ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್ ಸಮ್ಮುಖದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಬಾಲ್ಯ ವಿವಾಹ ನಿಷೇದಾಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಬಾಲ್ಯ ವಿವಾಹ ತಡೆಗೆ ಪರಿಣಾಮಕಾರಿ ಚಟುವಟಿಕೆಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.
ಚಾಮರಾಜನಗರ ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಘೋಷಿಸುವ ಸಂಬಂಧ ಜನ ಸಾಮಾನ್ಯರಿಗೆ ಅರಿವು ಮೂಡಿಸುವ ಪರಿಣಾಮಕಾರಿ ಚಟುವಟಿಕೆಗಳನ್ನು ಪ್ರತಿ ಗ್ರಾಮ ಪಂಚಾಯಿತಿ, ಹೋಬಳಿ, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಹಮ್ಮಿಕೊಳ್ಳಲು ಅವಶ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.
‘ ಜಿಲ್ಲಾ ಕಾರಾಗೃಹದಲ್ಲಿ ಶೇ. 50ರಷ್ಟು ಫೋಕ್ಸೋ ಪ್ರಕರಣಗಳಲ್ಲಿ ಯುವಕರು ಜೈಲುವಾಸ ಅನುಭವಿಸುತ್ತಿದ್ದಾರೆ. ಇದು ದುರದೃಷ್ಟಕರ ಸಂಗತಿಯಾಗಿದೆ. ಬಾಲ್ಯ ವಿವಾಹ ನಡೆಯುವ ಮೊದಲೇ ಸೂಕ್ಷ್ಮ ನಿಗಾವಹಿಸಿ ಪ್ರಕರಣಗಳು ಜರುಗದಂತೆ ತಡೆಯುವುದೇ ಉತ್ತಮ ಕೆಲಸವಾಗಿದೆ. ಬಾಲ್ಯವಿವಾಹ ನಿರ್ಮೂಲನೆಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸಮಿತಿಗಳನ್ನು ರಚಿಸಿ ಜಿಲ್ಲೆಯ ಯಾವುದೇ ಭಾಗದಲ್ಲಿ ಬಾಲ್ಯ ವಿವಾಹ ಕಂಡುಬಂದರೆ ತಕ್ಷಣವೇ ಕಟ್ಟುನಿಟ್ಟಿನ ಕ್ರಮವಹಿಸುವಂತೆ ಬಾಲ್ಯ ವಿವಾಹ ನಿಷೇದಾಧಿಕಾರಿಗಳಿಗೆ ಸೂಚಿಸಲಾಗಿದೆ ‘ ಎಂದರು.
ಮಾರ್ಚ್ 1ರಿಂದ ನವೆಂಬರ್ 14 ರ ವರೆಗೆ ಜಿಲ್ಲೆಯ 130 ಗ್ರಾಮ ಪಂಚಾಯಿತಿ ಹಾಗೂ ತಾಲೂಕುಗಳನ್ನು ಬಾಲ್ಯ ವಿವಾಹದಿಂದ ಮುಕ್ತಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ನಿರಂತರ ಕಾರ್ಯಾಚರಣೆಗೆ ಮುಂದಾಗಬೇಕು. ಈ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಗ್ರಾಮ ಪಂಚಾಯಿತಿ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿ, ಸಿಬ್ಬಂದಿಗಳನ್ನು ಗುರುತಿಸಿ ನವೆಂಬರ್ 14 ರ ಮಕ್ಕಳ ದಿನಾಚರಣೆಯಂದು ಬಹುಮಾನ, ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಗುವುದು ಎಂದು ತಿಳಿಸಿದರು.
” ಬಾಲ್ಯ ವಿವಾಹ ಜರುಗಿದ ಸಂದರ್ಭದಲ್ಲಿ ತಡೆಯಾಜ್ಞೆ ತರುವ ಕೆಲಸ ಬಾಲ್ಯ ವಿವಾಹ ನಿಷೇದಾಧಿಕಾರಿಗಳಿಂದ ಆಗಬೇಕು. ಎಲ್ಲಾ ತಾಲೂಕುಗಳಲ್ಲಿ ತಹಶೀಲ್ದಾರ್ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸಮನ್ವಯ ಸಾಧಿಸಿ ಬಾಲ್ಯ ವಿವಾಹ ದುಷ್ಪರಿಣಾಮಗಳ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಜಾಗೃತಿ ಮೂಡಿಸಬೇಕು. ಬೀದಿ ನಾಟಕ ಹಾಗೂ ಸಂಗೀತ ಕಾರ್ಯಕ್ರಮಗಳ ಮೂಲಕ ಜನಸಂದಣಿ ಹೆಚ್ಚಿರುವ ಪ್ರದೇಶಗಳಲ್ಲಿ ಸಾಮಾನ್ಯ ಜನರಿಗೆ ಅರ್ಥವಾಗುವ ಆಡುಭಾಷೆಯಲ್ಲಿ ಅರಿವು ಮೂಡಿಸಬೇಕು. ಮನೆ ಮನೆ ಕಸ ಸಂಗ್ರಹಿಸುವ ಸ್ವಚ್ಚಭಾರತ್ ವಾಹನಗಳಲ್ಲಿ ಜಿಂಗಲ್ಸ್ ಗಳನ್ನು ಪ್ಲೇ ಮಾಡಿಸುವ ಕಾರ್ಯ 1 ವಾರದೊಳಗೆ ಆಗಬೇಕು ” ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
” ಬಾಲ್ಯವಿವಾಹ ತಡೆಯಲು ಸಹಕರಿಸುವಂತೆ ಮೊಬೈಲ್‍ಗಳಲ್ಲಿ ಕಾಲರ್ ಟೋನ್ ಅಳವಡಿಸಬೇಕು. ಐ.ಇ.ಸಿ ಕಾರ್ಯಕ್ರಮದಡಿ ಜಿಲ್ಲಾ ವ್ಯಾಪ್ತಿಯ ಎಲ್ಲೆಡೆ ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿಸುವ ಘೋಷಣೆ ಕುರಿತ ಹೋರ್ಡಿಂಗ್ಸ್, ಪ್ಲೆಕ್ಸ್ ಬೋರ್ಡ್ ಪ್ರದರ್ಶಿಸಬೇಕು. ಪೊಲೀಸ್ ಬ್ಯಾರಿಕೇಡ್‍ನಲ್ಲಿ ಬಾಲ್ಯ ವಿವಾಹ ನಿಷೇಧ ಕುರಿತ ಸ್ಟಿಕ್ಕರ್ ಅಳವಡಿಸಬೇಕು. ಪೊಲೀಸ್ ಇಲಾಖೆಯಿಂದ ಎಲ್ಲಾ ಶಾಲೆಗಳಲ್ಲಿ ಅಳವಡಿಸಿರುವ ಆಪ್ತ ಗೆಳತಿ ದೂರು ಪೆಟ್ಟಿಗೆಯ ಸದುಪಯೋಗವಾಗಬೇಕು. ದೇವಸ್ಥಾನ, ಚರ್ಚ್, ಕಲ್ಯಾಣ ಮಂಟಪಗಳು ಹಾಗೂ ಮುದ್ರಣಾಲಯಗಳಿಗೆ ಮದುವೆಯಾಗುವ ಹುಡುಗ, ಹುಡುಗಿಯ ವಯಸ್ಸನ್ನು ಪರಿಶೀಲಿಸುವಂತೆ ಸಾರ್ವಜನಿಕ ಸುತ್ತೋಲೆಯನ್ನು ಆದಷ್ಟು ಶೀಘ್ರವಾಗಿ ಹೊರಡಿಸಲಾಗುವುದು ” ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ಮಾತನಾಡಿ ” ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿಸುವ ಸಲುವಾಗಿ ಚೈಲ್ಡ್ ಮ್ಯಾರೇಜ್ ಪ್ರಿವೆನ್ಸನ್ ಪ್ರೊಟೆಕ್ಷನ್ ಕಮಿಟಿ ಕ್ರಿಯಾ ಶೀಲವಾಗಬೇಕು. ಬಾಲ್ಯ ವಿವಾಹ ಗ್ರಾಮ ಪಂಚಾಯಿತಿಗಳಲ್ಲಿ ಮಕ್ಕಳ ಗ್ರಾಮ ಸಭೆಗಳು, ಎಲ್ಲಾ ಶಾಲೆಗಳ ಶಾಲಾ ಅಭಿವೃದ್ಧಿ ಸಮಿತಿ, ಬಾಲ ವಿಕಾಸ ಸಮಿತಿ, ಮಕ್ಕಳ ಕಲ್ಯಾಣ ಸಮಿತಿಗಳು ನಿಗದಿತ ಕಾಲಮಿತಿಯಲ್ಲಿ ಸಭೆಗಳನ್ನು ನಡೆಸಿ ಕಾರ್ಯ ಚಟುವಟಿಕೆಗಳನ್ನು ಚುರುಕುಗೊಳಿಸಬೇಕು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜರುಗುವ ಮದುವೆಗಳ ಬಗ್ಗೆ ಆಯಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಮಾಹಿತಿ ನೀಡಬೇಕು.
ಎಲ್ಲಾ ಗ್ರಾಮ ಪಂಚಾಯಿತಿ ಅಧಿಕಾರಿಗಳು ಜನರಿಗೆ ಬಾಲ್ಯ ವಿವಾಹಕ್ಕೆ ಮುಂದಾಗದಂತೆ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಬೇಕು. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪ್ರತಿ 15 ದಿನಗಳಿಗೆ ಪ್ರಗತಿ ಪರಿಶೀಲನಾ ಸಭೆಗಳನ್ನು ಏರ್ಪಡಿಸಬೇಕು. ಬಾಲ್ಯ ವಿವಾಹ ನಿರ್ಮೂಲನೆಗಾಗಿ ಆಕಾಶವಾಣಿ ಸೇರಿದಂತೆ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳಬೇಕು. ಜಿಲ್ಲಾಮಟ್ಟದಲ್ಲಿ ಮಕ್ಕಳ ರಕ್ಷಣಾ ನೀತಿಯನ್ನು ರೂಪಿಸಿ ಜಾರಿಗೊಳಿಸಬೇಕು ” ಎಂದು ಸಲಹೆ ಮಾಡಿದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ಸಾವಿನಲ್ಲೂ ಸಂಪನ್ಮೂಲ ಕ್ರೂಡೀಕರಣ ಕೈಬಿಡಿ, ಜನ ಹಿತ ಕಾಪಾಡಿ : ಎಬಿಜಿಪಿ
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ ಪ್ರಸನ್ನ, ಡಿವೈಎಸ್‍ಪಿ ಲಕ್ಷ್ಮಯ್ಯ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಚಲುವರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮಂಜುನಾಥ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್. ಚಿದಂಬರ, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.