ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಮಂಗಳವಾರ ಬೆಳಗ್ಗೆ ಹುಲಿ ದಾಳಿಗೆ ರಂಗಮ್ಮ (55) ಮೃತಪಟ್ಟಿದ್ದಾರೆ.
ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಬೇಡಗುಳಿಯ ರಾಮಯ್ಯನ ಪೋಡು ಬಳಿ ಸೋಮವಾರ ರಾತ್ರಿ ಹಾಡಿಯಲ್ಲಿ ರವಿ ಎಂಬವರ ಮೇಲೆ ಹುಲಿ ದಾಳಿ ಮಾಡಿತ್ತು, ರವಿ ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ. ಆದರೆ, ಮಂಗಳವಾರ ಬೆಳಗ್ಗೆ ರಂಗಮ್ಮ ಎಂಬವರ ಮೇಲೆ ಹುಲಿ ದಾಳಿ ನಡೆಸಿದ್ದು, ತೀವ್ರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದಾರೆ.
ಘಟನೆ ಬೆನ್ನಲ್ಲೇ ಹುಲಿಯನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಆರಂಭಿಸಿದ ಕೆಲವೇ ಗಂಟೆಗಳಲ್ಲಿ ಹುಲಿಯನ್ನು ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸೆರೆ ಹಿಡಿದಿದ್ದಾರೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಪಾಯಕಾರಿ ಪ್ಲಾಸ್ಟಿಕ್: ಮನ್ಸೂರ್ ಮಾತುಗಳನ್ನು ಸರ್ಕಾರ-ಜನ ಆಲಿಸುವರೇ?
ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಬೇಡಗುಳಿಯ ರಾಮಯ್ಯನಪೋಡು ಬಳಿ ಹುಲಿ ದಾಳಿಯಿಂದ ಗಾಯಗೊಂಡಿರುವ ರವಿ ಶೀಘ್ರ ಗುಣಮುಖರಾಗಲಿ. ಹುಲಿ ದಾಳಿಯಿಂದ ಮೃತ ರಂಗಮ್ಮ ಅವರ ಕುಟುಂಬದ ಸದಸ್ಯರಿಗೆ ನೋವು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಗಾಯಾಳು ರವಿ ಅವರ ಚಿಕಿತ್ಸಾ ವೆಚ್ಚ ಭರಿಸಲು ಮತ್ತು ಮೃತರ ಕುಟುಂಬಸ್ಥರಿಗೆ ಪರಿಹಾರದ ಮೊತ್ತ ವಿತರಿಸುವಂತೆಯೂ ಅಧಿಕಾರಿಗಳಿಗೆ ಸೂಚಿಸಿರುವ ಈಶ್ವರ ಖಂಡ್ರೆ, ಕಾಡಿನಂಚಿನ ಜನರು ರಾತ್ರಿಯ ವೇಳೆ ಮತ್ತು ಮುಂಜಾನೆ ವನ ಪ್ರದೇಶದಲ್ಲಿ ಸಂಚರಿಸುವಾಗ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.