ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಭೀಮನಬೀಡು ಗ್ರಾಮದ 27 ವರ್ಷದ ವ್ಯಕ್ತಿಯೊಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಬರಗಿ ಶಾಖೆಯ ಹೊಂಗಳ್ಳಿ ಗಸ್ತಿನ ವ್ಯಾಪ್ತಿಯ ಊರುಕುಪ್ಪೆ ಮಾಳ ಅರಣ್ಯ ಪ್ರದೇಶದಲ್ಲಿ ಅಕ್ಟೋಬರ್ 11ರಂದು ಹುಲಿಯೊಂದು ಉರುಳಿಗೆ ಸಿಲುಕಿ ಮೃತಪಟ್ಟಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ವನ್ಯಜೀವಿ ಪ್ರಕರಣ ಸಂಖ್ಯೆ 03/2026-27ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗಾಗಿ ಶೋಧ ಕಾರ್ಯ ಕೈಗೊಂಡಿದ್ದರು.
ಪ್ರಕರಣದ ತನಿಖೆ ಮುಂದುವರಿಸಿದ್ದ ಅರಣ್ಯ ಇಲಾಖೆ ಅಧಿಕಾರಿಗಳು, ಅಕ್ಟೋಬರ್ 18ರಂದು ಗುಂಡ್ಲುಪೇಟೆ ತಾಲ್ಲೂಕಿನ ಭೀಮನಬೀಡು ಗ್ರಾಮದ ಸಿದ್ದಶೆಟ್ಟಿ ಅವರ ಪುತ್ರ ಮಾದೇಶ ಅಲಿಯಾಸ್ ಜಿಮ್ಮಿ (27) ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.
ಈ ವಿಶೇಷ ವರದಿ ಓದಿದ್ದೀರಾ? ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿ ಸಾವಿನ ಪ್ರಕರಣವನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣದ ಕುರಿತು ಮುಂದಿನ ತನಿಖೆ ನಡೆಯುತ್ತಿದೆ.





