ಕಿಡಿಗೇಡಿಯೊಬ್ಬ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಿರುವ ಘಟನೆ ಚಾಮರಾಜನಗರ ತಾಲೂಕಿನ ಮಸಣಾಪುರ ಗ್ರಾಮದಲ್ಲಿ ಭಾನುವಾರ ನಡೆದಿದೆ. ಘಟನೆಯು ಜಿಲ್ಲೆಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕಿಡಿಗೇಡಿಯನ್ನು ಹಿಡಿದಿರುವ ಗ್ರಾಮಸ್ಥರು, ಆತನನ್ನು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ.
ಭಾನುವಾರ ಮುಂಜಾನೆ ಸುಮಾರು 4:30ರ ವೇಳೆಗೆ ಗ್ರಾಮದ ಚಂದ್ರು ಎಂಬ ಯುವಕ, ಗ್ರಾಮದಲ್ಲಿದ್ದ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸಗಣಿ ಬಳಿಯಲು ಯತ್ನಿಸುತ್ತಿದ್ದಾನೆ. ಆ ವೇಳೆ, ಗ್ರಾಮದ ಕೆಲವರು ಸ್ಥಳಕ್ಕೆ ಬಂದಿದ್ದು ಆತನನ್ನು ಹಿಡಿದಿದ್ದಾರೆ. ಘಟನಾಸ್ಥಳದಲ್ಲಿದ್ದ ವಿದ್ಯುತ್ ಕಂಬಕ್ಕೆ ಆತನನ್ನು ಕಟ್ಟಿಹಾಕಿ, ಚಪ್ಪಲಿ ಹಾರ ಹಾಕಿ ಥಳಿಸಿದ್ದಾರೆ ಆತನ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ಇರುವುದರಿಂದ, ಬಿಗಿ ಬಂದೋಬಸ್ತ್‌ಗಾಗಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಸ್ಥಳಕ್ಕೆ ಬಂದಿದ್ದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ASP) ಶಶಿಧರ್, “ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ” ಎಂದು ಹೇಳಿದ್ದಾರೆ.
ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಡಿರುವ ಅವಮಾನವನ್ನು ದಲಿತ ಸಮುದಾಯದ ಮುಖಂಡರು, ಯುವಜನರು ಹಾಗೂ ಚಿಂತಕರು ತೀವ್ರವಾಗಿ ಖಂಡಿಸಿದ್ದಾರೆ.
“ಗ್ರಾಮದಲ್ಲಿ ಶಾಂತಿ ಕದಡುವ ಉದ್ದೇಶದಿಂದಲೇ ಇಂತಹ ನೀಚ ಕೃತ್ಯ ಎಸಗಲಾಗಿದೆ. ಸಮಾಜದಲ್ಲಿ ಸೌಹಾರ್ದತೆ ಕೆಡಿಸುವ ಇಂತಹ ಘಟನೆಗಳು ಇನ್ಮುಂದೆ ಮರುಕಳಿಸಬಾರದು. ಸರ್ಕಾರ ಮತ್ತು ಕಾನೂನು ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಬಂಧಿತ ಆರೋಪಿ ಚಂದ್ರು ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಆತನಿಗೆ ಕಠಿಣ ಶಿಕ್ಷೆ ವಿಧಿಸಬೇಕು” ಎಂದು ಸಾರ್ವಜನಿಕರು ಮತ್ತು ದಲಿತ ಸಂಘಟನೆಗಳು ಒತ್ತಾಯಿಸಿವೆ.
ಪೊಲೀಸರು ಆರೋಪಿಯನ್ನು ವಿಚಾರಣೆ ಒಳಪಡಿಸಿದ್ದಾರೆ. ಈ ಕೃತ್ಯದ ಹಿಂದೆ ಬೇರೆ ಯಾರದ್ದಾದರೂ ಪ್ರಚೋದನೆ ಇದೆಯೇ ಎಂಬ ಆಯಾಮದಲ್ಲಿಯೂ ತನಿಖೆ ನಡೆಸುತ್ತಿದ್ದಾರೆ.



