ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಬಿಜೆಪಿ ನಾಯಕ, ರೌಡಿ ಶೀಟರ್ ಮಣಿಕಂಠ ರಾಠೋಡ್‌ನನ್ನು ಕಲಬುರಗಿ ಪೊಲೀಸರು ಬುಧವಾರ ವಶಕ್ಕೆ ಪಡೆದಿದ್ದಾರೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರ ವ್ಯಾಪ್ತಿಯ ಕಲಗುರ್ತಿ ಗ್ರಾಮದ ದೇವಾನಂದ ರಾಮಚಂದ್ರಪ್ಪ ಕೊರಬಾ ಅವರ ಸಾವಿನ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸದೆ ಪೊಲೀಸ್ ಅಧಿಕಾರಿಗಳು ನಿರ್ಲಕ್ಷಿಸಿದ್ದಾರೆಂದು ಆರೋಪಿಸಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬುಧವಾರ ಪಟ್ಟಣದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕಲಬುರಗಿಯಲ್ಲಿ ಪೊಲೀಸರು ವಶಕ್ಕೆ ಪಡೆದು ನಂತರ ಗುಣಗುರ್ತಿ ಠಾಣೆಗೆ ಕರೆದೊಯ್ದಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣದಲ್ಲಿ ಬಿಜೆಪಿ ನಾಯಕ ಮಣಿಕಂಠ ರಾಠೋಡ್‌ನನ್ನು ಇತ್ತೀಚೆಗಷ್ಟೇ ಚಿತ್ತಾಪುರ ಪೊಲೀಸರು ಬಂಧಿಸಿದ್ದರು.
ಈ ಸುದ್ದಿ ಓದಿದ್ದೀರಾ? ಬೀದರ್ | ₹1.18 ಕೋಟಿ ಮೌಲ್ಯದ ಗಾಂಜಾ ಜಪ್ತಿ
ಅಕ್ಕಿ ಅಕ್ರಮ ಸಾಗಾಣಿಕೆಯ ಆರೋಪ ಸೇರಿದಂತೆ ಯಾದಗಿರಿ, ವಿಜಯಪುರ, ಕಲಬುರಗಿ ಮೂರು ಜಿಲ್ಲೆಯ ಹಲವು ಠಾಣೆಗಳಲ್ಲಿ ಹಲವು ಪ್ರಕರಣಗಳನ್ನು ಎದುರಿಸುತ್ತಿರುವ ಮಣಿಕಂಠ ರಾಠೋಡ್‌ನನ್ನು ಒಂದು ವರ್ಷ ಕಾಲ ಗಡಿಪಾರು ಮಾಡಿ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ವೈ ಎಸ್ ರವಿಕುಮಾರ ಆದೇಶ ಹೊರಡಿಸಿದ್ದರು. ಆದರೆ ಮಣಿಕಂಠ ಗಡಿಪಾರು ಆದೇಶಕ್ಕೆ ಹೈಕೋರ್ಟ್‍ನಲ್ಲಿ ತಡೆಯಾಜ್ಞೆ ಪಡೆದಿದ್ದಾರೆ.