ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ದೊಡ್ಡತುಪ್ಪುರು ಗ್ರಾಮದಲ್ಲಿ ಸ್ವಚ್ಛತಾ ಕಾರ್ಮಿಕರನ್ನು ಯಾವುದೇ ಸುರಕ್ಷತಾ ಪರಿಕರಗಳಿಲ್ಲದೆ ಚರಂಡಿ ಸ್ವಚ್ಛತಾ ಕಾರ್ಯಕ್ಕೆ ನಿಯೋಜಿಸಿರುವುದಾಗಿ ಸಾರ್ವಜನಿಕರು ಆರೋಪಿಸಿದ್ದಾರೆ.
ಶಿಂಡನಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡತುಪ್ಪುರು ಗ್ರಾಮದಲ್ಲಿ ನಡೆಯುತ್ತಿರುವ ಚರಂಡಿ ಸ್ವಚ್ಛತಾ ಕಾರ್ಯದ ವೇಳೆ ಕಾರ್ಮಿಕರು ಕೈಗವಸು, ಸುರಕ್ಷತಾ ಶೂ, ಮಾಸ್ಕ್ ಸೇರಿದಂತೆ ಅಗತ್ಯ ರಕ್ಷಣಾತ್ಮಕ ಪರಿಕರಗಳಿಲ್ಲದೆ ಬರಿಗೈಯಲ್ಲೇ ಕೆಲಸ ನಿರ್ವಹಿಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಸ್ವಚ್ಛತಾ ಕಾರ್ಮಿಕರಿಗೆ ಸುರಕ್ಷಿತ ಕೆಲಸದ ವಾತಾವರಣ ಕಲ್ಪಿಸುವುದು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಹಾಗೂ ಇಲಾಖೆಯ ಜವಾಬ್ದಾರಿಯಾಗಿದೆ. ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಚರಂಡಿ ಸ್ವಚ್ಛತಾ ಕಾರ್ಯದಲ್ಲಿ ತೊಡಗುವ ಸಿಬ್ಬಂದಿಗೆ ಕೈಗವಸು, ಸುರಕ್ಷತಾ ಶೂ, ಮಾಸ್ಕ್ ಸೇರಿದಂತೆ ಅಗತ್ಯ ಸುರಕ್ಷತಾ ಪರಿಕರಗಳನ್ನು ಕಡ್ಡಾಯವಾಗಿ ಒದಗಿಸಬೇಕು. ಆದರೆ ದೊಡ್ಡತುಪ್ಪುರು ಗ್ರಾಮದಲ್ಲಿ ಈ ಕನಿಷ್ಠ ಸುರಕ್ಷತಾ ಕ್ರಮಗಳನ್ನೂ ಪಾಲಿಸದೆ ಕಾರ್ಮಿಕರಿಂದ ಕೆಲಸ ಮಾಡಿಸಲಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
ಸುರಕ್ಷತಾ ಪರಿಕರಗಳ ಕೊರತೆಯಿಂದ ಕಾರ್ಮಿಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದ್ದು, ಈ ನಿರ್ಲಕ್ಷ್ಯಕ್ಕೆ ಗ್ರಾಮ ಪಂಚಾಯಿತಿ ಪಿಡಿಓ ಹೊಣೆಗಾರರು ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ?ಮೈಸೂರಿನಲ್ಲಿ ಜುಲೈ 5ರಂದು ‘ಲವ್ ಲೆಟರ್ಸ್ -ನಿನ್ನ ಪ್ರೀತಿಯ ನಾನು’ ನಾಟಕ ಪ್ರದರ್ಶನ
ಕಾರ್ಮಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಕಾರ್ಮಿಕರಿಗೆ ಅಗತ್ಯ ರಕ್ಷಣಾತ್ಮಕ ಪರಿಕರಗಳನ್ನು ತಕ್ಷಣವೇ ಒದಗಿಸಬೇಕು ಹಾಗೂ ಈ ಕುರಿತು ನಿರ್ಲಕ್ಷ್ಯ ವಹಿಸಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡ ಎಂ. ಶಶಿಕುಮಾರ್ ಆಗ್ರಹಿಸಿದ್ದಾರೆ.




