ಚಾಮರಾಜನಗರ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ರಾಜಕೀಯ ಪಕ್ಷಗಳು ಸಂಪೂರ್ಣ ಸಹಕಾರ ನೀಡುವ ಮೂಲಕ ಪರಿಷ್ಕರಣಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪ ಮನವಿ ಮಾಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾವಚಿತ್ರವಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂಬಂಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಭಾರತ ಚುನಾವಣಾ ಆಯೋಗವು 2027ರ ಜನವರಿ 1ನ್ನು ಅರ್ಹತಾ ದಿನಾಂಕವನ್ನಾಗಿ ನಿಗದಿಪಡಿಸಿ ಮತದಾರರ ಪಟ್ಟಿ ಪರಿಷ್ಕರಣೆಗೆ ವೇಳಾಪಟ್ಟಿ ಪ್ರಕಟಿಸಿದೆ. ಇದರಂತೆ ನವೆಂಬರ್ 23ರೊಳಗೆ ಮತಗಟ್ಟೆಗಳ ಪುನರ್ ವಿಂಗಡಣೆ ಮತ್ತು ಮರುಹೊಂದಿಸುವಿಕೆ ಕಾರ್ಯ ಪೂರ್ಣಗೊಳಿಸಲಾಗುವುದು. ಡಿಸೆಂಬರ್ 1ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಡಿಸೆಂಬರ್ 1ರಿಂದ 31ರವರೆಗೆ ಮತದಾರರು ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿದ್ದು, 2027ರ ಜನವರಿ 14ರೊಳಗೆ ಅವುಗಳನ್ನು ಇತ್ಯರ್ಥಪಡಿಸಲಾಗುತ್ತದೆ. ಜನವರಿ 20ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದರು.
ಚುನಾವಣಾ ಆಯೋಗದ ನಿರ್ದೇಶನದಂತೆ ನಡೆದ ವಿಶೇಷ ಸಮಗ್ರ ಪರಿಷ್ಕರಣೆಯ ಬಳಿಕ ಕಳೆದ ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಅದರಂತೆ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಟ್ಟು 1,030 ಮತಗಟ್ಟೆಗಳಿದ್ದು, 3,92,481 ಪುರುಷರು, 4,08,341 ಮಹಿಳೆಯರು ಹಾಗೂ 36 ಇತರೆ ಮತದಾರರು ಸೇರಿದಂತೆ ಒಟ್ಟು 8,00,858 ಮತದಾರರಿದ್ದಾರೆ ಎಂದು ಮಾಹಿತಿ ನೀಡಿದರು.
ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆಗೊಳಿಸಲು ನಮೂನೆ-6, ಪಟ್ಟಿಯಿಂದ ಹೆಸರು ಕೈಬಿಡಲು ನಮೂನೆ-7 ಹಾಗೂ ಹೆಸರು ತಿದ್ದುಪಡಿ, ವಿಳಾಸ ಬದಲಾವಣೆ, ಸ್ಥಳಾಂತರ ಮತ್ತು ವಿಕಲಚೇತನ ಮತದಾರರ ಗುರುತಿಸುವಿಕೆಗಾಗಿ ನಮೂನೆ-8ರಲ್ಲಿ ಅರ್ಜಿ ಸಲ್ಲಿಸಬಹುದು. ಈ ಅರ್ಜಿಗಳನ್ನು ಸಂಬಂಧಪಟ್ಟ ಮತಗಟ್ಟೆ ಮಟ್ಟದ ಅಧಿಕಾರಿ (ಬಿಎಲ್ಒ) ಅಥವಾ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಯಾದ ತಾಲೂಕು ತಹಶೀಲ್ದಾರ್ ಕಚೇರಿಯಲ್ಲಿ ಸಲ್ಲಿಸಬಹುದಾಗಿದೆ ಎಂದರು.
2027ರ ಜನವರಿ 1ಕ್ಕೆ 18 ವರ್ಷ ಪೂರ್ಣಗೊಳ್ಳುವ ಅಥವಾ ಪೂರ್ಣಗೊಳಿಸಲಿರುವ ಯುವಜನರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ವಿಶೇಷ ಗಮನ ನೀಡಬೇಕು. ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ರಾಜಕೀಯ ಪಕ್ಷಗಳು ನೇಮಕ ಮಾಡಿರುವ ಬಿಎಲ್ಎ-2 ಪ್ರತಿನಿಧಿಗಳಿಗೂ ಸೂಕ್ತ ಮಾಹಿತಿ ನೀಡುವಂತೆ ಮನವಿ ಮಾಡಿದರು.
ಅಲ್ಲದೆ, ವಿಕಲಚೇತನ ಮತದಾರರನ್ನು ಗುರುತಿಸಿ ಅರ್ಹರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ ಕೈಗೊಳ್ಳಬೇಕು. ಕಾಡಂಚಿನ ಪ್ರದೇಶಗಳು, ಗುಡ್ಡಗಾಡು ಪ್ರದೇಶಗಳು ಹಾಗೂ ಗಿರಿಜನ ಕಾಲೋನಿಗಳಲ್ಲಿ ವಾಸಿಸುವವರು ಮತ್ತು ದುರ್ಬಲ ವರ್ಗದ ಜನರ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಈ ಪ್ರದೇಶಗಳಲ್ಲಿ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿದಿದ್ದರೆ ಅವರ ಹೆಸರು ಸೇರ್ಪಡೆಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಈ ತನಿಖಾ ವರದಿ ಓದಿದ್ದೀರಾ? ತನಿಖಾ ವರದಿ | ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರ ಬದಲಾವಣೆ ಸುತ್ತ ರಾಜಕೀಯ: ಆದೇಶವಿಲ್ಲದೆ ನೇಮಕದ ಸುದ್ದಿ ಹರಡಿದ್ದೇಕೆ?
ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಜಾಪ್ರಭುತ್ವದ ಪ್ರಕ್ರಿಯೆಯಲ್ಲಿ ಮಹತ್ವದ್ದಾಗಿದ್ದು, ಅರ್ಹ ಪ್ರತಿಯೊಬ್ಬರೂ ಮತದಾನದ ಹಕ್ಕು ಪಡೆಯುವಂತಾಗಲು ರಾಜಕೀಯ ಪಕ್ಷಗಳು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ಹೇಳಿದರು.
ಈ ವಿಶೇಷ ಲೇಖನ ಓದಿದ್ದೀರಾ? ಆರ್ಟಿಇ ಶಿಕ್ಷಣ ಹಕ್ಕೋ, ಶಾಲೆಗಳಲ್ಲಿನ ಸಾಮಾಜಿಕ ಅಂತರಕ್ಕೆ ಕಾರಣವೋ?
ಸಭೆಯಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಹೆಚ್.ಎಸ್. ತೋಂಟದಾರ್ಯಸ್ವಾಮಿ, ಬಾ.ಮ. ಕೃಷ್ಣಮೂರ್ತಿ, ಎಸ್. ರಾಮಚಂದ್ರ, ಆರ್. ಮಹದೇವು, ಸಿ.ಎಂ. ಕೃಷ್ಣ, ಸೈಯ್ಯದ್ ಅಕ್ರಮ್ಪಾಷ, ರಂಗಸ್ವಾಮಿ ಸೇರಿದಂತೆ ಇತರರು ಇದ್ದರು.



