ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಅವಹೇಳನಕಾರಿ ಸಂದೇಶ ಹಂಚಿಕೊಂಡಿದ್ದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ಕೊಡಗಿನ ಯುವಕನೊಬ್ಬ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತನ ಸಾವಿನ ಬಳಿಕ, ಆತ ಬಿಜೆಪಿ ಕಾರ್ಯಕರ್ತನೆಂದು ಹೇಳಲಾಗುತ್ತಿದೆ. ಆತನ ಸಾವಿಗೆ ಕಾಂಗ್ರೆಸ್ ಶಾಸಕರೇ ಕಾರಣವೆಂದು ಬಿಜೆಪಿ ಆರೋಪಿಸಿದೆ. ಆತನ ಸಾವನ್ನು ರಾಜಕೀಯಗೊಳಿಸಿದೆ. ಕೊಡಗಿನಲ್ಲಿ ಪರಿಸ್ಥಿತಿ ಉದ್ವಿಗ್ನಗೊಳ್ಳುವ ಸಾಧ್ಯತೆಯನ್ನು ಅರಿತಿರುವ ಪೊಲೀಸ್ ಇಲಾಖೆ, ಜಿಲ್ಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ಯುವಕನನ್ನು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗೋಣಿಮರೂರು ಮೂಲದ ವಿನಯ್ ಸೋಮಯ್ಯ ಎಂದು ಗುರುತಿಸಲಾಗಿದೆ. ಆತ ವಾಟ್ಸ್‌ಆ್ಯಪ್ ಗ್ರೂಪ್‌ವೊಂದಕ್ಕೆ ಅಡ್ಮಿನ್ ಆಗಿದ್ದರು. ಆ ಗುಂಪಿನಲ್ಲಿ ಕಳೆದ ಜನವರಿಯಲ್ಲಿ ಕೊಡಗು ಜಿಲ್ಲೆಯ ಶಾಸಕರೊಬ್ಬರ ಕುರಿತು ಅವಹೇಳನಕಾರಿ ಪೋಸ್ಟ್‌ಅನ್ನು ಹಂಚಿಕೊಂಡಿದ್ದರು ಎಂದು ಆರೋಪಿಸಲಾಗಿತ್ತು. ಅದೇ ಆರೋಪದ ಮೇಲೆ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಬಳಿಕ, ಆತ ಕೋರ್ಟ್‌ನಿಂದ ನಿರಪೇಕ್ಷಣಾ ಜಾಮೀನು ಪಡೆದುಕೊಂಡಿದ್ದರು. ಇದೀಗ, ಬೆಂಗಳೂರಿನಲ್ಲಿ ಆತ ತಾನು ಕೆಲಸ ಮಾಡುತ್ತಿದ್ದ ಕಚೇರಿಯಲ್ಲಿಯೇ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್‌ನೋಟ್ ಕೂಡ ಬರೆದಿಟ್ಟಿದ್ದಾರೆ.
ಡೆತ್‌ನೋಟ್‌ನಲ್ಲಿ, “ರಾಜಕೀಯ ಪ್ರೇರಿತವಾಗಿ ಪೊಲೀಸರು ತನ್ನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನನ್ನ ವಿರುದ್ಧ ಪಿತೂರಿ ನಡೆಸಲಾಗುತ್ತಿದೆ. ನನ್ನ ಸಾವಿಗೆ ಕಾಂಗ್ರೆಸ್ ಮುಖಂಡ ತನ್ನೀರಾ ಮೈನಾ ಕಾರಣ. ನನ್ನ ಮೇಲೆ ಎಫ್‌ಐಆರ್ ದಾಖಲಿಸಿ, ನನ್ನ ಫೋಟೋವನ್ನು ಕೊಡಗು ಜಿಲ್ಲೆಯಾದ್ಯಂತ ಹಂಚಿದ್ದಾರೆ. ಇದರಿಂದ ನಾನು ಮಾನಸಿಕವಾಗಿ ಕುಗ್ಗಿದ್ದೇನೆ. ಪ್ರತಿದಿನ ಜಿಗುಪ್ಸೆಯಾಗುತ್ತಿತ್ತು. ಆದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ” ಎಂದು ಬರೆದಿರುವುದಾಗಿ ವರದಿಯಾಗಿದೆ.
ಈ ವರದಿ ಓದಿದ್ದೀರಾ?: ಸುಪ್ರೀಂ ಕೋರ್ಟ್ ತೀರ್ಪು ಮತ್ತು ‘ಬುಲ್ಡೋಜರ್ ನ್ಯಾಯ’: ದಂಡನೆಯ ಹೆಸರಿನಲ್ಲಿ ದ್ವೇಷ ಸಾಧನೆ
ಆತನ ಸಾವಿನ ಬೆನ್ನಲ್ಲೇ, ಕಾಂಗ್ರೆಸ್ ವಿರುದ್ಧ ಬಿಜೆಪಿ ಆರೋಪಗಳನ್ನು ಮಾಡಲಾರಂಭಿಸಿದೆ. ಮೃತ ವಿನಯ್‌ನನ್ನು ಬಿಜೆಪಿ ಕಾರ್ಯಕರ್ತನೆಂದು ಬಿಜೆಪಿಗರು ಹೇಳಿಕೊಳ್ಳುತ್ತಿದ್ದಾರೆ. “ಬೆಂಗಳೂರಿನಲ್ಲಿ ನೆಲೆಸಿದ್ದ ಕೊಡಗು ಮೂಲದ ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆಗೆ ವಿರಾಜಪೇಟೆ ಕಾಂಗ್ರೆಸ್ ಶಾಸಕ ಪೊನ್ನಣ್ಣ, ಮಡಿಕೇರಿ ಶಾಸಕ ಡಾ. ಮಂಥರ್ ಗೌಡ ಹಾಗೂ ಕಾಂಗ್ರೆಸ್ ಕಾರ್ಯಕರ್ತ ತನ್ನೀರಾ ಮೈನಾ ಕಾರಣ. ಈ ಮೂವರನ್ನು ಕೂಡಲೇ ಬಂಧಿಸಬೇಕು. ಇಲ್ಲದಿದ್ದರೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ” ಎಂದು ಬಿಜೆಪಿ ನಾಯಕ, ವಿಧಾನಸಭೆ ಮಾಜಿ ಸ್ಪೀಕರ್ ಕೆ.ಜಿ ಬೋಪಯ್ಯ ಆಗ್ರಹಿಸಿದ್ದಾರೆ.
ಮೃತ ವಿನಯ್‌ನ ಮೃಹದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ. ಬಳಿಕ, ಆತನ ಮೃತದೇಹವನ್ನು ಕೊಡಗು ಜಿಲ್ಲೆಯ ಆತನ ನಿವಾಸಕ್ಕೆ ಕೊಂಡೊಯ್ಯುವ ಸಾಧ್ಯತೆ ಇದೆ. ಇದೇ ವೇಳೆ, ಬಿಜೆಪಿಗರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ, ಕೊಡಗು ಜಿಲ್ಲೆಯಲ್ಲಿ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ ಎಂದು ವರದಿಯಾಗಿದೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.