ತಮಿಳುನಾಡಿಗೆ ಮುಂದಿನ 15 ದಿನ ಪ್ರತಿನಿತ್ಯ ಐದು ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ರೈತರು, ಸೆ.23ರಂದು ಮಂಡ್ಯ ಬಂದ್‌ಗೆ ಕರೆ ನೀಡಿದ್ದಾರೆ.
ಸುಪ್ರೀಂ ನಿರ್ದೇಶನದ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಪ್ರತಿಭಟನೆ ತೀವ್ರಗೊಂಡಿದ್ದು, ಮಂಡ್ಯದ ಸಂಜಯ್ ವೃತ್ತದಲ್ಲಿ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸಿದರು.
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮಲಗಿ ರೈತರು ಪ್ರತಿಭಟನೆ ನಡೆಸಿದ ಪರಿಣಾಮ ಸಂಚಾರ ದಟ್ಟಣೆ ಉಂಟಾಗಿ ಟ್ರಾಫಿಕ್ ಜಾಮ್ ಕೂಡ ಉಂಟಾಯಿತು.
ಈ ನಡುವೆ ಸುಪ್ರೀಂ ಕೋರ್ಟಿನ ಆದೇಶವನ್ನು ಧಿಕ್ಕರಿಸಿರುವ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯು, ಸೆ.23ರ ಶನಿವಾರ ಮಂಡ್ಯ ಜಿಲ್ಲಾ ಬಂದ್‌ಗೆ ಕರೆ ನೀಡಿದೆ.
ಬಂದ್ ಕರೆಯ ಹಿನ್ನೆಲೆಯಲ್ಲಿ ಬಂದ್ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಲು ಎಲ್ಲ ರಾಜಕೀಯ ಪಕ್ಷಗಳ ಮುಖಂಡರು, ರೈತ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾಮಾಜಿಕ ಹೋರಾಟಗಾರರೊಂದಿಗೆ ಸೆ.22ರಂದು ಸಭೆ ಕೂಡ ಕರೆಯಲಾಗಿದೆ.
ತಮಿಳುನಾಡಿಗೆ ಕೆಆರ್ಎಸ್ನಿಂದ 5000 ಕ್ಯೂಸೆಕ್ ನೀರು ಹರಿಸಬೇಕೆಂದು ಸುಪ್ರೀಂಕೋರ್ಟ್ ಮತ್ತೆ ಆದೇಶ ನೀಡಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಸುಪ್ರೀಂ ಕೋರ್ಟ್ನಲ್ಲಿ ಸಮರ್ಪಕವಾಗಿ ವಾದ ಮಂಡಿಸುವಲ್ಲಿ ರಾಜ್ಯ ಸರ್ಕಾರದ ಕಾನೂನು ತಜ್ಞರು ವಿಫಲವಾಗಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.