ಚಾಮರಾಜನಗರ ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳ ನಿರ್ಮಾಣ ಕಾರ್ಯಕ್ಕೆ ವೇಗ ನೀಡಲು ಅಧಿಕಾರಿಗಳು ನಗರ ಹಾಗೂ ಗ್ರಾಮೀಣ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಾಜೀವ್ ಗಾಂಧಿ ವಸತಿ ನಿಗಮದ (ಆರ್‌ಜಿಎಚ್‌ಸಿಎಲ್) ವಸತಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಪ್ರಧಾನಮಂತ್ರಿ ಆವಾಸ್ ಯೋಜನೆ, ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆ, ವಾಜಪೇಯಿ ನಗರ ವಸತಿ ಯೋಜನೆ, ಡಿ. ದೇವರಾಜ ಅರಸು ವಸತಿ ಯೋಜನೆ ಸೇರಿದಂತೆ ವಿವಿಧ ವಸತಿ ಯೋಜನೆಗಳಡಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಹಾಯಧನದೊಂದಿಗೆ ಮನೆಗಳನ್ನು ಮಂಜೂರು ಮಾಡಿವೆ. ಈ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳಲು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಖುದ್ದು ಸ್ಥಳ ಪರಿಶೀಲನೆ ನಡೆಸಿ, ನಿರ್ಮಾಣ ಕಾರ್ಯದ ಪ್ರಗತಿಯನ್ನು ಪರಿಶೀಲಿಸಬೇಕು. ಫಲಾನುಭವಿಗಳಿಗೆ ಅಗತ್ಯ ನೆರವು ಒದಗಿಸಿ ಮನೆಗಳ ನಿರ್ಮಾಣ ಪೂರ್ಣಗೊಳ್ಳಲು ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲೆಯ ನಗರ ವಸತಿ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿದಾಗ, ಚಾಮರಾಜನಗರ ನಗರಸಭೆ ಶೇ. 74.94ರಷ್ಟು ಪ್ರಗತಿ ಸಾಧಿಸಿದೆ. ಕೊಳ್ಳೇಗಾಲ ನಗರಸಭೆ ಶೇ. 65.95, ಗುಂಡ್ಲುಪೇಟೆ ಪುರಸಭೆ ಶೇ. 70.52, ಹನೂರು ಪಟ್ಟಣ ಪಂಚಾಯಿತಿ ಶೇ. 78.85 ಹಾಗೂ ಯಳಂದೂರು ಪಟ್ಟಣ ಪಂಚಾಯಿತಿ ಶೇ. 79.12ರಷ್ಟು ಪ್ರಗತಿ ದಾಖಲಿಸಿವೆ. ಪ್ರಧಾನಮಂತ್ರಿ ಆವಾಸ್ ಯೋಜನೆಯ 2026ರ ಸೆಪ್ಟೆಂಬರ್ ಅಂತ್ಯದ ಹಂತದ ಪ್ರಕ್ರಿಯೆ ಪೂರ್ಣಗೊಂಡಿದ್ದು, ಪ್ರಸ್ತುತ ಪ್ರಧಾನಮಂತ್ರಿ ಆವಾಸ್ ಯೋಜನೆ 2.0 ಅನುಷ್ಠಾನಗೊಳ್ಳುತ್ತಿದೆ. ಈ ಯೋಜನೆಯಡಿ ಪರಿಶೀಲನೆಗೆ ಬಾಕಿ ಇರುವ 104 ಅರ್ಜಿಗಳನ್ನು ಆದಷ್ಟು ಶೀಘ್ರವಾಗಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.
ಪ್ರಸ್ತುತ ಪ್ರಜಾಸೇವಾ ಆಂದೋಲನ ಅಭಿಯಾನದಡಿ ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ನಡೆಯುತ್ತಿರುವ ಸಭೆಗಳಲ್ಲಿ ಮನೆ ನಿರ್ಮಾಣಕ್ಕೆ ಜನರಿಂದ ಹೆಚ್ಚಿನ ಬೇಡಿಕೆ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಅಧಿಕಾರಿಗಳು ಅರ್ಹ ಫಲಾನುಭವಿಗಳನ್ನು ಗುರುತಿಸಿ, ಅವರ ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ಮನೆ ನಿರ್ಮಾಣಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ತಿಳಿಸಿದರು.
ಈ ವಿಶೇಷ ವೀಡಿಯೊ ವೀಕ್ಷಿಸಿದ್ದೀರಾ? https://youtu.be/LjQ1qNssx5g?si=y5cdupVPajc7Fdi-
ಕೆಲವು ಕಡೆ ಮನೆಗಳು ಮಂಜೂರಾಗಿದ್ದರೂ ಫಲಾನುಭವಿಗಳಿಗೆ ಅನುದಾನ ಬಿಡುಗಡೆಯಾಗದಿರುವುದು ಗಮನಕ್ಕೆ ಬಂದಿದೆ. ಈ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಚರ್ಚಿಸಿ ಅನುದಾನ ಬಿಡುಗಡೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ಗ್ರಾಮೀಣ ವಸತಿ ಯೋಜನೆಗಳ ಅನುಷ್ಠಾನ ಚಾಮರಾಜನಗರ ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳ ನಿರ್ಮಾಣ ಕಾರ್ಯಕ್ಕೆ ವೇಗ ನೀಡಲು ಅಧಿಕಾರಿಗಳು ನಗರ ಹಾಗೂ ಗ್ರಾಮೀಣ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಪ್ರಗತಿಯ ಬಗ್ಗೆಯೂ ಪರಿಶೀಲನೆ ನಡೆಸಲಾಯಿತು.
ಈ ವಿಶೇಷ ವರದಿ ಓದಿದ್ದೀರಾ? ಮೈಸೂರು | ಬರದ ನಾಡಿನಲ್ಲಿ ದಸರಾ ಸಂಭ್ರಮ! ಕಂಬಳ ಮುಖ್ಯವೋ, ಅನ್ನದಾತನ ಬದುಕೋ?
ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಹೊನ್ನರಾಜು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವೆಂಕಟೇಶ್, ಚಾಮರಾಜನಗರ ನಗರಸಭೆ ಪೌರಾಯುಕ್ತ ಪರಶುರಾಮ್ ಛಲವಾದಿ, ಕೊಳ್ಳೇಗಾಲ ನಗರಸಭೆ ಪೌರಾಯುಕ್ತ ನಟರಾಜು, ಯಳಂದೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಹೇಶ್‌ಕುಮಾರ್, ಹನೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರೇಖಾ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಇತರರು ಸಭೆಯಲ್ಲಿ ಇದ್ದರು.




