ನೀಟ್ ಪರೀಕ್ಷೆಯಲ್ಲಿ ಪದೇ ಪದೇ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳು ನಡೆಯುತ್ತಿರುವುದನ್ನು ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ‘ನಾಗರಿಕರಾದ ನಾವು-ಚಾಮರಾಜನಗರ’ ಸಂಘಟನೆಯ ನೇತೃತ್ವದಲ್ಲಿ ಗುರುವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸಲಾಯಿತು.
ಧರಣಿಯನ್ನುದ್ದೇಶಿಸಿ ಮಾತನಾಡಿದ ಪ್ರತಿಭಟನಾಕಾರರು, ದೇಶದ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ಅತ್ಯಂತ ಮಹತ್ವದ ನೀಟ್ ಪರೀಕ್ಷೆಯಲ್ಲಿ ನಿರಂತರವಾಗಿ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳು ಬೆಳಕಿಗೆ ಬರುತ್ತಿರುವುದು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಿದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಜೊತೆಗೆ, ಪರಿಸರ ಮತ್ತು ಮಾನವ ಹಕ್ಕುಗಳ ಹೋರಾಟಗಾರ ಸೋನಮ್ ವಾಂಗ್ಚುಕ್ ದೆಹಲಿಯ ಜಂತರ್ ಮಂತರ್ನಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ 18ನೇ ದಿನಕ್ಕೆ ಕಾಲಿಟ್ಟಿದ್ದು, ಅವರ ಆರೋಗ್ಯ ಹದಗೆಡುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ತಿಳಿಸಿದರು.
ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಅವರ ಹಕ್ಕೋತ್ತಾಯಗಳ ಕುರಿತು ಸಕಾರಾತ್ಮಕ ಕ್ರಮ ಕೈಗೊಳ್ಳಬೇಕು. ಸೋನಮ್ ವಾಂಗ್ಚುಕ್ ಅವರು ತಮ್ಮ ಅಮೂಲ್ಯ ಜೀವಕ್ಕೆ ಯಾವುದೇ ಅಪಾಯ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಬಳಿಕ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಿ, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ತಡೆಗಟ್ಟಲು ಕಠಿಣ ಕ್ರಮ ಕೈಗೊಳ್ಳುವುದು, ಹೊಣೆಗಾರರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವುದು ಹಾಗೂ ಸೋನಮ್ ವಾಂಗ್ಚುಕ್ ಅವರ ಹಕ್ಕೋತ್ತಾಯಗಳನ್ನು ಸರ್ಕಾರ ಶೀಘ್ರ ಈಡೇರಿಸುವಂತೆ ಆಗ್ರಹಿಸಿದರು.
ಈ ವಿಶೇಷ ಸುದ್ದಿ ಓದಿದ್ದೀರಾ?ರಾಜ್ಯದ ಟಾಪ್-5 ಗುರಿಯತ್ತ ಚಾಮರಾಜನಗರ: ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಶಿಕ್ಷಣ ಇಲಾಖೆಯ ಮಹತ್ವದ ಯೋಜನೆ
ಧರಣಿಯಲ್ಲಿ ಹಿರಿಯ ಸಾಹಿತಿ ಕೆ. ವೆಂಕಟರಾಜು, ಪಿ. ಸಂಘಸೇನಾ, ಪುಣಜನೂರು ದೊರೆಸ್ವಾಮಿ, ಡಾ. ವೀರಭದ್ರ ನಾಯಕ, ಡಾ. ಮ.ಪು. ಪೂರ್ಣಾನಂದ, ರವಿಚಂದ್ರ ಪ್ರಸಾದ್ ಕಹಳೆ, ಅಂಬ್ರೋಸ್ ಡಿ. ಮೆಲ್ಲೊ, ಆರೀಫ್, ಮಹದೇವಯ್ಯ, ಬ್ರಿಜೇಶ್, ರಂಗಸ್ವಾಮಿ ನಾಯಕ, ಪ್ರಕಾಶ್ ಬೆಲ್ಲದ್, ಎ.ಡಿ. ಸಿಲ್ವ, ಲವಿನಾ, ನಾಗೇಶ್ ರಾಥೋಡ್ ಸೇರಿದಂತೆ ಇನ್ನಿತರರು ಇದ್ದರು.




