ಕಲ್ಯಾಣ ಕರ್ನಾಟಕ ಸಾರಿಗೆಯ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಜಮೀನಿಗೆ ನುಗ್ಗಿದ ಪರಿಣಾಮ ಸುಮಾರು 30ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ನಸಲಾಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಸಾರಿಗೆ ಬಸ್ ಮಾನ್ವಿಯಿಂದ ಘಟಕದಿಂದ ಗಂಗಾವತಿ ತಾಲೂಕಿಗೆ ತೆರಳುತ್ತಿತ್ತು .ಬಸ್ ಚಾಲಕನ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಬಸ್ ನಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಅದರಲ್ಲಿ 30 ಕ್ಕಿಂತ ಹೆಚ್ಚು ಜನರೂ ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರ ಸಹಾಯದಿಂದ ಮಾನ್ವಿ ಆಸ್ಪತ್ರೆಗೆ ಗಾಯಾಳುಗಳನ್ನು ರವಾನಿಸಲಾಯಿತು .ಗಂಭೀರ ಗಾಯಗೊಂಡ ಜನರಿಗೆ ರಾಯಚೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಮಾನ್ವಿ ಶಾಸಕ ಜಿ ಹಂಪಯ್ಯ ನಾಯಕ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ವಿಚಾರಿಸಿದರು.

