆ. ಗೃಹ ಬಳಕೆ ಸಿಲಿಂಡರ್‌ನ್ನು 25 ದಿನಗಳ ಬಳಿಕವೇ ಬುಕ್ ಮಾಡಲು ಅವಕಾಶವಿದ್ದು, ಅನಾವಶ್ಯಕ ಆತಂಕದಿಂದ ಗ್ಯಾಸ್ ಏಜೆನ್ಸಿಗಳ ಮುಂದೆ ಜನಸಂದಣಿ ಆಗಬಾರದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಬಸವಕಲ್ಯಾಣ ಅನುಭವ ಮಂಟಪಕ್ಕೆ ಹೆಚ್ಚುವರಿ ₹50 ಕೋಟಿ ಬಿಡುಗಡೆ : ಸಚಿವ ಈಶ್ವರ ಖಂಡ್ರೆ
ಹೆಚ್‌ಪಿಸಿ, ಐಓಸಿ ಮತ್ತು ಬಿಪಿಸಿ ತೈಲ ಕಂಪನಿಗಳೊಂದಿಗೆ ಜಿಲ್ಲಾಡಳಿತ ನಿರಂತರ ಸಂಪರ್ಕದಲ್ಲಿದ್ದು, ಬೇಡಿಕೆಗೆ ಅನುಗುಣವಾಗಿ ಸಿಲಿಂಡರ್ ಪೂರೈಕೆ ಮಾಡಲಾಗುತ್ತಿದೆ. ಯಾವುದೇ ರೀತಿಯ ಕೊರತೆ ಇಲ್ಲದ ಕಾರಣ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಜಿಲ್ಲಾಡಳಿತ ನೀಡಿದ ಮಾಹಿತಿ ಮೇಲೆ ನಂಬಿಕೆ ಇಟ್ಟು, ವದಂತಿಗಳಿಗೆ ಕಿವಿಗೊಡದೆ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಅವರು ತಿಳಿಸಿದ್ದಾರೆ.





