ಜಿಲ್ಲೆಯಾದ್ಯಂತ ಜೂನ್ 28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮ ಯಶಸ್ವಿಯಾಗಿ ಜಾರಿಗೊಳಿಸಲು ಅಗತ್ಯ ಪೂರ್ವಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಲಸಿಕಾ ಟಾಸ್ಕ್ ಪೋರ್ಸ್ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಅಂಗವಾಗಿ ಜೂನ್ 28ರಂದು ಆಗತಾನೆ ಹುಟ್ಟಿದ ಮಗುವಿನಿಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪೋಲಿಯೋ ಲಸಿಕೆ ಹಾಕಲಾಗುವುದು. ಈ ಬಾರಿ ಜಿಲ್ಲೆಯ 58,775 ಮಕ್ಕಳಿಗೆ ಪೋಲಿಯೋ ಹನಿ ನೀಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಯಾವುದೇ ಮಗು ಪೋಲಿಯೋ ಹನಿಯಿಂದ ವಂಚಿತವಾಗದಂತೆ ಸಂಬಂಧಪಟ್ಟ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಆರೋಗ್ಯ ಇಲಾಖೆಗೆ ಎಲ್ಲಾ ಇಲಾಖೆಗಳು ಅಗತ್ಯ ಸಹಕಾರ ನೀಡಬೇಕು ಎಂದು ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.
ಜೂನ್ 28ರಂದು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬೂತ್ ಮಟ್ಟದಲ್ಲಿ ಮಕ್ಕಳಿಗೆ ಲಸಿಕೆ ಹಾಕಲಾಗುವುದು. ಜೂನ್ 29ರಿಂದ 30ರವರೆಗೆ ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ ಜೂನ್ 29ರಿಂದ ಜುಲೈ 1ರವರೆಗೆ ನಗರ ಪ್ರದೇಶಗಳಲ್ಲಿ ಆರೋಗ್ಯ ಕಾರ್ಯಕರ್ತರು ಮನೆಮನೆಗೆ ಭೇಟಿ ನೀಡಿ ಮಕ್ಕಳಿಗೆ ಪೋಲಿಯೋ ಹನಿ ನೀಡಲಿದ್ದಾರೆ ಎಂದು ಹೇಳಿದರು.
ನಗರ ಪ್ರದೇಶದಲ್ಲಿ 93 ಹಾಗೂ ಗ್ರಾಮೀಣ ಪ್ರದೇಶದಲ್ಲಿ 519 ಸೇರಿ ಒಟ್ಟು 612 ಬೂತ್‌ಗಳನ್ನು ತೆರೆಯಲಾಗುತ್ತದೆ. ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ 25 ಟ್ರಾನ್ಸಿಟ್ ಬೂತ್‌ಗಳನ್ನು ತೆರೆಯಲಾಗುವುದು ಎಂದು ತಿಳಿಸಿದರು.
ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಅಂಗನವಾಡಿಗಳಲ್ಲಿ ಪಲ್ಸ್ ಪೋಲಿಯೋ ಕುರಿತು ವ್ಯಾಪಕ ಅರಿವು ಮೂಡಿಸಬೇಕು. ಶಾಲೆಗಳ ಪ್ರಾರ್ಥನಾ ವೇಳೆಯಲ್ಲಿ ಶಿಕ್ಷಕರು ಮಕ್ಕಳಿಗೆ ಪೋಲಿಯೋ ಲಸಿಕೆಯ ಮಹತ್ವದ ಬಗ್ಗೆ ಮಾಹಿತಿ ನೀಡಬೇಕು. ಗ್ರಾಮ ಪಂಚಾಯಿತಿ ಅಧಿಕಾರಿಗಳು ಕಾರ್ಯಕ್ರಮಕ್ಕೆ ಅಗತ್ಯ ಸಹಕಾರ ನೀಡಬೇಕು ಎಂದು ಸೂಚಿಸಿದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದಲ್ಲಿ ತಾಲೂಕು ಮಟ್ಟದ ಅನುಷ್ಠಾನ ಸಮಿತಿಗಳನ್ನು ರಚಿಸಬೇಕು. ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸ್ತ್ರೀಶಕ್ತಿ ಹಾಗೂ ಸ್ವಸಹಾಯ ಗುಂಪುಗಳ ಸದಸ್ಯರನ್ನು ಸಕ್ರಿಯವಾಗಿ ತೊಡಗಿಸಿಕೊಂಡು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಕ್ವಾರಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಮಕ್ಕಳು, ಇತರೆ ರಾಜ್ಯಗಳಿಂದ ವಲಸೆ ಬಂದಿರುವ ಕಾರ್ಮಿಕರ ಮಕ್ಕಳು, ಕಾಡಂಚಿನ ಗ್ರಾಮಗಳ ಹಾಗೂ ಅರಣ್ಯವಾಸಿಗಳ ಮಕ್ಕಳು ಪೋಲಿಯೋ ಹನಿಯಿಂದ ವಂಚಿತರಾಗದಂತೆ ವಿಶೇಷ ಗಮನ ಹರಿಸಬೇಕು. ಕಾರ್ಯಕ್ರಮದ ನಾಲ್ಕು ದಿನಗಳ ಕಾಲ ನಿರಂತರ ವಿದ್ಯುತ್ ಸೌಲಭ್ಯ ಕಲ್ಪಿಸಬೇಕು. ಬೂತ್‌ಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಬೇಕು ಎಂದು ಹೇಳಿದರು.
ಸಭೆಯಲ್ಲಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ ಅವರು, ಭಾರತ ಪೋಲಿಯೋ ಮುಕ್ತ ರಾಷ್ಟ್ರವಾಗಿದ್ದರೂ ನೆರೆಯ ದೇಶಗಳಾದ ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನದಲ್ಲಿ ಇನ್ನೂ ಪೋಲಿಯೋ ಪ್ರಕರಣಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದೇಶಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ?ಮೈಸೂರು | ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ ಕಚೇರಿ ಸ್ಥಳಾಂತರಕ್ಕೆ ವಿರೋಧ: ಧರಣಿ ಎಚ್ಚರಿಕೆ ನೀಡಿದ ಜಿ.ಟಿ. ದೇವೇಗೌಡ
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಉಪ ವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಸುರೇಶ್, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜು, ಪ್ರಾದೇಶಿಕ ಸಾರಿಗೆ ಅಧಿಕಾರಿ ಗಾಯತ್ರಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಇದ್ದರು.




