ಆರೋಗ್ಯಕ್ಕೆ ಮಾರಕವಾಗಿರುವ ಮಾದಕ ದ್ರವ್ಯ, ಧೂಮಪಾನ, ತಂಬಾಕು ಸೇವನೆಯಂತಹ ಚಟಗಳನ್ನು ತ್ಯಜಿಸಬೇಕು. ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಹೇಳಿದರು.
ನಗರದ ಜೆ ಹೆಚ್ ಪಟೇಲ್ ಸಭಾಂಗಣದಲ್ಲಿ ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ಆಯೋಜಿಸಿದ್ದ ಮಾದಕ ವಸ್ತು ಸೇವನೆ ದುಷ್ಪರಿಣಾಮಗಳ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಮಾದಕ ವ್ಯಸನಕ್ಕೆ ಬಿದ್ದು ಚಿಕ್ಕ ವಯಸ್ಸಿನಲ್ಲಿಯೇ ಸಾವಿಗೀಡಾಗುವವರ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಕುಟುಂಬ ತೊಂದರೆ ಅನುಭವಿಸುತ್ತಿರುವುದನ್ನೂ ಪ್ರತಿನಿತ್ಯ ನೋಡುತ್ತಿದ್ದೇವೆ. ಚಿಕ್ಕ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕುಂದುತ್ತಿದೆ. ಹಾಗಾಗಿ ದುಶ್ಚಟಗಳಿಂದ ದೂರವಾದಲ್ಲಿ ಮಾತ್ರ ಉತ್ತಮವಾದ ಬದುಕು ಸಾಗಿಸಬಹುದು” ಎಂದು ಸಲಹೆ ನೀಡಿದರು.
ಮಕ್ಕಳಲ್ಲಿರುವ ಸಾಮರ್ಥ್ಯ ಗುರುತಿಸಿ ಹಲವಾರು ಶಿಕ್ಷಕರು ನಿಸ್ವಾರ್ಥದಿಂದ ಮಕ್ಕಳ ಪ್ರತಿಭೆಗೆ ಮಾರ್ಗದರ್ಶನ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳು ತಮಗೆ ಒದಗಿರುವ ಅವಕಾಶಗಳನ್ನು ಉತ್ತಮವಾಗಿ ಬಳಸಿಕೊಳ್ಳಬೇಕು. ಎಷ್ಟೇ ದೊಡ್ಡ ವ್ಯಕ್ತಿಯಾದರೂ ತಾವು ಇದ್ದ ಗ್ರಾಮ, ಜಿಲ್ಲೆ, ಶಾಲೆ ಮರೆಯಬಾರದು ಎಂದು ಕಿವಿಮಾತು ಹೇಳಿದರು.

ಇದೇ ಕಾರ್ಯಕ್ರಮದಲ್ಲಿ ʼಮಾದಕ ವಸ್ತು ಸೇವನೆಯಿಂದಾಗುವ ದುಷ್ಪರಿಣಾಮಗಳʼ ಕುರಿತು ಭಾಷಣ ಸ್ಫರ್ಧೆ ಏರ್ಪಡಿಸಲಾಗಿತ್ತು. ಇದರಲ್ಲಿ ಉತ್ತಮವಾಗಿ ಭಾಷಣ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಬಿ ಟಿ ಕವಿತಾ ಮಾತನಾಡಿ, “ಇಂತಹ ಕಾರ್ಯಕ್ರಮ ಆಯೋಜಿಸಿರುವುದು ತೃಪ್ತಿ ತಂದಿದೆ. ವಿದ್ಯಾರ್ಥಿಗಳಿಗೆ ಸರಿಯಾದ ಹಾದಿ ಯಾವುದು ಎಂಬುದನ್ನ ತಿಳಿಸಬೇಕು. ಪ್ರೌಢಶಾಲೆ, ಪಿಯುಸಿ ಹಂತಗಳಲ್ಲಿ ಗ್ರಹಿಸಿದ ವಿಷಯವನ್ನ ಜೀವನದಲ್ಲಿ ಅಳವಡಿಸಿಕೊಳ್ಳುವ ಸಾಧ್ಯತೆ ಹೆಚ್ಚು. ಹೀಗಾಗಿ ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತ ಭಾಷಣ ಸ್ಪರ್ಧೆಯ ಮೂಲಕ ಜಾಗೃತಿ ಮೂಡಿಸುವ ವಿಶೇಷ ಕಾರ್ಯಕ್ರಮ ಏರ್ಪಡಿಸಿರುವುದು ಅವರಲ್ಲಿ ಉತ್ತಮ ಜೀವನದ ಮೌಲ್ಯಗಳು ಬೆಳೆಯಲು ಸಹಕಾರಿಯಾಗುತ್ತದೆ” ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಂಜುನಾಥ ಪ್ರಸನ್ನ ಮಾತನಾಡಿ, “ಸ್ವಾಸ್ತ್ಯ ಸಮಾಜ ನಿರ್ಮಾಣವಾಗಬೇಕಾದರೆ ಮಾದಕ ವಸ್ತುಗಳ ಸೇವನೆಯಿಂದ ಮುಕ್ತರಾಗಬೇಕು. ಹದಿ ಹರೆಯದ ವಯಸ್ಸಿನಲ್ಲಿ ಮಾದಕ ವಸ್ತು ಸೇವನೆ ಚಟಕ್ಕೆ ಬಲಿಯಾಗದಂತೆ ಅರಿವು ಮೂಡಿಸಬೇಕು. ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳುವುದನ್ನು ಮುಖ್ಯ ಗುರಿಯಾಗಿಸಿಕೊಳ್ಳಬೇಕು” ಎಂದರು.
ಈ ಸುದ್ದಿ ಓದಿದ್ದೀರಾ? ಕೊಡಗು | 6ನೇ ತರಗತಿ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ಎನ್ ಶಶಿಧರ್, ಡಿವೈಎಸ್‍ಪಿ ಲಕ್ಷ್ಮಯ್ಯ, ತೀರ್ಪುಗಾರರಾಗಿ ಜಿ ಶಾಲಿನಿ ಕುಮಾರಿ, ಸಹ ಪ್ರಾಧ್ಯಪಕ ಎಂ ಕೆ ಮಂಜುನಾಥ್ ಹಾಗೂ ಇನ್ನಿತರರು ಇದ್ದರು.
