ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರ ಯೋಗಕ್ಷೇಮವನ್ನು ವಿಚಾರಿಸಿ, ಅವರಿಗೆ ಸರ್ಕಾರದಿಂದ ದೊರೆಯುವ ಪರಿಹಾರಧನ ಹಾಗೂ ಇತರೆ ಸೌಲಭ್ಯಗಳನ್ನು ವಿಳಂಬವಿಲ್ಲದೆ ಒದಗಿಸಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸುವಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸಕ್ರಿಯವಾಗಿ ನೆರವಾಗಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪ ಸೂಚಿಸಿದರು.
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಶ್ರೀರೂಪ, ದೌರ್ಜನ್ಯ ಪ್ರಕರಣಗಳ ಸಂತ್ರಸ್ತರನ್ನು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿಟ್ಟು, ನ್ಯಾಯಾಲಯದ ವಿಚಾರಣೆಗೆ ಹಾಜರಾಗುವ ದಿನಾಂಕದ ಮಾಹಿತಿ ನೀಡಬೇಕು. ವಿಚಾರಣೆಗೆ ಹಾಜರಾಗುವವರಿಗೆ ಸರ್ಕಾರದ ನಿಯಮಾನುಸಾರ ಪ್ರಯಾಣ ಭತ್ಯೆ ಹಾಗೂ ತುಟ್ಟಿ ಭತ್ಯೆಯನ್ನು ಕಡ್ಡಾಯವಾಗಿ ಮಂಜೂರು ಮಾಡಬೇಕು ಎಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ಮಸಣಾಪುರ ಹಾಗೂ ಹೊಂಗನೂರು ಗ್ರಾಮಗಳಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿದ ಘಟನೆಗಳನ್ನು ಸದಸ್ಯರು ಪ್ರಸ್ತಾಪಿಸಿದರು. ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಅಂಬೇಡ್ಕರ್ ಅವರಿಗೆ ಅಪಮಾನ ಮಾಡುವವರ ವಿರುದ್ಧ ಕಾನೂನು ಪ್ರಕಾರ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಸದಸ್ಯರು ಆಗ್ರಹಿಸಿದರು.
ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಆಯೋಜಿಸಲಾಗುವ ಶಾಂತಿ ಸಭೆಗಳಿಗೆ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರಿಗೂ ಆಹ್ವಾನ ನೀಡಬೇಕು ಎಂಬ ಬೇಡಿಕೆಗೆ ಸ್ಪಂದಿಸಿದ ಜಿಲ್ಲಾಧಿಕಾರಿ, ಸಂಬಂಧಿತ ತಾಲೂಕಿನ ಸಮಿತಿ ಸದಸ್ಯರನ್ನು ಕಡ್ಡಾಯವಾಗಿ ಆಹ್ವಾನಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕು ಮಟ್ಟದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಗಳು ನಿಯಮಿತವಾಗಿ ನಡೆಯುತ್ತಿಲ್ಲ ಎಂದು ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಸಭೆಗಳನ್ನು ನಿಯಮಾನುಸಾರ ಕಾಲಕಾಲಕ್ಕೆ ನಡೆಸುವಂತೆ ಉಪವಿಭಾಗಾಧಿಕಾರಿಗಳಿಗೆ ಸೂಚಿಸಲಾಗುವುದು. ಸಮಾಜ ಕಲ್ಯಾಣ ಇಲಾಖೆ ಸಭೆಗಳ ಆಯೋಜನೆ ಹಾಗೂ ಕೈಗೊಂಡ ಕ್ರಮಗಳ ಕುರಿತು ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿದರು.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ಗ್ರಾಮಮಟ್ಟದಲ್ಲಿ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂಬ ಸದಸ್ಯರ ಸಲಹೆಗೆ ಸ್ಪಂದಿಸಿದ ಜಿಲ್ಲಾಧಿಕಾರಿ, ಸಮಾಜ ಕಲ್ಯಾಣ ಇಲಾಖೆ ವ್ಯಾಪಕ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಹಾಗೂ ಆ ಕಾರ್ಯಕ್ರಮಗಳಿಗೆ ಜಾಗೃತಿ ಸಮಿತಿಯ ಸದಸ್ಯರನ್ನೂ ಆಹ್ವಾನಿಸಬೇಕು ಎಂದು ಸೂಚಿಸಿದರು.
ಪರಿಶಿಷ್ಟರು ವಾಸಿಸುವ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚುತ್ತಿರುವ ಬಗ್ಗೆ ಸದಸ್ಯರು ಆತಂಕ ವ್ಯಕ್ತಪಡಿಸಿದರು. ಯುವಜನರು ದಾರಿತಪ್ಪದಂತೆ ವಿವಿಧ ಇಲಾಖೆಗಳು ಸಮನ್ವಯದಿಂದ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು ಎಂದು ಒತ್ತಾಯಿಸಿದರು. ಬುಡಕಟ್ಟು ಜನಾಂಗ ವಾಸಿಸುವ ಪ್ರದೇಶಗಳಲ್ಲಿಯೂ ವಿಶೇಷ ಶಿಬಿರಗಳನ್ನು ಆಯೋಜಿಸುವಂತೆ ಸದಸ್ಯೆ ಕೇತಮ್ಮ ಸಲಹೆ ನೀಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಅಬಕಾರಿ ಇಲಾಖೆ ಅಕ್ರಮ ಮದ್ಯ ಮಾರಾಟದ ವಿರುದ್ಧ ಕಟ್ಟುನಿಟ್ಟಿನ ಕಾರ್ಯಾಚರಣೆ ನಡೆಸಬೇಕು. ಜೊತೆಗೆ ಜನಜಾಗೃತಿ ಸಭೆಗಳನ್ನೂ ಆಯೋಜಿಸಬೇಕು ಎಂದು ನಿರ್ದೇಶಿಸಿದರು.
ಸಭೆಯಲ್ಲಿ ಸಮಿತಿ ಸದಸ್ಯರಾದ ಅರಕಲವಾಡಿ ನಾಗೇಂದ್ರ, ಸಿದ್ದರಾಜು, ಹೆಚ್.ಬಿ. ವೃಷಬೇಂದ್ರ ಸೇರಿದಂತೆ ಹಲವು ಸದಸ್ಯರು ಮಾತನಾಡಿ, ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತರ ಮನೆಗಳಿಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಅವರ ಯೋಗಕ್ಷೇಮ ವಿಚಾರಿಸುವುದರ ಜೊತೆಗೆ ಪರಿಹಾರಧನ ಮಂಜೂರಾತಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಲು ನೆರವು ನೀಡಬೇಕು ಹಾಗೂ ನ್ಯಾಯಾಲಯದ ವಿಚಾರಣೆಗಳ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡಬೇಕು ಎಂದು ಒತ್ತಾಯಿಸಿದರು.
ಸಭೆಯಲ್ಲಿ ಸದಸ್ಯೆ ರಜಿನಿ ಕೆ. ತಿವಾರಿ ಅವರು ಗುಂಡ್ಲುಪೇಟೆ ತಾಲೂಕಿನ ಹುಲ್ಲೇಪುರ ಗ್ರಾಮದ 400 ಎಕರೆ ಪೋಡಾ ಭೂಮಿ ಹಾಗೂ ಕೃಷಿಗೆ ದಾರಿ ಕಲ್ಪಿಸುವ ಕುರಿತು ಇನ್ನೂ ಕ್ರಮವಾಗಿಲ್ಲ ಎಂದು ಪ್ರಸ್ತಾಪಿಸಿದರು. ಈ ಸಂಬಂಧ ಶೀಘ್ರ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಉತ್ತುವಳ್ಳಿ ಕೈಗಾರಿಕಾ ವಲಯದಲ್ಲಿ ಪರಿಶಿಷ್ಟ ವರ್ಗದ ಫಲಾನುಭವಿಗಳಿಗೆ ಹಂಚಿಕೆ ಮಾಡಿರುವ ಕೈಗಾರಿಕಾ ಶೆಡ್‌ಗಳ ಪ್ರದೇಶದಲ್ಲಿ ಬೀದಿ ದೀಪಗಳ ವ್ಯವಸ್ಥೆ ಕಲ್ಪಿಸಬೇಕು ಎಂಬ ಸದಸ್ಯ ಎಂ. ರಮೇಶ್ ಪ್ರಭು ಅವರ ಮನವಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಸ್ಪಂದಿಸಿ, ಸ್ಥಳ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಸಭೆಯಲ್ಲಿ ಜಿಲ್ಲೆಯಲ್ಲಿ ದಾಖಲಾಗಿರುವ ದೌರ್ಜನ್ಯ ಪ್ರಕರಣಗಳು, ಸಂತ್ರಸ್ತರಿಗೆ ಮಂಜೂರಾದ ಪರಿಹಾರಧನ, ಜೀತ ವಿಮುಕ್ತರಿಗೆ ಭೂಮಿ ವಿತರಣೆ, ಇ-ಸ್ವತ್ತು, ಸುಳ್ವಾಡಿ ಸಂತ್ರಸ್ತರಿಗೆ ಭೂಮಿ ಒದಗಿಸುವುದು ಸೇರಿದಂತೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ವಿವರವಾದ ಚರ್ಚೆ ನಡೆಯಿತು.
ಈ ಸುದ್ದಿ ಓದಿದ್ದೀರಾ?ಮೈಸೂರು ಕಲಾಮಂದಿರದಲ್ಲಿ ಅಕ್ಕ ನಾಗಲಾಂಬಿಕೆಯ ಬದುಕು ಜೀವಂತಗೊಳಿಸಿದ ಏಕವ್ಯಕ್ತಿ ನಾಟಕ
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಡಿವೈಎಸ್‌ಪಿ ಸ್ನೇಹರಾಜು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮುನಿರಾಜು, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೆಚ್.ಎಸ್. ಬಿಂದ್ಯಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರು ಇದ್ದರು.




