ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಗ್ರಾಮಾಡಳಿತ ಅಧಿಕಾರಿ ಹುದ್ದೆಯ ನೇರ ನೇಮಕಾತಿಗೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಗ್ರಾಮಾಡಳಿತ ಅಧಿಕಾರಿ ಹುದ್ದೆಯ ನೇರ ನೇಮಕಾತಿಗಾಗಿ ಜಿಲ್ಲೆಯ 28 ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಿತು. ಜಿಲ್ಲಾಧಿಕಾರಿ ಶಿಲ್ಪಾ ನಾಗ್ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿಕೊಟ್ಟು ಪರಿಶೀಲಿಸಿದರು.
ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಪಾರದರ್ಶಕವಾಗಿ ಹಾಗೂ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲು ಕೈಗೊಳ್ಳಲಾಗಿದ್ದ ವ್ಯವಸ್ಥೆಗಳನ್ನು ಜಿಲ್ಲಾಧಿಕಾರಿ ಖುದ್ದಾಗಿ ವೀಕ್ಷಿಸಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮಾರ್ಗಸೂಚಿಗಳನ್ವಯ ಮತ್ತು ನಿರ್ದೇಶನಗಳನ್ನು ಪಾಲಿಸುತ್ತಿರುವ ಬಗ್ಗೆ ಪರಿಶೀಲಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿರುವ ಪರೀಕ್ಷಾ ಕೊಠಡಿಗಳಿಗೆ ಭೇಟಿ ನೀಡಿ, ಪರೀಕ್ಷಾ ಕೇಂದ್ರಗಳಲ್ಲಿ ನಿರ್ವಹಿಸುತ್ತಿರುವ ಕಾರ್ಯಗಳು, ಕಲ್ಪಿಸಲಾಗಿರುವ ವ್ಯವಸ್ಥೆಗಳ ಕುರಿತು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಪರೀಕ್ಷಾ ಕೇಂದ್ರದ ನಿಯೋಜಿತ ಮುಖ್ಯಸ್ಥರಿಂದ ಮಾಹಿತಿ ಪಡೆದರು.

ಚಾಮರಾಜನಗರ ಜಿಲ್ಲೆಯಲ್ಲಿ ಒಟ್ಟು 8,771 ಮಂದಿ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಈ ಪೈಕಿ 1,411 ಅಭ್ಯರ್ಥಿಗಳು ಪರೀಕ್ಷೆಗೆ ಗೈರುಹಾಜರಾಗಿದ್ದರು. 7,360 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಚಾಮರಾಜನಗರ ತಾಲೂಕಿನಲ್ಲಿ 10 ಪರೀಕ್ಷಾ ಕೇಂದ್ರಗಳಿದ್ದು, 2,880 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಈ ಪೈಕಿ 445 ಅಭ್ಯರ್ಥಿಗಳು ಪರೀಕ್ಷೆಗೆ ಗೈರುಹಾಜರಾಗಿದ್ದರು. 2,435 ಮಂದಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.
ಗುಂಡ್ಲುಪೇಟೆಯಲ್ಲಿ 4 ಪರೀಕ್ಷಾ ಕೇಂದ್ರಗಳಿದ್ದು, 1,619 ಮಂದಿ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಈ ಪೈಕಿ 262 ಅಭ್ಯರ್ಥಿಗಳು ಪರೀಕ್ಷೆಗೆ ಗೈರುಹಾಜರಾಗಿದ್ದರು. 1,357 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಈ ಸುದ್ದಿ ಓದಿದ್ದೀರಾ? ಕೊಡಗು | ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆಧ್ಯತೆ; ಸಚಿವ ಶರಣಪ್ರಕಾಶ್ ಪಾಟೀಲ್
ಯಳಂದೂರು ತಾಲೂಕಿನಲ್ಲಿ 2 ಪರೀಕ್ಷಾ ಕೇಂದ್ರಗಳಿದ್ದು, 438 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಈ ಪೈಕಿ 62 ಮಂದಿ ಅಭ್ಯರ್ಥಿಗಳು ಪರೀಕ್ಷೆಗೆ ಗೈರುಹಾಜರಾಗಿದ್ದರು. 376 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಕೊಳ್ಳೇಗಾಲ ತಾಲೂಕಿನಲ್ಲಿ 9 ಪರೀಕ್ಷಾ ಕೇಂದ್ರಗಳಿದ್ದು, 2,856 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಈ ಪೈಕಿ 465 ಮಂದಿ ಅಭ್ಯರ್ಥಿಗಳು ಪರೀಕ್ಷೆಗೆ ಗೈರುಹಾಜರಾಗಿದ್ದರು. 2,391 ಮಂದಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಹನೂರು ತಾಲೂಕಿನಲ್ಲಿ 3 ಪರೀಕ್ಷಾ ಕೇಂದ್ರಗಳಿದ್ದು, 978 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಈ ಪೈಕಿ 177 ಅಭ್ಯರ್ಥಿಗಳು ಪರೀಕ್ಷೆಗೆ ಗೈರುಹಾಜರಾಗಿದ್ದರು. 801 ಮಂದಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಸಂಪೂರ್ಣ ಮಾಹಿತಿ ಒದಗಿಸಿದರು.